ರಾಜ್ಯ ಸರಕಾರದ ಅಭಿವೃದ್ಧಿ ಕಾರ್ಯಗಳೆ ಬಿಜೆಪಿ ಅಭ್ಯರ್ಥಿಗೆ ಶ್ರೀರಕ್ಷೆ: ಯಡಿಯೂರಪ್ಪ
ಬೆಳಗಾವಿ, ಮಾ.30: ರಾಜ್ಯ ಸರಕಾರವು ಮಾಡಿರುವ ಅಭಿವೃದ್ಧಿ ಕಾರ್ಯಗಳೆ ಬೆಳಗಾವಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮಂಗಳಾ ಅಂಗಡಿ ಅವರ ಗೆಲುವಿಗೆ ಶ್ರೀರಕ್ಷೆಯಾಗಿದೆ. ನಾವು ಬೇರೆ ಪಕ್ಷಗಳ ಅಭ್ಯರ್ಥಿಗಳ ಹೆಸರನ್ನೆ ಪ್ರಚಾರದ ಸಂದರ್ಭದಲ್ಲಿ ಪ್ರಸ್ತಾವ ಮಾಡುವುದಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.
ಮಂಗಳವಾರ ನಗರದ ಸನ್ಮಾನ್ ಹೊಟೇಲ್ ಎದುರು ಇರುವ ಗಾಂಧಿ ಭವನದಲ್ಲಿ ಆಯೋಜಿಸಲಾಗಿದ್ದ ಬಿಜೆಪಿ ಕಾರ್ಯಕರ್ತರ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಕೋವಿಡ್‍ನಂತಹ ಸಂದಿಗ್ಧ ಪರಿಸ್ಥಿತಿಯಲ್ಲೂ ಬಿಜೆಪಿ ಸರಕಾರ ಅತ್ಯುತ್ತಮ ಬಜೆಟ್ ನೀಡಿದೆ. ಮಹಿಳೆಯರ ಅಭ್ಯುದಯಕ್ಕಾಗಿ ಹೆಚ್ಚಿನ ಒತ್ತು ನೀಡಲಾಗಿದೆ ಎಂದರು.
ಈ ಚುನಾವಣೆಯಲ್ಲಿ ಮಂಗಳಾ ಅಂಗಡಿ ಅವರ ಚುನಾವಣೆ ಎಂದು ಭಾವಿಸದೆ, ನಮ್ಮ ಚುನಾವಣೆ ಎಂದು ಪ್ರತಿಯೊಬ್ಬ ಕಾರ್ಯಕರ್ತರು ಪರಿಗಣಿಸಬೇಕು. ವಿಶೇಷವಾಗಿ ಶೇ.100ಕ್ಕೆ 90ರಷ್ಟು ಮಹಿಳೆಯರು ಈ ಮತದಾನದ ಪ್ರಕ್ರಿಯೆಯಲ್ಲಿ ಭಾಗವಹಿಸಿದರೆ, ಮಂಗಳಾ ಅಂಗಡಿ ಅವರು ಕನಿಷ್ಠ ಎರಡೂವರೆ ಲಕ್ಷ ಮತಗಳ ಅಂತರದಿಂದ ಗೆಲುವು ಸಾಧಿಸುವುದರಲ್ಲಿ ಅನುಮಾನವೇ ಇಲ್ಲ ಎಂದು ಯಡಿಯೂರಪ್ಪ ಹೇಳಿದರು.
ಬಿಜೆಪಿ ಕಾರ್ಯಕರ್ತರು ಕ್ಷೇತ್ರದ ಎಲ್ಲ ಗ್ರಾಮಗಳಿಗೂ ತೆರಳಿ, ಮತದಾರರ ಮನೆಗೆ ಬಾಗಿಲಿಗೆ ಸರಕಾರದ ಅಭಿವೃದ್ಧಿ ಕೆಲಸಗಳ ಬಗ್ಗೆ ಮಾಹಿತಿ ಒದಗಿಸಬೇಕು. ಸುರೇಶ್ ಅಂಗಡಿಯವರು ಬೀದಿ ಬೀದಿಯಲ್ಲಿ ಓಡಾಡಿ ಬೆಳಗಾವಿ ಜಿಲ್ಲೆಯಲ್ಲಿ ಪಕ್ಷವನ್ನು ಕಟ್ಟಿ ಬೆಳೆಸಲು ಶ್ರಮಿಸಿದ್ದಾರೆ. ಜೊತೆಗೆ, ರೈಲ್ವೆ ಸಚಿವರಾದ ಬಳಿಕ ರಾಜ್ಯಕ್ಕೆ ಹಲವಾರು ರೈಲ್ವೆ ಯೋಜನೆಗಳನ್ನು ಜಾರಿಗೆ ತಂದಿದ್ದರು ಎಂದು ಅವರು ಸ್ಮರಿಸಿದರು.
ಎಲ್ಲರಿಗೂ ಮನೆ: ರಾಜ್ಯ ಸರಕಾರದ ಬೊಕ್ಕಸಕ್ಕೆ ಹೊರೆಯಾದರೂ ಚಿಂತೆ ಇಲ್ಲ. ರಾಜ್ಯದಲ್ಲಿ ಬೆಳಗಾವಿ ಸೇರಿದಂತೆ ಅತಿವೃಷ್ಟಿಯಿಂದ ಮನೆಗಳನ್ನು ಕಳೆದುಕೊಂಡ ಪ್ರತಿಯೊಬ್ಬರಿಗೂ ಮನೆಗಳನ್ನು ಕಟ್ಟಿಸಿಕೊಡಲಾಗುವುದು ಎಂದು ಮುಖ್ಯಮಂತ್ರಿ ಭರವಸೆ ನೀಡಿದರು.
ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ ಕಟೀಲ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಶಶಿಕಲಾ ಜೊಲ್ಲೆ, ರಾಜ್ಯ ಬಿಜಿಪಿ ಕಾರ್ಯದರ್ಶಿ ಮಹೇಶ್ ಟೆಂಗಿನಕಾಯಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.