ಉತ್ತರಪ್ರದೇಶ: ರೈತರ ಪ್ರತಿಭಟನೆಯನ್ನು ಬೆಂಬಲಿಸಿ ಹುದ್ದೆಗೆ ರಾಜೀನಾಮೆ ನೀಡಿದ ಬಿಜೆಪಿ ನಾಯಕಿ

Update: 2021-04-07 09:39 GMT

ಮುಝಫ್ಫರ್‌ ನಗರ: ಕೇಂದ್ರ ಸರಕಾರದ ನೂತನ ಕೃಷಿ ಕಾಯ್ದೆಗಳನ್ನು ವಿರೋಧಿಸಿ ರೈತರು ನಡೆಸುತ್ತಿರುವ ಆಂದೋಲನವನ್ನು ಬೆಂಬಲಿಸಿ ಭಾರತೀಯ ಜನತಾ ಪಕ್ಷದ (ಬಿಜೆಪಿ) ನಾಯಕಿ ಪ್ರಿಯಂವದಾ ತೋಮರ್ ಬುಧವಾರ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.

ರಾಜ್ಯದಲ್ಲಿನ ಪಂಚಾಯತ್ ಚುನಾವಣೆಗೆ ಮುನ್ನ ಅವರು ಉತ್ತರ ಪ್ರದೇಶ ಮಹಿಳಾ ಆಯೋಗದ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿದರು.

ರಾಜ್ಯ ಬಿಜೆಪಿ ಅಧ್ಯಕ್ಷ ಸ್ವತಂತ್ರ ದೇವ್ ಸಿಂಗ್ ಅವರಿಗೆ ಬರೆದ ರಾಜೀನಾಮೆ ಪತ್ರದಲ್ಲಿ, ಕೇಂದ್ರದಲ್ಲಿ ಮತ್ತು ರಾಜ್ಯದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಪ್ರತಿಭಟನೆಯ ಹೊರತಾಗಿಯೂ ಹೊಸ ಕೃಷಿ ಕಾನೂನುಗಳಿಗೆ ಸಂಬಂಧಿಸಿದಂತೆ ರೈತರ ಬೇಡಿಕೆಗಳನ್ನು ನಿರ್ಲಕ್ಷಿಸುತ್ತಿದೆ ಎಂದು ಆರೋಪಿಸಿದರು.

ಬಿಜೆಪಿಯ "ರೈತ ವಿರೋಧಿ" ನೀತಿಯಿಂದಾಗಿ ತಾನು ಈ ನಿರ್ಧಾರ ತೆಗೆದುಕೊಂಡಿದ್ದೇನೆ ಎಂದು ತೋಮರ್ ಹೇಳಿದ್ದಾರೆ. "ಬಿಜೆಪಿ ಉತ್ತರ ಪ್ರದೇಶದ ಮಹಿಳೆಯರನ್ನು ನಿರ್ಲಕ್ಷಿಸಿದೆ ಮತ್ತು ಅವರ ಆಶಯಗಳನ್ನು ಪೂರೈಸುವಲ್ಲಿ ವಿಫಲವಾಗಿದೆ" ಎಂದು ಅವರು ಪಿಟಿಐಗೆ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News