ಚೆಕ್ ಅಮಾನ್ಯ ಪ್ರಕರಣಗಳ ತ್ವರಿತ ವಿಲೇವಾರಿಗೆ ಕಾನೂನು ತಿದ್ದುಪಡಿ ಮಾಡಿ: ಕೇಂದ್ರ ಸರಕಾರಕ್ಕೆ ಸುಪ್ರೀಂ ಸೂಚನೆ

Update: 2021-04-16 16:51 GMT

ಹೊಸದಿಲ್ಲಿ, ಎ. 16: ಚೆಕ್ ಅಮಾನ್ಯ ಪ್ರಕರಣಗಳ ತ್ವರಿತ ವಿಲೇವಾರಿಗೆ ಸುಪ್ರೀಂ ಕೋರ್ಟ್ ಶುಕ್ರವಾರ ಹಲವು ನಿರ್ದೇಶನಗಳನ್ನು ನೀಡಿದೆ. ಅಲ್ಲದೆ, ಇದೇ ರೀತಿಯ ವ್ಯವಹಾರಕ್ಕೆ ಸಂಬಂಧಿಸಿ ವ್ಯಕ್ತಿಯ ವಿರುದ್ಧ ಒಂದು ವರ್ಷದ ಒಳಗೆ ದಾಖಲಾದ ಪ್ರಕರಣಗಳನ್ನು ಒಟ್ಟು ಸೇರಿಸಿ ವಿಚಾರಣೆ ನಡೆಸಲು ಕಾಯ್ದೆಗೆ ತಿದ್ದುಪಡಿ ತರುವಂತೆ ಕೇಂದ್ರ ಸರಕಾರಕ್ಕೆ ಸೂಚಿಸಿದೆ.

ಚೆಕ್ ಅಮಾನ್ಯ ಪ್ರಕರಣಗಳ ವಿಚಾರಣೆ ನಡೆಸುವ ವಿಚಾರಣಾ ನ್ಯಾಯಾಲಯಗಳಿಗೆ ಮಾರ್ಗಸೂಚಿಗಳನ್ನು ಜಾರಿಗೊಳಿಸುವಂತೆ ದೇಶಾದ್ಯಂತ ಎಲ್ಲ ಉಚ್ಚ ನ್ಯಾಯಾಲಯಗಳಿಗೆ ಸುಪ್ರೀಂ ಕೋರ್ಟ್ ನಿರ್ದೇಶಿಸಿದೆ.

ಮುಖ್ಯ ನ್ಯಾಯಮೂರ್ತಿ ಎಸ್.ಎ. ಬೊಬ್ಡೆ ನೇತೃತ್ವದ ಐವರು ಸದಸ್ಯರ ನ್ಯಾಯಪೀಠ, ಚೆಕ್ ಅಮಾನ್ಯ ಪ್ರಕರಣದಲ್ಲಿ ಪುರಾವೆಗಳನ್ನು ಅಫಿಡವಿಟ್ ಸಲ್ಲಿಸುವ ಮೂಲಕ ದೃಢಪಡಿಸಬಹುದು. ಸಾಕ್ಷಿಗಳನ್ನು ಪ್ರತ್ಯಕ್ಷವಾಗಿ ಪರಿಶೀಲಿಸಬೇಕಾಗದ ಅಗತ್ಯ ಇಲ್ಲ ಎಂದು ಹೇಳಿದೆ.

ನ್ಯಾಯಮೂರ್ತಿಗಳಾದ ಎಲ್. ನಾಗೇಶ್ವರ ರಾವ್, ಬಿ.ಆರ್. ಗವಾಯಿ, ಎ.ಎಸ್. ಬೋಪಣ್ಣ ಹಾಗೂ ಎಸ್. ರವೀಂದ್ರ ಭಟ್ ಅವರನ್ನು ಒಳಗೊಂಡ ಪೀಠ, ವ್ಯಕ್ತಿಯ ವಿರುದ್ಧ 12 ತಿಂಗಳ ಒಳಗೆ ದಾಖಲಿಸಲಾದ ಚೆಕ್ ಅಮಾನ್ಯ ಪ್ರಕರಣಗಳನ್ನು ಒಟ್ಟಿಗೆ ಸೇರಿಸಿ ಒಂದೇ ಕ್ರೋಡೀಕೃತ ಪ್ರಕರಣವಾಗಿ ವಿಚಾರಣೆ ನಡೆಸುವುದಕ್ಕೆ ವರ್ಗಾವಣೀಯ ಲಿಖಿತ ಪತ್ರಗಳ ಅಧಿನಿಯಮ ( ನೆಗೋಷಿಯೆಬಲ್ ಇನ್ಸ್ಟ್ರುಮೆಂಟ್ ಆ್ಯಕ್ಟ್)ಕ್ಕೆ ಸೂಕ್ತ ತಿದ್ದುಪಡಿ ತರುವಂತೆ ಕೇಂದ್ರ ಸರಕಾರಕ್ಕೆ ಸೂಚಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News