ಎ.17ರಂದು ರಾಜ್ಯ ಉಪ ಚುನಾವಣೆ: ಬಹಿರಂಗ ಪ್ರಚಾರಕ್ಕೆ ತೆರೆ, ಮನೆ ಮನೆ ಪ್ರಚಾರಕ್ಕೆ ಅವಕಾಶ

Update: 2021-04-15 17:20 GMT
ಸಾಂದರ್ಭಿಕ ಚಿತ್ರ

ಬೆಂಗಳೂರು, ಎ.15: ಬಸವಕಲ್ಯಾಣ, ಮಸ್ಕಿ ವಿಧಾನಸಭಾ ಕ್ಷೇತ್ರ ಹಾಗೂ ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆಯ ಬಹಿರಂಗ ಪ್ರಚಾರ ಅಂತ್ಯಗೊಂಡಿದ್ದು, ನಾಳೆ(ಎ.16) ಮನೆ ಮನೆ ಪ್ರಚಾರಕ್ಕೆ ಅವಕಾಶ ಕಲ್ಪಿಸಲಾಗಿದ್ದು, ಎ.17ರಂದು ಮತದಾನ ನಡೆಯಲಿದೆ.

ಬಿಜೆಪಿ ಭದ್ರಕೋಟೆಯಾಗಿರುವ ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ದಿವಂಗತ ಕೇಂದ್ರ ಸಚಿವ ಸುರೇಶ್ ಅಂಗಡಿ ಅವರ ಪತ್ನಿ ಮಂಗಳಾ ಅವರು ಬಿಜೆಪಿ ಅಭ್ಯರ್ಥಿಯಾಗಿ ಕಣದಲ್ಲಿದ್ದು, ಕಾಂಗ್ರೆಸ್ ಪಕ್ಷವು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿಯನ್ನು ತನ್ನ ಅಭ್ಯರ್ಥಿಯನ್ನಾಗಿಸಿ ಕಣಕ್ಕಿಳಿಸಿ ಪ್ರಬಲ ಸ್ಪರ್ಧೆಯೊಡ್ಡಿದೆ.

ಬಿಜೆಪಿ ಅಭ್ಯರ್ಥಿ ಪರ ಅನುಕಂಪದ ಅಲೆ ಜೊತೆಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಸಿಎಂ ಯಡಿಯೂರಪ್ಪ ಸೇರಿದಂತೆ ರಾಜ್ಯ ಸರಕಾರದ ಸಚಿವರ ದಂಡೆ ಪ್ರಚಾರದ ಅಖಾಡಕ್ಕೆ ಇಳಿದು ಮತದಾರರ ಮನವೊಲಿಸಲು ಶ್ರಮಪಟ್ಟಿದೆ.

ಅದೇ ರೀತಿ ಕಾಂಗ್ರೆಸ್ ಆಭ್ಯರ್ಥಿ ಪರವಾಗಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಶಾಸಕರಾದ ಲಕ್ಷ್ಮಿ ಹೆಬ್ಬಾಳ್ಕರ್, ಅಂಜಲಿ ನಿಂಬಾಳ್ಕರ್, ಕೇಂದ್ರದ ಮಾಜಿ ಸಚಿವರಾದ ಮಲ್ಲಿಕಾರ್ಜುನ ಖರ್ಗೆ, ಕೆ.ಎಚ್.ಮುನಿಯಪ್ಪ, ರಾಮಲಿಂಗಾರೆಡ್ಡಿ, ಸಲೀಮ್ ಅಹ್ಮದ್, ಪುಷ್ಪಾ ಅಮರನಾಥ್ ಸೇರಿದಂತೆ ಇನ್ನಿತರ ಮುಖಂಡರು ಪ್ರಚಾರ ನಡೆಸಿದ್ದಾರೆ.

ಬಸವಕಲ್ಯಾಣದಲ್ಲಿ ಕಾಂಗ್ರೆಸ್ ಶಾಸಕರಾಗಿದ್ದ ದಿ.ನಾರಾಯಣರಾವ್ ಅವರ ಪತ್ನಿ ಮಲ್ಲಮ್ಮ ನಾರಾಯಣರಾವ್ ಕಣದಲ್ಲಿದ್ದು, ಬಿಜೆಪಿ ಅಭ್ಯರ್ಥಿಯಾಗಿ ಶರಣು ಸಲಗಾರ್ ಹಾಗೂ ಜೆಡಿಎಸ್ ಅಭ್ಯರ್ಥಿಯಾಗಿ ಸೈಯದ್ ಯಸ್ರಬ್ ಅಲಿ ಖಾದ್ರಿ ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ. ಬಸವಕಲ್ಯಾಣದಲ್ಲಿ ತ್ರಿಕೋನ ಸ್ಪರ್ಧೆ ಏರ್ಪಟ್ಟಿದ್ದು, ಜಿದ್ದಾಜಿದ್ದಿನ ಪ್ರಚಾರ ನಡೆದಿದೆ.

ಮಸ್ಕಿಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಪ್ರತಾಪ್‍ಗೌಡ ಪಾಟೀಲ್ ಹಾಗೂ ಕಾಂಗ್ರೆಸ್ ಅಭ್ಯರ್ಥಿಯಾಗಿ ಬಸನಗೌಡ ತುರುವಿಹಾಳ ಕಣದಲ್ಲಿದ್ದು, ಈ ಕ್ಷೇತ್ರದಲ್ಲಿ ಇಬ್ಬರ ನಡುವೆ ನೇರಾನೇರ ಸ್ಪರ್ಧೆಯಿದೆ. ಉಪ ಚುನಾವಣೆ ಎದುರಿಸುತ್ತಿರುವ ಮೂರು ಕ್ಷೇತ್ರಗಳಲ್ಲಿ ಜಯಗಳಿಸುವ ಮೂಲಕ ತಮ್ಮ ವಿರೋಧಿಗಳಿಗೆ ತಕ್ಕ ಉತ್ತರ ನೀಡಲು ಮುಖ್ಯಮಂತ್ರಿ ಯಡಿಯೂರಪ್ಪ ರಣತಂತ್ರ ಹೆಣೆದಿದ್ದಾರೆ.

ಮತ್ತೊಂದೆಡೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ತಮ್ಮ ಸಾಮರ್ಥ್ಯವನ್ನು ವೃದ್ಧಿಸಿಕೊಳ್ಳಲು ಈ ಉಪ ಚುನಾವಣೆಯನ್ನು ಪ್ರತಿಷ್ಠೆಯಾಗಿ ತೆಗೆದುಕೊಂಡಿದ್ದಾರೆ.

ಮತದಾನದಂದು ರಜೆ ಘೋಷಣೆ: ಉಪ ಚುನಾವಣೆಯ ಮತದಾನ ನಡೆಯಲಿರುವ ಬೆಳಗಾವಿ ಲೋಕಸಭಾ ಕ್ಷೇತ್ರ, ಬಸವಕಲ್ಯಾಣ ಹಾಗೂ ಮಸ್ಕಿ ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿನ ಸರಕಾರಿ ಹಾಗೂ ಖಾಸಗಿ ಶಾಲಾ, ಕಾಲೇಜುಗಳು, ಅನುದಾನಿತ ಹಾಗೂ ಅನುದಾನ ರಹಿತ ವಿದ್ಯಾಸಂಸ್ಥೆಗಳು. ಎಲ್ಲ ಶೈಕ್ಷಣಿಕ ಸಂಸ್ಥೆಗಳು, ರಾಜ್ಯ ಹಾಗೂ ಕೇಂದ್ರ ಸರಕಾರದ ಕಚೇರಿಗಳು, ರಾಷ್ಟ್ರೀಕೃತ ಹಾಗೂ ಇತರೆ ಬ್ಯಾಂಕುಗಳು, ಕೇಂದ್ರ ಹಾಗೂ ರಾಜ್ಯ ಸರಕಾರ ಕಾರ್ಖಾನೆಗಳು, ಉಳಿದ ಕೈಗಾರಿಕಾ ಸಂಸ್ಥೆಗಳು ಹಾಗೂ ಸಹಕಾರಿ ರಂಗದ ಸಂಘ ಸಂಸ್ಥೆಗಳಲ್ಲಿ, ಎಲ್ಲ ವ್ಯವಹಾರಿಕ ಸಂಸ್ಥೆಗಳಲ್ಲಿ, ಔದ್ಯಮಿಕ ಸಂಸ್ಥೆಗಳಲ್ಲಿ ಖಾಯಂ ಆಗಿ ಅಥವಾ ದಿನಗೂಲಿ ಮೇಲೆ ಕೆಲಸ ನಿರ್ವಹಿಸುತ್ತಿರುವ ಅರ್ಹ ಮತದಾರ ನೌಕರರಿಗೆ ಸೀಮಿತವಾದಂತೆ ಎ.17ರಂದು ಶನಿವಾರ ವೇತನ ಸಹಿತ ರಜೆಯನ್ನು ಘೋಷಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News