ದ.ಕ.ಜಿಲ್ಲೆಯಲ್ಲಿ ಶುಕ್ರವಾರ 256 ಮಂದಿಗೆ ಕೊರೋನ ಪಾಸಿಟಿವ್

Update: 2021-04-16 15:10 GMT

ಮಂಗಳೂರು, ಎ.16: ದ.ಕ.ಜಿಲ್ಲೆಯಲ್ಲಿ ಶುಕ್ರವಾರ 256 ಮಂದಿಗೆ ಕೊರೋನ ಪಾಸಿಟಿವ್ ಆಗಿದ್ದು, ಇದು ಈ ವರ್ಷದಲ್ಲೇ ಅತೀ ಹೆಚ್ಚು ಕೋವಿಡ್ ಪ್ರಕರಣ ಎಂದು ದಾಖಲಿಸಲ್ಪಟ್ಟಿವೆ.

ಕಳೆದ 48 ಗಂಟೆಗಳ ಅವಧಿಯಲ್ಲಿ ಪರೀಕ್ಷೆ ಮಾಡಿದವರ ಪೈಕಿ 256 ಮಂದಿಗೆ ಕೊರೋನ ಸೋಂಕು ದೃಢಪಟ್ಟಿದೆ. ಈ ಏರಿಕೆಯು ಆತಂಕಕ್ಕೂ ಕಾರಣವಾಗಿದೆ.

ಶುಕ್ರವಾರ ಜಿಲ್ಲೆಯಲ್ಲಿ 92 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. ಜಿಲ್ಲೆಯಲ್ಲಿ ಈವರೆಗೆ 37,562 ಮಂದಿ ಕೊರೋನ ಸೋಂಕಿಗೊಳಗಾಗಿದ್ದು, ಈ ಪೈಕಿ 35,405 ಮಂದಿ ಗುಣಮುಖರಾಗಿದ್ದಾರೆ. ಸದ್ಯ 1,414 ಮಂದಿ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ನಗರದ ಕಾನ್ವೆಂಟ್‌ವೊಂದರಲ್ಲಿ ಹತ್ತು ದಿನದ ಹಿಂದೆ ಒಬ್ಬರಿಗೆ ಕೊರೋನ ಸೋಂಕು ದೃಢಪಟ್ಟಿತ್ತು. ಅವರ ಪ್ರಾಥಮಿಕ ಸಂಪರ್ಕವುಳ್ಳ 59 ಮಂದಿಯನ್ನು ಕೊರೋನ ತಪಾಸಣೆಗೆ ಒಳಪಡಿಸಲಾಗಿದೆ.ಆ ಪೈಕಿ 19 ಮಂದಿಗೆ ಕೊರೋನ ಸೋಂಕು ಇರುವುದು ದೃಢಪಟ್ಟಿದೆ. ಹಾಗಾಗಿ ಆ ಪ್ರದೇಶವನ್ನು ಕಂಟೈನ್‌ಮೆಂಟ್ ವಲಯ ಎಂದು ಘೋಷಿಸಲಾಗಿದೆ. ನೀರುಮಾರ್ಗ ಸಮೀಪದ ಮನೆಯೊಂದರ ಐದು ಮಂದಿಗೆ ಕೊರೋನ ಸೋಂಕು ದೃಢಪಟ್ಟಿದ್ದು, ಅದನ್ನೂ ಕಂಟೈನ್‌ಮೆಂಟ್ ವಲಯವನ್ನಾಗಿ ಘೋಷಿಸಲಾಗಿದೆ.

ಶುಕ್ರವಾರ ದ.ಕ.ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ವರ್ಚುವಲ್ ಸಭೆ ನಡೆಸುವ ಮೂಲಕ ಕೋವಿಡ್ ಮುಂಜಾಗ್ರತಾ ಕ್ರಮ ಸಹಿತ ಲಸಿಕೆಯ ಪ್ರಗತಿಯ ವಿವರವನ್ನು ಅಧಿಕಾರಿಗಳನ್ನು ಪಡೆದುಕೊಂಡರು. ದ.ಕ.ಜಿಲ್ಲಾಧಿಕಾರಿಯ ನೇತೃತ್ವದಲ್ಲಿ ಎ.17ರಂದು ಬೆಳಗ್ಗೆ 9ಕ್ಕೆ ಜಿಪಂ ಸಭಾಂಗಣದಲ್ಲಿ ಕೋವಿಡ್ ರೋಗಿಗಳಿರುವ ಖಾಸಗಿ ಆಸ್ಪತ್ರೆ ಹಾಗೂ ಮೆಡಿಕಲ್ ಕಾಲೇಜುಗಳ ಮುಖ್ಯಸ್ಥರ ಸಭೆ ನಡೆಯಲಿದೆ ಎಂದು ತಿಳಿದು ಬಂದಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News