×
Ad

ಬಸವಕಲ್ಯಾಣ ಕ್ಷೇತ್ರದಲ್ಲಿ ಬಿಜೆಪಿ- ಜೆಡಿಎಸ್ ಒಳ ಒಪ್ಪಂದ: ಸಿದ್ದರಾಮಯ್ಯ

Update: 2021-03-30 20:51 IST

ಕಲಬುರಗಿ, ಮಾ.30: ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಅವರಿಗೆ ಸಂಬಂಧಿಸಿದ್ದು ಎನ್ನಲಾದ ಅಶ್ಲೀಲ ವೀಡಿಯೊ ಪ್ರಕರಣದಲ್ಲಿ ನಿಜಾಂಶ ಹೊರ ಬರಬೇಕಾದರೆ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳ ಮೇಲುಸ್ತುವಾರಿಯಲ್ಲಿಯೇ ತನಿಖೆಯಾಗಬೇಕೆಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. 

ಮಂಗಳವಾರ ಕಲಬುರಗಿ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಶ್ಲೀಲ ವೀಡಿಯೊದಲ್ಲಿ ಇರುವ ಯುವತಿ ಎನ್ನಲಾದ ಸಂತ್ರಸ್ತೆಯು ಸಿಜೆ ಅವರಿಗೆ ಈಗಾಗಲೇ ಪತ್ರ ಬರೆದಿದ್ದಾರೆ. ಈ ಬಗ್ಗೆ ನ್ಯಾಯಮೂರ್ತಿಗಳ ತೀರ್ಮಾನ ಏನಾಗಿರುತ್ತದೆ ಎಂಬುದನ್ನು ಕಾದುನೋಡಬೇಕಾಗಿದೆ ಎಂದರು.

ಬೆಳಗಾವಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಬೆಂಗಾವಲು ವಾಹನದ ಮೇಲೆಯೇ ಚಪ್ಪಲಿ, ಕಲ್ಲು ತೂರಾಟ ನಡೆಸಿರುವುದು ಪ್ರಜಾಪ್ರಭುತ್ವ ವಿರೋಧಿ ನಡೆಯಾಗಿದೆ. ಬಿಜೆಪಿ ಸರಕಾರಕ್ಕೆ ಸಂವಿಧಾನ ಮೇಲೆಯಾಗಲಿ, ಪ್ರಜಾಪ್ರಭುತ್ವದ ಮೇಲೆಯಾಗಲಿ ನಂಬಿಕೆಯನ್ನಿಟ್ಟುಕೊಂಡಿಲ್ಲ ಎಂದು ಆರೋಪಿಸಿದರು.

ಅಶ್ಲೀಲ ವೀಡಿಯೊ ಪ್ರಕರಣದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಹೆಸರು ಪ್ರಸ್ತಾಪವಾಗಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ಡಿಕೆಶಿ ಅವರೆ ಅದನ್ನು ಅಲ್ಲಗಳೆದಿದ್ದಾರೆ ಎಂದರು. 

ಬಸವಕಲ್ಯಾಣ ಕ್ಷೇತ್ರದಲ್ಲಿ ಬಿಜೆಪಿ, ಜೆಡಿಎಸ್ ಒಳ ಒಪ್ಪಂದ ಮಾಡಿಕೊಂಡಿದೆ. ಬಿಜೆಪಿಗೆ ಅನುಕೂಲವಾಗಲಿ ಎಂದು ಮುಸ್ಲಿಂ ಅಭ್ಯರ್ಥಿಗೆ ಜೆಡಿಎಸ್ ಟಿಕೆಟ್ ನೀಡಿದೆ ಎಂದ ಅವರು, ರಾಜ್ಯದಲ್ಲಿ ಕೊರೋನ ನಿಯಂತ್ರಣಕ್ಕೆ ಸರಕಾರ ಬಿಗಿ ಕ್ರಮಗಳನ್ನು ಕೈಗೊಳ್ಳಬೇಕು. ಇಲ್ಲದೇ ಇದ್ದಲ್ಲಿ ಸೋಂಕು ಹೆಚ್ಚಾಗಿ ಜನ ಅಪಾಯಕ್ಕೆ ಸಿಲುಕುವ ಆತಂಕವೂ ಇದೆ ಎಂದು ಅವರು ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News