ಎ.10ರಿಂದ ಮನಪಾ ವ್ಯಾಪ್ತಿಯಲ್ಲಿ ರಾತ್ರಿ ಕರ್ಫ್ಯೂ: ದ.ಕ. ಜಿಲ್ಲಾಧಿಕಾರಿ
ಮಂಗಳೂರು,ಎ.9: ದ.ಕ.ಜಿಲ್ಲೆಯಲ್ಲಿ ಕೋವಿಡ್-19 ಸೋಂಕು ಹರಡುವಿಕೆ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ರಾಜ್ಯ ಸರಕಾರದ ನಿರ್ಧಾರದಂತೆ ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಎ.10ರಿಂದ 20ರವರೆಗೆ ರಾತ್ರಿ 10 ಗಂಟೆಯಿಂದ ಬೆಳಗ್ಗೆ 5ಗಂಟೆಯವರೆಗೆ ಮುಂದಿನ ಆದೇಶದವರೆಗೆ ರಾತ್ರಿ ಕರ್ಫ್ಯೂ ಜಾರಿಗೊಳಿಸಲಾಗಿದೆ ಎಂದು ದ.ಕ. ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ತಿಳಿಸಿದ್ದಾರೆ.
ನಾನಾ ಆರೋಗ್ಯ ಸಂಬಂಧಿತ ಸಮಸ್ಯೆಗಳಿಂದ ಬಳಲುತ್ತಿರುವ ವ್ಯಕ್ತಿಗಳಿಗೆ ಮತ್ತು ಅವರ ಸಹಾಯಕರಿಗೆ ವೈದ್ಯಕೀಯ ಸೇವೆಗಾಗಿ ಸಂಚಾರಕ್ಕೆ ಅನುಮತಿ ನೀಡಲಾಗಿದೆ. ರಾತ್ರಿ ಪಾಳಿಯಲ್ಲಿ ಕಾರ್ಯ ನಿರ್ವಹಿಸುವಂತಹ ಎಲ್ಲ ಕಾರ್ಖಾನೆಗಳು/ಕಂಪನಿಗಳು/ಸಂಸ್ಥೆಗಳು ಯಥಾರೀತಿಯಲ್ಲಿ ಕಾರ್ಯನಿರ್ವಹಿಸಲು ಅನುಮತಿ ನೀಡಲಾಗಿದೆ. ಆದರೆ ಸಂಬಂಧಿಸಿದ ಕಾರ್ಮಿಕರು/ನೌಕರರು ಕೊರೋನ ಕರ್ಪ್ಯೂ ಅವಧಿಗೆ ಮುನ್ನವೇ ಕರ್ತವ್ಯದಲ್ಲಿ ಹಾಜರಿರಬೇಕು.
ದೂರಸಂಪರ್ಕ ಮತ್ತು ಅಂತರ್ಜಾಲ ಸೇವಾ ಸಂಸ್ಥೆಗಳು ಹಾಗೂ ಮಾಹಿತಿ ತಂತ್ರಜ್ಞಾನ, ಮಾಹಿತಿ ತಂತ್ರಜ್ಞಾನ ಆಧಾರಿತ ಸಂಸ್ಥೆಗಳ ಸಿಬ್ಬಂದಿಯು ರಾತ್ರಿ ಪಾಳಿಯಲ್ಲಿ ಅಧಿಕೃತ ಕಚೇರಿ ಗುರುತಿನ ಚೀಟಿ ಹೊಂದಿ ಸಂಚರಿಸಲು ಅನುಮತಿ ನೀಡಲಾಗಿದೆ.
ವೈದ್ಯಕೀಯ ಸೇವೆ ಮತ್ತು ತುರ್ತು ಚಟುವಟಿಕೆಗೆ ಮಾತ್ರ ಅನುಮತಿ ನೀಡಲಾಗಿದೆ. ಉಳಿದಂತೆ ಎಲ್ಲ ವಾಣಿಜ್ಯ ಚಟುವಟಿಕೆಗಳನ್ನು ನಿರ್ಬಂಧಿಸಲಾಗಿದೆ. ಅತ್ಯವಶ್ಯಕ ಸೇವೆಗಳನ್ನು ಒದಗಿಸುವಂತಹ ವಾಹನಗಳು, ಸರಕು ಸಾಗಣಿಕೆ ವಾಹನಗಳು, ಹೋಮ್‌ಡೆಲಿವರಿ, ಇ-ಕಾಮರ್ಸ್ ಮತ್ತು ಖಾಲಿ ವಾಹನಗಳ ಸಂಚಾರಕ್ಕೆ ಅನುಮತಿ ನೀಡಲಾಗಿದೆ.
ರಾತ್ರಿ ವೇಳೆಯಲ್ಲಿನ ಬಸ್, ರೈಲು ಹಾಗೂ ವಿಮಾನದ ದೂರ ಪ್ರಯಾಣಕ್ಕೆ ಅನುಮತಿ ನೀಡಲಾಗಿದ್ದು, ಪ್ರಯಾಣಿಕರು ಮನೆಯಿಂದ ನಿಲ್ದಾಣಗಳಿಗೆ ಮತ್ತು ನಿಲ್ದಾಣಗಳಿಂದ ಮನೆಗೆ ಅಧಿಕೃತ ಟಿಕೆಟ್‌ಗಳ ಆಧಾರದ ಮೇಲೆ ಆಟೋ/ ಕ್ಯಾಬ್ ಇತ್ಯಾದಿಗಳ ಮೂಲಕ ಸಂಚರಿಸಬಹುದು. ಮೇಲಿನ ಆದೇಶಗಳನ್ನು ಪಾಲಿಸದಿರುವವರ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆ 2005 , ಭಾರತೀಯ ದಂಡ ಸಂಹಿತೆ ಹಾಗೂ ಅನ್ವಯವಾಗಬಹುದಾದ ಇತರ ಕಾನೂನು ಉಪಬಂಧಗಳ ಅನುಸಾರ ಕ್ರಮಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.