ಗ್ರಾಮೀಣ ಪ್ರದೇಶದ ಯುವತಿಯರಿಗೆ ಉಚಿತ ಐಎಎಸ್ ಕೋಚಿಂಗ್ ಯೋಜನೆಗೆ ಚಾಲನೆ

Update: 2021-04-11 16:35 GMT

ಬೆಂಗಳೂರು, ಎ.11: ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಲ್ಲಿ ಪ್ರತಿಭೆಗೆ ಕೊರತೆಯಿಲ್ಲ. ಇವರಿಗೆ ಸೂಕ್ತ ಪ್ರೋತ್ಸಾಹ ನೀಡಿದರೆ ಉನ್ನತ ಹುದ್ದೆಗೇರುವುದರಲ್ಲಿ ಯಾವುದೇ ಅನುಮಾನವಿಲ್ಲವೆಂದು ಎಂದು ನಿವೃತ್ತ ಡಿಜಿಪಿ ಶಂಕರ್ ಬಿದರಿ ಅಭಿಪ್ರಾಯಿಸಿದ್ದಾರೆ.

ರವಿವಾರ ರಾಜ್ಯದ ಗ್ರಾಮೀಣ ಪ್ರದೇಶದ 20 ಯುವತಿಯರಿಗೆ ಉಚಿತವಾಗಿ ಐಎಎಸ್ ಕೋಚಿಂಗ್ ನೀಡುವ ದ ಐಎಎಸ್ ಹಬ್‍ನ ನೂತನ ಯೋಜನೆಗೆ ಚಾಲನೆ ನೀಡಿ ಮಾತನಾಡಿದ ಅವರು, ಆರ್ಥಿಕ ಸಮಸ್ಯೆ ಸೇರಿದಂತೆ ನಾನಾ ಕಾರಣಗಳಿಂದ ಪ್ರತಿಭಾವಂತ ವಿದ್ಯಾರ್ಥಿಗಳು ಅವಕಾಶಗಳಿಂದ ವಂಚಿತರಾಗುತ್ತಿದ್ದಾರೆ. ಇಂತವರಿಗೆ ಪ್ರೋತ್ಸಾಹ ನೀಡಬೇಕಾದದ್ದು ಪ್ರಜ್ಞಾವಂತ ನಾಗರಿಕರ ಕರ್ತವ್ಯವೆಂದು ತಿಳಿಸಿದ್ದಾರೆ.

ಪಶುವೈದ್ಯಕೀಯ ಇಲಾಖೆ ಕಾರ್ಯದರ್ಶಿ ಪಿ. ಮಣಿವಣ್ಣನ್ ಮಾತನಾಡಿ, ಕಠಿಣ ಪರಿಶ್ರಮದಿಂದ ಉನ್ನತ ಸಾಧನೆ ಮಾಡಲು ಸಾಧ್ಯ. ಇತ್ತೀಚಿನ ದಿನಗಳಲ್ಲಿ ಉನ್ನತ ಪರೀಕ್ಷೆಗಳಿಗೆ ತಯಾರಾಗಲು ಅತ್ಯುತ್ತಮ ಸೌಲಭ್ಯಗಳು ದೊರಯುತ್ತಿವೆ. ಇದನ್ನು ಸದುಪಯೋಗಪಡಿಸಿಕೊಳ್ಳಬೇಕೆಂದು ತಿಳಿಸಿದ್ದಾರೆ..

ಐಎಎಸ್ ಹಬ್‍ನ ಬೆಂಗಳೂರು ಶಾಖೆ ನಿರ್ದೇಶಕಿ ಜ್ಯೋತಿ ಗಾಣಿಗೇರ್ ಮಾತನಾಡಿ, ಗ್ರಾಮೀಣ ಪ್ರದೇಶದ ಯುವತಿಯರಿಗೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ನಾವು ಈ ಯೋಜನೆಯನ್ನು ಘೋಷಿಸಿದ್ದೇವೆ. ಗ್ರಾಮೀಣ ಪ್ರದೇಶದ ಪ್ರತಿಭಾವಂತರು ಇದರ ಪ್ರಯೋಜನ ಪಡೆದುಕೊಳ್ಳಬೇಕು ಎನ್ನುವುದು ನಮ್ಮ ಉದ್ದೇಶವಾಗಿದೆ. ನಾವು ಇತರೆ ಕೋರ್ಸ್‍ಗಳಲ್ಲೂ ಅನೇಕ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡಿದ್ದು ಗ್ರಾಮೀಣ ಪ್ರದೇಶದ ಪ್ರತಿಭಾವಂತರಿಗೆ ಅಗತ್ಯ ಅವಕಾಶಗಳನ್ನು ಕಲ್ಪಿಸುವುದು ನಮ್ಮ ಪ್ರಮುಖ ಗುರಿಯಾಗಿದೆ ಎಂದರು.

ಈ ವೇಳೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಕಾರ್ಯದರ್ಶಿ ಡಾ. ರವಿ ಸುರಪುರ, ಸೇಲಂನ ಪೊಲೀಸ್ ವರಿಷ್ಠಾಧಿಕಾರಿ ದೀಪಾ ಗಾಣಿಗೇರ್ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News