ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಮಾಜಿ ಶಾಸಕ ಮಲ್ಲಿಕಾರ್ಜುನ ಖೂಬಾ ಬಿಜೆಪಿಯಿಂದ ಉಚ್ಚಾಟನೆ

Update: 2021-04-17 09:41 GMT

ಬೀದರ್, ಮೇ.17: ಬಿಜೆಪಿ ಬಂಡಾಯ ಅಭ್ಯರ್ಥಿ, ಮಾಜಿ ಶಾಸಕ ಮಲ್ಲಿಕಾರ್ಜುನ ಖೂಬಾ ಅವರನ್ನು ಬಿಜೆಪಿಯು ಆರು ವರ್ಷಗಳ ಕಾಲ ಪಕ್ಷದಿಂದ ಉಚ್ಚಾಟಿಸಿದೆ.

ಬಸವಕಲ್ಯಾಣ ಕ್ಷೇತ್ರದ ಟಿಕೆಟ್ ಲಭಿಸದ್ದಕ್ಕೆ ಮಾಜಿ ಶಾಸಕ ಮಲ್ಲಿಕಾರ್ಜುನ ಖೂಬಾ ಅವರು ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. ಈ ಹಿನ್ನೆಲೆ ಪಕ್ಷದಿಂದ ಅವರನ್ನು ಆರು ವರ್ಷಗಳ ಕಾಲ ಉಚ್ಛಾಟಿಸಲಾಗಿದೆ.

'ಬಸವಕಲ್ಯಾಣ ಕ್ಷೇತ್ರದ ಬಿಜೆಪಿ ಅಧಿಕೃತ ಅಭ್ಯರ್ಥಿ ಶರಣು ಸಲಗಾರ್ ವಿರುದ್ಧ ಬಂಡುಕೋರ ಅಭ್ಯರ್ಥಿಯಾಗಿ ಸ್ಪರ್ಧಿಸಿ ನೀವು ಪಕ್ಷದ ಶಿಸ್ತನ್ನು ಉಲ್ಲಂಘಿಸಿದ್ದೀರಿ. ಹೀಗಾಗಿ ಪಕ್ಷ ವಿರೋಧಿ ಚಟುವಟಿಕೆಗಳಿಗಾಗಿ ಪಕ್ಷದಿಂದ ಆರು ವರ್ಷಗಳ ಕಾಲ ಉಚ್ಛಾಟನೆ ಮಾಡಲಾಗಿದೆ' ಎಂದು ಬಿಜೆಪಿ ರಾಜ್ಯ ಶಿಸ್ತು ಸಮಿತಿ ತಿಳಿಸಿದೆ.

ಶಾಸಕ ಬಿ.ನಾರಾಯಣರಾವ್ ಅವರ ನಿಧನದಿಂದ ತೆರವಾಗಿರುವ ಬಸವಕಲ್ಯಾಣ ಕ್ಷೇತ್ರಕ್ಕೆ ಇಂದು (ಎ.17) ಮತದಾನ ನಡೆಯುತ್ತಿದೆ. ಬಿಜೆಪಿ ಅಭ್ಯರ್ಥಿಯಾಗಿ ಶರಣು ಸಲಗಾರ್ ಸ್ಪರ್ಧಿಸಿದ್ದರೆ, ಕಾಂಗ್ರೆಸ್ ನಿಂದ ಬಿ.ನಾರಾಯಣರಾವ್ ಅವರ ಪತ್ನಿ ಮಲ್ಲಮ್ಮ ನಾರಾಯಣರಾವ್ ಕಣದಲ್ಲಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News