ಪ್ರಧಾನಿ ಮೋದಿ ಮತ್ತೊಮ್ಮೆ ಸುಳ್ಳು ಹೇಳಿಕೊಂಡು ತಿರುಗಾಡುತ್ತಿದ್ದಾರೆ: ಮಲ್ಲಿಕಾರ್ಜುನ ಖರ್ಗೆ ಕಿಡಿ
ಬೆಂಗಳೂರು, ಎ.5: ಬಾಂಗ್ಲಾದೇಶದ ಸ್ವಾತಂತ್ರ್ಯಕ್ಕಾಗಿ ತಾನು ಹೋರಾಟ ಮಾಡಿ ಜೈಲು ಸೇರಿದ್ದೆ ಎನ್ನುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಮತ್ತೊಮ್ಮೆ ಸುಳ್ಳು ಹೇಳಿಕೊಂಡು ತಿರುಗಾಡುತ್ತಿದ್ದಾರೆ. ಬಾಂಗ್ಲಾದೇಶದ ಸ್ವಾತಂತ್ರ್ಯ ಹೋರಾಟದಲ್ಲಿ ಅವರು ಪಾಲ್ಗೊಂಡೆ ಇರಲಿಲ್ಲ ಎಂದು ರಾಜ್ಯಸಭಾ ಸದಸ್ಯ ಮಲ್ಲಿಕಾರ್ಜುನ ಖರ್ಗೆ ಕಿಡಿಗಾರಿದರು.
ಸೋಮವಾರ ನಗರದ ಕ್ವೀನ್ಸ್ ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಯಲ್ಲಿ ಮಾಜಿ ಉಪ ಪ್ರಧಾನಿ ಡಾ.ಬಾಬು ಜಗಜೀವನ್ ರಾಮ್ ಅವರ 114ನೆ ಜನ್ಮ ದಿನಾಚರಣೆ ಅಂಗವಾಗಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಬಾಂಗ್ಲಾ ದೇಶದ ಸ್ವಾತಂತ್ರ್ಯ ಹೋರಾಟದಲ್ಲಿ ಪಾಲ್ಗೊಂಡು ಜೈಲಿಗೆ ಹೋಗಿದ್ದೆ ಎಂದು ಹೇಳಿದ್ದಾರೆ. ಸದ್ಯ ನಮ್ಮ ದೇಶದ ಸ್ವಾತಂತ್ರ್ಯ ಹೋರಾಟದಲ್ಲಿಯೂ ಪಾಲ್ಗೊಂಡಿದ್ದೆ ಎಂದು ಹೇಳಲಿಲ್ಲ ಅಷ್ಟೇ ಎಂದು ವ್ಯಂಗ್ಯವಾಡಿದ ಅವರು, ಪ್ರಧಾನಿ ಮೋದಿ, ಬಿಜೆಪಿ ಜಾತಿ ಜಾತಿಗಳ ನಡುವೆ ದ್ವೇಷ ಮೂಡಿಸುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಧರ್ಮವನ್ನು ಮುಂದಿಟ್ಟುಕೊಂಡು ಅಧಿಕಾರಕ್ಕೆ ಬಂದವರು. ದೇಶದ ಅಭಿವೃದ್ಧಿಯ ಬಗ್ಗೆ ಎಲ್ಲೂ ಮಾತನಾಡಲಿಲ್ಲ ಎಂದು ಟೀಕಿಸಿದ ಮಲ್ಲಿಕಾರ್ಜುನ ಖರ್ಗೆ, ದೇಶವನ್ನ ಅಭಿವೃದ್ಧಿ ಸೂಚ್ಯಂಕದಲ್ಲಿ ಮೇಲ್ಮಟ್ಟಕ್ಕೆ ತೆಗೆದುಕೊಂಡು ಹೋಗುವ ಬದಲು ಇವರ ದುರಾಡಳಿತದಿಂದಾಗಿ ಕೆಳಮಟ್ಟಕ್ಕೆ ತೆಗೆದುಕೊಂಡು ಹೋಗುತ್ತಿದ್ದಾರೆ ಎಂದರು.
ಚುನಾವಣೆ ನಡೆಯುತ್ತಿರುವ ರಾಜ್ಯಗಳಲ್ಲಿ, ಕ್ಷೇತ್ರಗಳಲ್ಲಿ ಸಂಘಪರಿವಾರದ ಸಿದ್ಧಾಂತವನ್ನು ಜಾರಿ ಮಾಡುತ್ತಿದ್ದಾರೆ. ಸಂಘಪರಿವಾರದ ಸಿದ್ಧಾಂತ ವಿಷ ಇದ್ದಂತೆ. ಒಂದು ತೊಟ್ಟು ಸೇವಿಸಿದರೂ ಸಾಕು ಎಲ್ಲವೂ ಮುಗಿದಂತೆ. ಅದೇ ರೀತಿ, ದೇಶದ ಜನ ಒಮ್ಮೆ ಅವಕಾಶ ಕೊಟ್ಟರು ಎಲ್ಲ ಮುಗಿದಂತೆ ಆಗುತ್ತಿದೆ ಎಂದು ಅವರು ಬೇಸರ ವ್ಯಕ್ತಪಡಿಸಿದರು.
ನಾವು ದೇಶವನ್ನು ಒಗ್ಗೂಡಿಸುವ ಪ್ರಯತ್ನ ಮಾಡುತ್ತಿದ್ದೇವೆ. ಆದರೆ, ಬಿಜೆಪಿಯವರು ತಮ್ಮ ಸಿದ್ಧಾಂತದಿಂದ ದೇಶವನ್ನು ಒಡೆದು ಹಾಕುತ್ತಿದ್ದಾರೆ. ಇವರು ಸಂವಿಧಾನ, ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಒಪ್ಪುವುದಿಲ್ಲ. ದೇಶದ ಜನ ಒಂದಲ್ಲ ಒಂದು ದಿನ ಇವರಿಗೆ ಬುದ್ಧಿ ಕಲಿಸುತ್ತಾರೆ ಎಂದು ಮಲ್ಲಿಕಾರ್ಜುನ ಖರ್ಗೆ ಎಚ್ಚರಿಕೆ ನೀಡಿದರು.
ಕಾರ್ಯಕ್ರಮದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಮ್ ಅಹ್ಮದ್, ಕೇಂದ್ರದ ಮಾಜಿ ಸಚಿವ ಕೆ.ಎಚ್.ಮುನಿಯಪ್ಪ, ಮುಖಂಡರಾದ ಹನುಮಂತಪ್ಪ ಸೇರಿದಂಥೆ ಇನ್ನಿತರರು ಉಪಸ್ಥಿತರಿದ್ದರು.