ಹೆಣ್ಣು ಮಕ್ಕಳು ಸಾಧನೆಯ ಹಾದಿಯಲ್ಲಿ ಸೋಲು ಗೆಲುವನ್ನು ಸಕಾರಾತ್ಮಕವಾಗಿ ಸ್ವೀಕರಿಸಿ: ಉಮಾ ಮಹಾದೇವ್

Update: 2021-04-03 18:16 GMT

ಚಿಕ್ಕಮಗಳೂರು, ಎ.3: ಹೆಣ್ಣು ಮಕ್ಕಳು ಕ್ರೀಡಾಕೂಟ ಸೇರಿದಂತೆ ಯಾವುದೇ ಕ್ಷೇತ್ರದಲ್ಲಿ ಸಾಧನೆಯ ಹುಮ್ಮಸ್ಸಿನಿಂದ ಸಕ್ರೀಯವಾಗಿ ಭಾಗವಹಿಸುವುದು ಅತೀಮುಖ್ಯ. ಸಾಧನೆಯ ಹಾದಿಯಲ್ಲಿ ಸೋಲು ಗೆಲುವು ಎರಡನ್ನು ಸಮಾನವಾಗಿ ಸ್ವೀಕರಿಸಿದಾಗ ಮುಂದಿನ ಗುರಿಯೆಡೆಗೆ ಆತ್ಮವಿಶ್ವಾಸದಿಂದ ಮುನ್ನುಗ್ಗಬಹುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಪ್ರಧಾನ ಕಾರ್ಯದರ್ಶಿ ಉಮಾ ಮಹಾದೇವ್ ಕಿವಿ ಮಾತು ಹೇಳಿದ್ದಾರೆ.

ನಗರದ ಸುಭಾಷ್ ಚಂದ್ರಬೋಸ್ ಜಿಲ್ಲಾ ಆಟದ ಮೈದಾನದಲ್ಲಿ ಜಿಲ್ಲಾಡಳಿತ, ಜಿಪಂ, ತಾಪಂ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ, ಜಿಲ್ಲಾ ಮತ್ತು ತಾಲೂಕು ಸ್ರೀ ಶಕ್ತಿ ಒಕ್ಕೂಟ ಇವರ ಸಂಯುಕ್ತಾಶ್ರಯದಲ್ಲಿ ಭಾರತ ಸ್ವಾತಂತ್ರ್ಯದ ಅಮೃತ ಮಹೋತ್ಸವ ವರ್ಷ, ಕನ್ನಡ ಕಾಯಕ ವರ್ಷ ಹಾಗೂ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ ಅಂಗವಾಗಿ ನಡೆದ ಹೆಣ್ಣು ಮಕ್ಕಳ ಗ್ರಾಮೀಣ ಕ್ರೀಡಾ ಕೂಟ ಉದ್ಘಾಟಿಸಿ ಮಾತನಾಡಿದರು.

ಪ್ರತೀ ಜಿಲ್ಲೆಯಲ್ಲೂ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆಯ ಪ್ರಯುಕ್ತ ಹೆಣ್ಣು ಮಕ್ಕಳಿಗಾಗಿ ಕ್ರೀಡಾಕೂಟವನ್ನು ಆಯೋಜಿಸಲಾಗುತ್ತಿದೆ. ಚಿಕ್ಕಮಗಳೂರು ಜಿಲ್ಲೆಯಲ್ಲಿ ಪ್ರತೀ ತಿಂಗಳು ಒಂದು ಕ್ರೀಡಾಕೂಟವನ್ನು ಹೆಣ್ಣು ಮಕ್ಕಳಿಗಾಗಿ  ಮಾಡುತ್ತಿರುವುದು ಖುಷಿಯ ವಿಷಯವಾಗಿದೆ ಎಂದ ಅವರು, ಹೆಣ್ಣು ಮಕ್ಕಳ ಪ್ರತಿಭೆಗೆ ಪ್ರೋತ್ಸಾಹ ನೀಡುವ ಉದ್ದೇಶದಿಂದ ಸರಕಾರ ಅನೇಕ ಹೋಜನೆಗಳನ್ನು ಜಾರಿ ಮಾಡಿದ್ದು, ಸ್ಥಳೀಯವಾಗಿ ಸಂಘ ಸಂಸ್ಥೆಗಳು ಹೆಣ್ಣು ಮಕ್ಕಳ ಏಳಿಗೆಗೆ ಉತ್ತಮ ವೇದಿಕೆಯನ್ನು ಕಲ್ಪಿಸಿಕೊಡಬೇಕು ಎಂದು ಹೇಳಿದರು.

ಕ್ರೀಡೆಯಲ್ಲಿ ಸೋಲು-ಗೆಲುವು ಸಹಜವಾಗಿದ್ದು, ಜೀವನದಲ್ಲಿ ಈ ಎರಡು ಅಂಶಗಳನ್ನು ಸಮಾನಾಗಿ ಸ್ವೀಕರಿಸಿದರೆ ಮುಂದಿನ ದಿನಗಳಲ್ಲಿ ಯಶಸ್ಸು ಸಿಗುತ್ತದೆ. ಆದ್ದರಿಂದ ಹೆಣ್ಣು ಮಕ್ಕಳಿಗೆ ಸಂಬಂಧಿಸಿದಂತಹ ಕ್ರೀಡೆಗಳು, ಸಾಂಸೃತಿಕ ಕಾರ್ಯಕ್ರಮಗಳು, ಪ್ರಬಂಧ ಸ್ಪರ್ಧೆಗಳಂತಹ ಕಾರ್ಯಕ್ರಮಗಳನ್ನು ಆಯೋಜಿಸುವುದರಿಂದ ಅವರ ಪ್ರತಿಭೆಯನ್ನು ಹೊರಹಾಕಲು ಸಹಕಾರಿಯಾಗುತ್ತದೆ ಎಂದು ತಿಳಿಸಿದರು.

ಹೆಣ್ಣು ಮಕ್ಕಳು ಕ್ರೀಡಾಕೂಟದಲ್ಲಿ ಭಾಗವಹಿಸುವುದರಿಂದ ಮಾನಸಿಕವಾಗಿ ಮತ್ತು ದೈಹಿಕವಾಗಿ ಸದೃಢರಾಗುವುದರ ಜೊತೆಗೆ ಜೀವನದಲ್ಲಿ ಎದುರಾಗುವಂತಹ ಸಮಸ್ಯೆಗಳನ್ನು ಧೈರ್ಯದಿಂದ ಎದುರಿಸಲು, ಆತ್ಮವಿಶ್ವಾಸವನ್ನು ಬೆಳೆಸಿಕೊಳ್ಳು ಕ್ರೀಡಾಕೂಟಗಳು ಸಹಕರಿಯಾಗಲಿವೆ ಎಂದು ಹೇಳಿದರು.

ಜಿಪಂ ಮುಖ್ಯ ಕಾರ್ಯ ನಿರ್ವಣಾಧಿಕಾರಿ ಎಸ್.ಪೂವಿತಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ತಾಲೂಕು ಮಟ್ಟದಿಂದ ಕ್ರೀಡೆಯನ್ನು ನಡೆಸಿ ಆಯ್ಕೆಯಾದ ಹೆಣ್ಣು ಮಕ್ಕಳನ್ನು ಜಿಲ್ಲಾ ಮಟ್ಟಕ್ಕೆ ಕರೆತಂದು ವಿಜೇತರಾದವರನ್ನು ಗುರುತಿಸಿ ರಾಜ್ಯ ಮಟ್ಟದಲ್ಲಿ ಭಾಗವಹಿಸುವಂತೆ ಪ್ರೋತ್ಸಾಹಿಸಬೇಕು. ಗ್ರಾಮೀಣ ಭಾಗದ ಹೆಣ್ಣು ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿ ಕ್ರೀಡೆಗಳಲ್ಲಿ ಭಾಗವಹಿಸುವಂತೆ ಮಾಡಬೇಕು. ಹೆಣ್ಣು ಮಕ್ಕಳ ಮೇಲೆ ನಡೆಯುವ ದೌರ್ಜನ್ಯ, ಕಿರುಕುಳವನ್ನು ತಡೆಗಟ್ಟುವುದರ ಮೂಲಕ ಅವರನ್ನು ಬಲಿಷ್ಠರನ್ನಾಗಿ ಮಾಡಬೇಕು ಎಂದ ಅವರು, ಕೊವೀಡ್-19ರ ಹಿನ್ನೆಲೆಯಲ್ಲಿ ಸಾಮಾಜಿಕ ಅಂತರವನ್ನು ಕಾಯ್ದುಕೊಂಡು ಕ್ರೀಡೆಯಲ್ಲಿ ಭಾಗವಹಿಸುವಂತೆ ಕರೆ ನೀಡಿದರು.

ಎರಡನೇ ಹೆಚ್ಚುವರಿ ಸಿವಿಲ್ ನ್ಯಾಯಧೀಶೆ ಹಾಗೂ ಬಾಲ ನ್ಯಾಯ ಮಂಡಳಿ ಅಧ್ಯಕ್ಷೆ ಅರುಣಾ ಕುಮಾರಿ ಮಾತನಾಡಿ, ದೇಹ ಸದೃಢವಾಗಿದ್ದಾರೆ ಮನಸ್ಸು ಕೂಡ ಸದೃಡವಾಗಿರುತ್ತದೆ, ಹೆಣ್ಣು ಮಕ್ಕಳು ಕ್ರೀಡೆಯಂತಹ ಚಟುವಟಿಕೆಯಲ್ಲಿ ಹೆಚ್ಚು ಭಾಗವಹಿಸುವುದರಿಂದ ಆತ್ಮವಿಶ್ವಾಸ ಹೆಚ್ಚುತ್ತದೆ. ಬಾಲ್ಯ ವಿವಾಹ, ಅತ್ಯಾಚಾರ, ದೌರ್ಜನ್ಯಗಳಂತಹ ಪ್ರಕರಣಗಳನ್ನು ಕೊನೆಗಾಣಿಸಲು ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆಯನ್ನು ಆಚರಿಸಲಾಗುತ್ತಿದೆ ಎಂದ ಅವರಯ ಬಾಲ ನ್ಯಾಯ ಮಂಡಳಿಯು ದೌರ್ಜನ್ಯಕ್ಕೆ ಒಳಗಾದ ಮಹಿಳೆ ಮತ್ತು ಮಕ್ಕಳಿಗೆ ಉಚಿತ ಕಾನೂನು ಸೇವೆಯನ್ನು ಒದಗಿಸುವುದರೊಂದಿಗೆ ಆರೋಪಿಗಳ ವಿರುದ್ಧ ತಕ್ಷಣ ಕ್ರಮ ಕೈಗೊಳ್ಳುವ ಕೆಲಸ ಮಾಡುತ್ತಿದೆ ಎಂದರು.

ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಬಿ.ಮಲ್ಲಿಕಾರ್ಜುನ್, ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಮಲ್ಲೇಶಪ್ಪ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕಿ ಡಾ.ಮಂಜುಳ ಹುಲ್ಲಹಳ್ಳಿ, ಜಿಲ್ಲಾ ಮತ್ತು ತಾಲ್ಲೂಕು ಸ್ತ್ರೀಶಕ್ತಿ ಒಕ್ಕೂಟದ ಅಧ್ಯಕ್ಷೆ ದಿವ್ಯಾ ದೇವರಾಜ್, ತಾಪಂ ಇಒ ಎಚ್.ಕೆ.ತಾರನಾಥ್, ಬಿಇಒ ಮಂಜುನಾಥ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News