×
Ad

ಸಿಡಿ ಪ್ರಕರಣ: ರಾಜ್ಯ ಸರಕಾರ, ಎಸ್‍ಐಟಿಗೆ ಹೈಕೋರ್ಟ್ ನೋಟಿಸ್; ತನಿಖಾ ವರದಿ ಸಲ್ಲಿಸಲು ಸೂಚನೆ

Update: 2021-04-05 18:53 IST

ಬೆಂಗಳೂರು, ಎ.5: ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿಗೆ ಸಂಬಂಧಿಸಿದ ಸಿಡಿ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿ ಸಂಬಂಧ ಹೈಕೋರ್ಟ್ ರಾಜ್ಯ ಸರಕಾರ, ಗೃಹ ಇಲಾಖೆ ಹಾಗೂ ಎಸ್‍ಐಟಿಗೆ ನೋಟಿಸ್ ಜಾರಿ ಮಾಡಿದೆ.

ಈ ಸಂಬಂಧ ವಕೀಲ ಎಸ್.ಉಮೇಶ್ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕ ನೇತೃತ್ವದ ವಿಭಾಗೀಯ ನ್ಯಾಯಪೀಠ, ರಾಜ್ಯ ಸರಕಾರ, ಎಸ್‍ಐಟಿ ಸೇರಿ ಎಲ್ಲ ಪ್ರತಿವಾದಿಗಳಿಗೆ ನೋಟಿಸ್ ಜಾರಿ ಮಾಡಿ, ವಿಚಾರಣೆಯನ್ನು ಎ.17ಕ್ಕೆ ಮುಂದೂಡಿತು.

ಇದೇ ವೇಳೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‍ಐಟಿ ತನಿಖಾ ವರದಿಯನ್ನು ಮುಚ್ಚಿದ ಲಕೋಟೆಯಲ್ಲಿ ಮುಂದಿನ ವಿಚಾರಣೆ ವೇಳೆ ಸಲ್ಲಿಸುವಂತೆ ನಿರ್ದೇಶಿಸಿತು.

ಅರ್ಜಿಯಲ್ಲಿ ಏನಿದೆ: ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ ದಿನದಿಂದ ದಿನಕ್ಕೆ ಹಾದಿ ತಪ್ಪುತ್ತಿದೆ. ಇದೇ ವಿಚಾರವಾಗಿ ಸದನದಲ್ಲೂ ಚರ್ಚೆ ಮಾಡಿ ಅಮೂಲ್ಯ ಸಮಯ ವ್ಯರ್ಥ ಮಾಡಲಾಗಿದೆ. ಆಡಳಿತ ಮತ್ತು ಪ್ರತಿಪಕ್ಷಗಳು ಪರಸ್ಪರ ಆರೋಪ ಪ್ರತ್ಯಾರೋಪದಲ್ಲಿ ತೊಡಗಿವೆ. ರಾಜ್ಯ ಸರಕಾರದ ಆಡಳಿತ ಯಂತ್ರವೂ ದುರ್ಬಲಗೊಂಡಿದೆ. ಈ ಪ್ರಕರಣ ರಾಜಕೀಯ ಆಯಾಮ ಪಡೆದುಕೊಂಡಿರುವುದರಿಂದ ಎಸ್‍ಐಟಿ ಹಾಗೂ ಕಬ್ಬನ್ ಪಾರ್ಕ್ ಠಾಣೆ ಪೊಲೀಸರು ಕೂಡ ಸೂಕ್ತ ತನಿಖೆ ನಡೆಸುತ್ತಿಲ್ಲ. ಹೀಗಾಗಿ, ಸಮರ್ಪಕ ತನಿಖೆ ನಡೆಸಲು ಮತ್ತು ತಪ್ಪಿತಸ್ಥರನ್ನು ಗುರುತಿಸಲು ಪ್ರಕರಣವನ್ನು ಸಿಬಿಐಗೆ ವಹಿಸಬೇಕು.

ಇಲ್ಲವೇ, ಪ್ರಕರಣದ ತನಿಖೆಗೆಂದೇ ವಿಶೇಷ ತನಿಖಾ ತಂಡ ರಚಿಸಲು ಕೇಂದ್ರ ಸರಕಾರಕ್ಕೆ ಆದೇಶಿಸಬೇಕು. ತನಿಖೆಯನ್ನು ಹೈಕೋರ್ಟ್ ಮೇಲ್ವಿಚಾರಣೆ ಮಾಡಬೇಕು. ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಧ್ಯಮಗಳು ಪ್ರತಿದಿನ ತಮ್ಮ ಇಚ್ಛಾನುಸಾರ ಸುದ್ದಿ ಪ್ರಸಾರ ಮಾಡುತ್ತಿದ್ದು, ಮಕ್ಕಳ ಮಾನಸಿಕ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತಿದೆ. ಹೀಗಾಗಿ, ಸಿಡಿ ಪ್ರಕರಣದ ಸಂಬಂಧ ಸುದ್ದಿ ಪ್ರಸಾರ ಮಾಡದಂತೆ ಮಾಧ್ಯಮಗಳಿಗೂ ನಿರ್ದೇಶಿಸಬೇಕು ಎಂದು ಅರ್ಜಿದಾರರು ಮನವಿ ಮಾಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News