ಕೋವಿಡ್ ನಿಯಂತ್ರಣಕ್ಕೆ ಲಾಕ್‍ಡೌನ್ ಪರಿಹಾರವಲ್ಲ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

Update: 2021-04-14 11:52 GMT

ಹುಬ್ಬಳ್ಳಿ, ಎ.14: ರಾಜ್ಯದಲ್ಲಿ ಕೋವಿಡ್ ಎರಡನೇ ಅಲೆ ಹೆಚ್ಚುತ್ತಿದೆ. ಇದರ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಆದರೆ, ಕೋವಿಡ್ ನಿಯಂತ್ರಣಕ್ಕೆ ಲಾಕ್‍ಡೌನ್ ಒಂದೇ ಪರಿಹಾರವಲ್ಲವೆಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ತಿಳಿಸಿದ್ದಾರೆ.

ಬುಧವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಕೋವಿಡ್ ಎರಡನೆ ಅಲೆಯ ಪರಿಣಾಮ ಸಾವು-ನೋವುಗಳು ಹೆಚ್ಚಾಗುತ್ತಿದೆ. ಇದನ್ನು ಜನತೆ ಅರ್ಥಮಾಡಿಕೊಂಡು ಕೋವಿಡ್ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕೆಂದು ಮನವಿ ಮಾಡಿದ್ದಾರೆ.

ರಾಜ್ಯ ಸರಕಾರ ಕೋವಿಡ್‍ನಿಂದಾಗಿ ಆರ್ಥಿಕ ಸಂಕಷ್ಟದಲ್ಲಿದೆ. ಆದಾಗ್ಯು ಸಾರಿಗೆ ನೌಕರರ ತಿಂಗಳ ಸಂಬಳವನ್ನು ತಪ್ಪದೆ ಪಾವತಿಸುತ್ತಿದೆ. ಇದರ ಜೊತೆಗೆ ಸಾರಿಗೆ ನೌಕರರ ಸಂಬಳವನ್ನು ಹೆಚ್ಚಳ ಮಾಡುವ ಸಂಬಂಧ ರಾಜ್ಯ ಸರಕಾರ ಮುಕ್ತ ಮನಸ್ಸಿನಲ್ಲಿದೆ. ಆದರೆ, ಕೋವಿಡ್ ಸಂದರ್ಭದಲ್ಲಿ ಕಷ್ಟವಾಗುತ್ತಿದೆ. ಹೀಗಾಗಿ ಸಾರಿಗೆ ನೌಕರರು ಮುಷ್ಕರವನ್ನು ಕೈಬಿಟ್ಟು ಕೆಲಸಕ್ಕೆ ಹಾಜರಾಗಬೇಕೆಂದು ಅವರು ತಿಳಿಸಿದ್ದಾರೆ.

ಸಾರಿಗೆ ನೌಕರರ ಬೇಡಿಕೆಗಳಿಗೆ ನಾನು ನೈತಿಕ ಬೆಂಬಲ ನೀಡುತ್ತೇನೆ. ಈ ಸಂಬಂಧ ಸರಕಾರದೊಂದಿಗೆ ಮಾತುಕತೆಗೆ ಅವಕಾಶ ಮಾಡಿಕೊಡಲು ಸಿದ್ಧನಿದ್ದೇನೆ. ಸಾರಿಗೆ ನೌಕರರು ಕೋವಿಡ್ ಸಂದರ್ಭವನ್ನು ಅರ್ಥ ಮಾಡಿಕೊಳ್ಳಬೇಕು. ಆ ನಂತರ ಬೇಡಿಕೆಗಳ ಈಡೇರಿಕೆಯ ಬಗ್ಗೆ ಮಾತುಕತೆಯ ಮೂಲಕ ಬಗೆ ಹರಿಸಿಕೊಳ್ಳಬಹುದೆಂದು ಅವರು ಹೇಳಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News