ಸಾರಿಗೆ ನೌಕರರು ಕರ್ತವ್ಯಕ್ಕೆ ಹಾಜರಾಗದಿದ್ದರೆ ವೇತನ ಕಡಿತ: ಯಡಿಯೂರಪ್ಪ ಎಚ್ಚರಿಕೆ

Update: 2021-04-11 14:47 GMT

ರಾಯಚೂರು, ಎ. 11: ಮುಷ್ಕರ ನಿರತ ಸಾರಿಗೆ ನೌಕರರು ತಮ್ಮ ಪ್ರತಿಭಟನೆ ಕೈಬಿಟ್ಟು ಕೂಡಲೇ ಕರ್ತವ್ಯಕ್ಕೆ ಹಾಜರಾಗದಿದ್ದರೆ ವೇತನ ಕಡಿತ ಮಾಡಲಾಗುವುದು. ಅಲ್ಲದೆ, ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇಂದಿಲ್ಲಿ ಎಚ್ಚರಿಕೆ ನೀಡಿದ್ದಾರೆ.

ರವಿವಾರ ಜಿಲ್ಲೆಯ ಮದುಗಲ್‍ನಲ್ಲಿ ಉಪಚುನಾವಣೆ ಪ್ರಚಾರದ ಮಧ್ಯೆ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮುಷ್ಕರ ನಿರತರನ್ನು ಮಾತುಕತೆಗೆ ಕರೆಯುವ ಪ್ರಶ್ನೆಯೇ ಇಲ್ಲ. ಈ ವಿಚಾರದಲ್ಲಿ ಯಾವುದೇ ಕಾರಣಕ್ಕೂ ರಾಜಿ ಮಾಡಿಕೊಳ್ಳುವುದಿಲ್ಲ. ಸಾರಿಗೆ ನೌಕರರು ಗೌರವದಿಂದ ಕೆಲಸಕ್ಕೆ ಹಾಜರಾಗಬೇಕು. ಸಾರಿಗೆ ವ್ಯವಸ್ಥೆಯಿಂದ ಮುಂದಾಗುವ ಅನಾಹುತಗಳಿಗೆ ಅವರೇ ಹೊಣೆಯಾಗುತ್ತಾರೆ ಎಂದು ಪರೋಕ್ಷವಾಗಿ ಎಚ್ಚರಿಸಿದರು.

ಮೂರು ಕ್ಷೇತ್ರಗಳ ಉಪಚುನಾವಣೆಯಲ್ಲಿ ಜನತೆ ಉತ್ತಮ ತೀರ್ಪು ನೀಡಲಿದ್ದಾರೆ. ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ಮೂರು ಕ್ಷೇತ್ರಗಳ ಜನತೆ ಉತ್ತಮ ಸಂದೇಶವನ್ನು ನೀಡಲಿದ್ದಾರೆ. ಆಗ ಬಿಜೆಪಿಯ ಬಗ್ಗೆ ಹಗುರವಾಗಿ ಮಾತನಾಡುವವರಿಗೆ ಸತ್ಯದ ಅರಿವಾಗಲಿದೆ ಎಂದು ಯಡಿಯೂರಪ್ಪ ಇದೇ ಸಂದರ್ಭದಲ್ಲಿ ವಿಶ್ವಾಸ ವ್ಯಕ್ತಪಡಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News