ಭ್ರಷ್ಟಾಚಾರದ ಆರೋಪದ ಬಗ್ಗೆ ನಿವೃತ್ತ ನ್ಯಾಯಾಧೀಶರ ತನಿಖೆ: ಅನಿಲ್ ದೇಶ್‌ಮುಖ್

Update: 2021-03-28 18:14 GMT

ಮುಂಬೈ, ಮಾ.28: ತನ್ನ ವಿರುದ್ಧದ ಭ್ರಷ್ಟಾಚಾರ ಆರೋಪದ ತನಿಖೆಯನ್ನು ನಿವೃತ್ತ ನ್ಯಾಯಾಧೀಶರು ನಡೆಸಲಿದ್ದಾರೆ ಎಂದು ಮಹಾರಾಷ್ಟ್ರ ಗೃಹ ಸಚಿವ ಅನಿಲ್ ದೇಶ್‌ಮುಖ್ ಹೇಳಿದ್ದಾರೆ.

ಗೃಹ ಸಚಿವ ಅನಿಲ್ ದೇಶ್‌ಮುಖ್ ಪೊಲೀಸರ ಕರ್ತವ್ಯದಲ್ಲಿ ಹಸ್ತಕ್ಷೇಪ ನಡೆಸುತ್ತಿದ್ದಾರೆ ಮತ್ತು ಭಾರೀ ಭ್ರಷ್ಟಾಚಾರ ನಡೆಸಿದ್ದಾರೆ ಎಂದು ಮುಂಬೈ ಪೊಲೀಸ್ ಇಲಾಖೆಯ ಮಾಜಿ ಆಯುಕ್ತ ಪರಮ್‌ಬೀರ್ ಸಿಂಗ್ ಆರೋಪಿಸಿದ್ದರಿಂದ ರಾಜ್ಯದಲ್ಲಿ ಅಧಿಕಾರದಲ್ಲಿರುವ ಮೈತ್ರಿಕೂಟಕ್ಕೆ ಮುಜುಗುರ ಉಂಟಾಗಿತ್ತು. ಆರೋಪದ ಹಿನ್ನೆಲೆಯಲ್ಲಿ ದೇಶ್‌ಮುಖ್ ಸಚಿವ ಹುದ್ದೆಗೆ ರಾಜೀನಾಮೆ ನೀಡಬೇಕೆಂದು ವಿಪಕ್ಷ ಬಿಜೆಪಿ ಆಗ್ರಹಿಸಿತ್ತು.

ಆರೋಪ ನಿರಾಕರಿಸಿದ್ದ ದೇಶ್‌ಮುಖ್, ಪರಮ್‌ಬೀರ್ ಸಿಂಗ್ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸುವುದಾಗಿ ಹೇಳಿದ್ದರು. ದೇಶ್‌ಮುಖ್‌ರನ್ನು ಸಮರ್ಥಿಸಿಕೊಂಡಿದ್ದ ಎನ್‌ಸಿಪಿ ಮುಖಂಡ ಶರದ್ ಪವಾರ್, ದೇಶ್‌ಮುಖ್ ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ ಎಂದಿದ್ದರು. ಈ ಮಧ್ಯೆ, ಪೊಲೀಸರನ್ನು ಅಧಿಕಾರದ ಹುದ್ದೆಗೆ ವರ್ಗಾಯಿಸುವ ಪ್ರಕ್ರಿಯೆಯಲ್ಲಿ ದೇಶ್‌ಮುಖ್ ಲಂಚ ಪಡೆಯುತ್ತಿರುವ ಆರೋಪಗಳಿವೆ ಎಂದು ಕೇಂದ್ರ ಕಾನೂನು ಸಚಿವ ರವಿಶಂಕರ್ ಪ್ರಸಾದ್ ಹೇಳಿದ್ದರು.

ಈ ಹಿನ್ನೆಲೆಯಲ್ಲಿ ಗುರುವಾರ ಮುಖ್ಯಮಂತ್ರಿ ಉದ್ಧವ್ ಠಾಕ್ರೆಗೆ ಪತ್ರ ಬರೆದಿದ್ದ ದೇಶ್‌ಮುಖ್, ತನ್ನ ವಿರುದ್ಧದ ಆರೋಪಗಳ ಬಗ್ಗೆ ತನಿಖೆ ನಡೆಸುವಂತೆ ಕೋರಿದ್ದರು. ರವಿವಾರ ಮಾಧ್ಯಮದವರ ಜತೆ ಮಾತನಾಡಿದ ದೇಶ್‌ಮುಖ್, ಆರೋಪದ ಬಗ್ಗೆ ನ್ಯಾಯಾಂಗ ತನಿಖೆ ನಡೆಸಲು ಮುಖ್ಯಮಂತ್ರಿ ನಿರ್ಧರಿಸಿದ್ದಾರೆ. ಹೈಕೋರ್ಟ್‌ನ ನಿವೃತ್ತ ನ್ಯಾಯಾಧೀಶರು ತನಿಖೆ ನಡೆಸಲಿದ್ದಾರೆ ಎಂದು ಹೇಳಿರುವುದಾಗಿ ವರದಿಯಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News