ರೆಮಿಡಿಸ್ವಿರ್ ಔಷಧ ದುರ್ಬಳಕೆ ಮಾಡಿದರೆ ಕಠಿಣ ಕ್ರಮ: ಗೃಹ ಸಚಿವ ಬೊಮ್ಮಾಯಿ ಎಚ್ಚರಿಕೆ

Update: 2021-04-15 07:49 GMT

ಬೀದರ್, ಎ.15: ದೇಹದಲ್ಲಿ ಕೋವಿಡ್ ವೈರಾಣು ಪ್ರಮಾಣ ಹೆಚ್ಚಾದಾಗ ನೀಡಲಾಗುವ ರೆಮಿಡಿಸ್ವಿರ್(remidesivir) ಚುಚ್ಚುಮದ್ದು ಔಷಧಿಯ ಕೃತಕ ಅಭಾವ ಸೃಷ್ಟಿಸಿ ದುಬಾರಿ ದರಕ್ಕೆ ಮಾರಾಟ ಮಾಡುವವರ ವಿರುದ್ಧ ಕೋವಿಡ್ ನಿಯಂತ್ರಣ ಕಾಯ್ದೆಯಡಿ ಕಠಿಣ ಕ್ರಮ ಜರುಗಿಸುವುದಾಗಿ ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಬಸವರಾಜ ಬೊಮ್ಮಾಯಿ ಎಚ್ಚರಿಕೆ ನೀಡಿದ್ದಾರೆ.

ಗುರುವಾರ ಜಿಲ್ಲೆಯ ಹುಮ್ನಾಬಾದ್ ನಲ್ಲಿ  ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ರೆಮಿಡಿಸ್ವಿರ್ ಔಷಧ ಕೊರತೆ ಇಲ್ಲ ಎಂದು ಆರೋಗ್ಯ ಸಚಿವರು ಹೇಳಿದ್ದಾರೆ. ಆದರೆ ಈ ಔಷಧದ ಕೃತಕ ಅಭಾವ ಸೃಷ್ಟಿ ಮಾಡಲಾಗುತ್ತಿದೆ. ದುಬಾರಿ ದರಕ್ಕೆ ಮಾರಾಟ ಮಾಡಲಾಗುತ್ತಿದೆ ಎಂಬ ಆರೋಪಗಳು ಕೇಳಿಬಂದಿವೆ. ಇಂಥ ಪ್ರಕರಣಗಳನ್ನು ರಾಜ್ಯ ಸರಕಾರ ಗಂಭೀರವಾಗಿ ಪರಿಗಣಿಸಿದ್ದು, ಈ ಚುಚ್ಚುಮದ್ದಿನ ಕೃತಕ ಅಭಾವ ಸೃಷ್ಟಿಸಿ ಕಳ್ಳ ಮಾರುಕಟ್ಟೆಯಲ್ಲಿ ದುಬಾರಿ ದರಕ್ಕೆ ಮಾರಾಟ ಮಾಡಿ ದುರ್ಲಾಭ ಪಡೆದರೆ ಕಠಿಣ ಕ್ರಮ ಜರುಗಿಸುವುದಾಗಿ ಎಚ್ಚರಿಸಿದ್ದಾರೆ.

ಕಳೆದ ವರ್ಷ ಕೋವಿಡ್ ಸಂದರ್ಭದಲ್ಲಿ ಸರ್ಕಾರ ಬಹಳಷ್ಟು ಸಮಸ್ಯೆಗಳನ್ನು ಎದುರಿಸಿತ್ತು. ಆದರೆ ಈಗ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಆಸ್ಪತ್ರೆಗಳಲ್ಲಿ ಕೊವಿಡ್ ಗೆ ಸಂಬಂಧಿಸಿದ ಮೂಲಸೌಕರ್ಯಗಳನ್ನು ಅಳವಡಿಸಲಾಗಿದೆ. ಲಸಿಕೆ ಕೊರತೆಯೂ ಇಲ್ಲ ಎಂದು ಗೃಹಸಚಿವರು ಹೇಳಿದರು.

ಎ.16ರಂದು ಹಿರಿಯ ಅಧಿಕಾರಿಗಳ ಸಭೆ:

ಕೊವಿಡ್ ನಿಂದ ಗೃಹ ಇಲಾಖೆಯ ಸಿಬ್ಬಂದಿಯ ಸುರಕ್ಷತೆ ಮತ್ತು ಗೃಹ ಇಲಾಖೆಯಿಂದ ಕೋವಿಡ್ ನಿಯಂತ್ರಣಕ್ಕೆ ಆಗಬೇಕಾಗಿರುವ ಸೇವೆ ಬಗ್ಗೆ ಚರ್ಚೆ ನಡೆಸಲಾಗುವುದು. ಈ ಹಿನ್ನೆಲೆಯಲ್ಲಿ ಶುಕ್ರವಾರ ಬೆಂಗಳೂರಿನಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳ ಸಭೆ ಕರೆಯಲಾಗಿದೆ. ಕೋವಿಡ್ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಚರ್ಚೆ ನಡೆಸಿ ಮಾರ್ಗಸೂಚಿ ಹೊರಡಿಸಲಾಗುವುದು ಎಂದು ಅವರು ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News