ಮೂರೂ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಖಚಿತ: ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್

Update: 2021-04-08 14:37 GMT

ಬೆಂಗಳೂರು, ಎ. 8: ರಾಜ್ಯದಲ್ಲಿ ನಡೆಯಲಿರುವ ಬೆಳಗಾವಿ ಲೋಕಸಭೆ, ಮಸ್ಕಿ ಮತ್ತು ಬಸವಕಲ್ಯಾಣ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗಳಲ್ಲಿ ಬಿಜೆಪಿ ಅತಿಹೆಚ್ಚು ಮತಗಳ ಅಂತರದಿಂದ ಗೆಲುವು ಸಾಧಿಸಲಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ರಾಜ್ಯ ಉಸ್ತುವಾರಿಯೂ ಆಗಿರುವ ಅರುಣ್ ಸಿಂಗ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಗುರುವಾರ ಮಂಗಳೂರು ವಿಮಾನ ನಿಲ್ದಾಣದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಉಪಚುನಾವಣೆ ನಡೆಯುವ ಮೂರೂ ಕ್ಷೇತ್ರಗಳಲ್ಲಿ ಕಾರ್ಯಕರ್ತರು ವಿಶೇಷ ಶ್ರಮ ವಹಿಸಿ ಪಕ್ಷದ ಅಭ್ಯರ್ಥಿಗಳ ಪರವಾಗಿ ಪ್ರಚಾರ ಮಾಡುತ್ತಿದ್ದಾರೆ. ಇದು ಪಕ್ಷದ ಗೆಲುವಿಗೆ ಪೂರಕ ಎಂದರು.
ಕಾಂಗ್ರೆಸ್ ಪಕ್ಷವು ಬಿಜೆಪಿ ವಿರುದ್ಧ ಷಡ್ಯಂತ್ರ ಮತ್ತು ಒಳಸಂಚು ರೂಪಿಸುತ್ತಿದೆ. ಕಾಂಗ್ರೆಸಿಗರು ಎಷ್ಟೇ ಪ್ರಯತ್ನ ಪಟ್ಟರೂ ಈ ಕ್ಷೇತ್ರಗಳಲ್ಲಿ ಸೋಲುವುದು ಖಚಿತ ಎಂದು ಅವರು ನುಡಿದರು.  

ರಾಜ್ಯದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮತ್ತು ಗ್ರಾಮೀಣಾಭಿವೃದ್ಧಿ ಸಚಿವ ಈಶ್ವರಪ್ಪ ಅವರ ನಡುವೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ. ರಾಜ್ಯದ ಅಭಿವೃದ್ಧಿಗೆ ಅವರಿಬ್ಬರು ಶ್ರಮಿಸುತ್ತಿದ್ದಾರೆ ಎಂದು ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗೆ ಅರುಣ್ ಸಿಂಗ್ ಉತ್ತರಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News