ಮುಖ್ಯಮಂತ್ರಿ ಯಡಿಯೂರಪ್ಪರಿಗೆ ಕೋವಿಡ್ ಪಾಸಿಟಿವ್: ಆಸ್ಪತ್ರೆಗೆ ದಾಖಲು

Update: 2021-04-16 09:31 GMT

ಬೆಂಗಳೂರು, ಎ.16: ಜ್ವರದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಇಂದು ಆಸ್ಪತ್ರೆಗೆ ದಾಖಲಾಗಿದ್ದು, ಅವರು ಮತ್ತೊಮ್ಮೆ ಕೋವಿಡ್ ಗೆ ಪಾಸಿಟಿವ್ ಆಗಿದ್ದಾರೆ ಎಂದು ತಿಳಿದುಬಂದಿದೆ.

ಜ್ವರ ಮತ್ತು ಭುಜ ನೋವಿನಿಂದ ಬಳಲುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಇಂದು ರಾಮಯ್ಯ ಮೆಮೋರಿಯಲ್‌ ಆಸ್ಪತ್ರೆಗೆ ದಾಖಲಾಗಿದ್ದರು. ಅಲ್ಲಿ ಅವರನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಿದಾಗ ಸೋಂಕಿಗೆ ಪಾಸಿಟಿವ್ ಆಗಿರುವುದು ದೃಢಪಟ್ಟಿದೆ ಎಂದು ತಿಳಿದುಬಂದಿದೆ. ಈ ಹಿನ್ನೆಲೆಯಲ್ಲಿ ಅವರನ್ನು ಇದೀಗ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ರಾಜ್ಯದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಅವರು ಇಂದು ಬೆಳಗ್ಗೆ ರಾಜ್ಯದಲ್ಲಿ ಕೋವಿಡ್‌–19 ಪರಿಸ್ಥಿತಿ ಕುರಿತು ಅಧಿಕಾರಿಗಳ ಜೊತೆ ಚರ್ಚೆ ನಡೆಸಿದ್ದರು. ಬಳಿಕ ಅವರು ಆಸ್ಪತ್ರೆಗೆ ದಾಖಲಾಗಿದ್ದರು.

ಮುಖ್ಯಮಂತ್ರಿ ಎರಡು ದಿನಗಳ ಹಿಂದೆಯೊಮ್ಮೆ ಕೋವಿಡ್‌ ಪರೀಕ್ಷೆಗೆ ಒಳಗಾಗಿದ್ದರು. ಆ ವೇಳೆ ವರದಿ ನೆಗಟಿವ್‌ ಬಂದಿತ್ತು. ಆದರೆ ಜ್ವರ ಕಡಿಮೆಯಾಗದ ಹಿನ್ನೆಲೆಯಲ್ಲಿ ಮತ್ತೊಮ್ಮೆ ಅವರಿಗೆ ಪರೀಕ್ಷೆ ನಡೆಸಿದಾಗ ಕೋವಿಡ್ ಸೋಂಕು ತಗಲಿರುವುದು ದೃಢಪಟ್ಟಿದೆ ಎಂದು ತಿಳಿದುಬಂದಿದೆ.

ಕಳೆದ ವರ್ಷವೂ ಅವರು ಕೋವಿಡ್ ಸೋಂಕಿಗೆ ಒಳಗಾಗಿದ್ದರು.

ರಾಜ್ಯ ಉಪ ಚುನಾವಣೆಯ ಪ್ರಚಾರ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಜ್ವರ ಕಾಣಿಸಿಕೊಂಡಿದ್ದರಿಂದ ಅರ್ಧದಲ್ಲೇ ಪ್ರಚಾರ ಕಾರ್ಯವನ್ನು ಮೊಟಕುಗೊಳಿಸಿ ಬೆಂಗಳೂರಿಗೆ ವಾಪಸ್ಸಾಗಿದ್ದರು. ಗುರುವಾರ ಮತ್ತು ಶುಕ್ರವಾರ ಅವರು ಅಧಿಕಾರಿಗಳ ಸಭೆ ನಡೆಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News