ಅಶ್ಲೀಲ ಸಿಡಿ ಪ್ರಕರಣದ ತನಿಖೆಗೆ ರಚಿಸಿರುವ ಎಸ್‍ಐಟಿ ರದ್ದು ಕೋರಿ ಹೈಕೋರ್ಟ್ ಗೆ ಪಿಐಎಲ್

Update: 2021-03-29 13:04 GMT

ಬೆಂಗಳೂರು, ಮಾ.29: ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿಗೆ ಸಂಬಂಧಿಸಿದ್ದು ಎನ್ನಲಾದ ಅಶ್ಲೀಲ ವೀಡಿಯೊ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಗೆ ರಚಿಸಿರುವ ವಿಶೇಷ ತನಿಖಾ ತಂಡ(ಎಸ್‍ಐಟಿ) ರದ್ದುಪಡಿಸಬೇಕು ಎಂದು ಕೋರಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಕೆಯಾಗಿದೆ. ಅರ್ಜಿ ಇನ್ನಷ್ಟೇ ವಿಚಾರಣೆಗೆ ನಿಗದಿಯಾಗಬೇಕಿದೆ.

ಈ ಕುರಿತು ನಗರದ ಸಾಮಾಜಿಕ ಕಾರ್ಯಕರ್ತೆ ಹಾಗೂ ವಕೀಲೆ ಗೀತಾ ಮಿಶ್ರಾ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದು, ಅರ್ಜಿಯಲ್ಲಿ, ರಾಜ್ಯ ಸರಕಾರದ ಗೃಹ ಇಲಾಖೆ, ನಗರ ಪೊಲೀಸ್ ಆಯುಕ್ತ, ರಾಜ್ಯ ಪೊಲೀಸ್ ಮಹಾನಿರ್ದೇಶಕ, ಎಸ್‍ಐಟಿ, ಕಬ್ಬನ್ ಪಾರ್ಕ್ ಹಾಗೂ ಸದಾಶಿವನಗರ ಠಾಣೆ ಪೊಲೀಸರನ್ನು ಪ್ರತಿವಾದಿಗಳನ್ನಾಗಿ ಮಾಡಲಾಗಿದೆ.

ರಮೇಶ್ ಜಾರಕಿಹೊಳಿ ಹಿತಕ್ಕಾಗಿ ನಿಯಮಬಾಹಿರವಾಗಿ ಎಸ್‍ಐಟಿ ರಚಿಸಲಾಗಿದೆ. ಸರಕಾರದ ಗೆಜೆಟ್ ಆದೇಶವಿಲ್ಲದೇ ನಗರ ಪೊಲೀಸ್ ಆಯುಕ್ತರು ಮಾ.13ರಂದು ಇಬ್ಬರು ಐಪಿಎಸ್ ಅಧಿಕಾರಿಗಳು ಸೇರಿ 6 ಮಂದಿ ಪೊಲೀಸ್ ಅಧಿಕಾರಿಗಳ ವಿಶೇಷ ತನಿಖಾ ತಂಡ ರಚಿಸಿದ್ದಾರೆ. ಇದು ಅಪರಾಧ ಪ್ರಕ್ರಿಯಾ ಸಂಹಿತೆ-1973 ಹಾಗೂ ಕರ್ನಾಟಕ ಪೊಲೀಸ್ ಕಾಯ್ದೆಯ ನಿಯಮಗಳಿಗೆ ವಿರುದ್ಧವಾಗಿದೆ. ಹೀಗಾಗಿ ಎಸ್‍ಐಟಿ ರದ್ದುಗೊಳಿಸಬೇಕು ಎಂದು ಅರ್ಜಿದಾರರು ಕೋರಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News