ಕೋವಿಡ್ 2ನೇ ಅಲೆ ಎದುರಿಸಲು ಸಿದ್ಧತೆ ಮಾಡಿಕೊಳ್ಳಲು ಡಿಸಿ ಕರೆ

Update: 2021-04-17 16:13 GMT

ಮಂಗಳೂರು, ಎ.17: ಕೋವಿಡ್‌ನ 2ನೇ ಅಲೆಯನ್ನು ಎದುರಿಸಲು ಎಲ್ಲಾ ರೀತಿಯ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳುವುದರೊಂದಿಗೆ ಸಮರೋಪಾದಿಯಲ್ಲಿ ಕಾರ್ಯನಿರ್ವಹಿಸಬೇಕು ಎಂದು ದ.ಕ. ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರು ಸರಕಾರಿ ಹಾಗೂ ಖಾಸಗಿ ಆಸ್ಪತ್ರೆಗಳ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ನಗರದ ಉರ್ವಸ್ಟೋರ್‌ನಲ್ಲಿರುವ ಜಿಪಂನ ನೇತ್ರಾವತಿ ಸಭಾಂಗಣದಲ್ಲಿ ಶನಿವಾರ ಜಿಲ್ಲೆಯ ವೈದ್ಯಕೀಯ ಕಾಲೇಜು ಆಸ್ಪತ್ರೆ, ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್ ರೋಗಿಗಳ ಚಿಕಿತ್ಸೆ ಮತ್ತು ನಿರ್ವಹಣೆ ಕುರಿತ ಮೇಲ್ವಿಚಾರಣಾ ತಂಡಗಳ ಸಮನ್ವಯ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು. ಜಿಲ್ಲೆಯಲ್ಲಿ ಕೋವಿಡ್ ಪೀಡಿತರ ಸಂಖ್ಯೆಯು ಹೆಚ್ಚುತ್ತಿದೆ. ಮುಂದಿನ 15 ದಿನಗಳಲ್ಲಿ ಮತ್ತಷ್ಟು ಉಲ್ಬಣಗೊಳ್ಳಲಿದೆ. ಸೋಂಕಿತರಿಗೆ ಸೂಕ್ತ ಚಿಕಿತ್ಸೆ ನೀಡಲು ಖಾಸಗಿ ಆಸ್ಪತ್ರೆಗಳಲ್ಲಿ ಶೇ.50ರಷ್ಟು ಹಾಸಿಗೆಗಳನ್ನು ಕೊರೋನ ಸೋಂಕಿತರ ಚಿಕಿತ್ಸೆಗೆ ಕಾಯ್ದಿರಿಸುವುದರೊಂದಿಗೆ ಸೂಕ್ತ ಚಿಕಿತ್ಸೆ ನೀಡಲು ಮುಂದಾಗಬೇಕು ಎಂದು ಡಿಸಿ ಹೇಳಿದರು.

ಸಾಮಾನ್ಯ ರೋಗಗಳಿಗೆ ಚಿಕಿತ್ಸೆಗೆ ಬರುವ ಪ್ರತಿಯೊಬ್ಬರಿಗೂ ಕೊರೋನ ನಿರೋಧಕ ಚುಚ್ಚು ಮದ್ದನ್ನು ಪಡೆಯಲು ಮನವರಿಕೆ ಮಾಡಿಕೊಳ್ಳಬೇಕು. ಕೋವಿಡ್ ಪರೀಕ್ಷೆಗೆ ಸರಕಾರ ನಿಗದಿಪಡಿಸಿರುವ 800 ರೂ.ಗಳನ್ನು ಮಾತ್ರ ಪಡೆಯಬೇಕು. ಕೆಲವು ರೋಗಿಗಳಲ್ಲಿ ಈ ಮೊತ್ತ ಭರಿಸಲು ಸಾಧ್ಯವಾಗದಿದ್ದಲ್ಲಿ ಅಂತಹವರ ಸ್ವಾಬ್ ಟೆಸ್ಟ್‌ನ್ನು ಜಿಲ್ಲಾ ಆಸ್ಪತ್ರೆಗೆ ಕಳುಹಿಸಿಕೊಡಬೇಕೆಂದು ಸೂಚನೆ ನೀಡಿದ ಡಿಸಿ ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್ ಪರೀಕ್ಷೆ ಮಾಡಿದ ವರದಿಯನ್ನು ಜಿಲ್ಲಾಡಳಿತಕ್ಕೆ ನೀಡುವಾಗ ಕಡ್ಡಾಯವಾಗಿ ರೋಗದ ಲಕ್ಷಣಗಳ ಬಗ್ಗೆ ನಮೂದಿಸಬೇಕು ಎಂದರು.

ಖಾಸಗಿ ಆಸ್ಪತ್ರೆಗಳು ಪ್ರತಿದಿನ ತಮ್ಮ ಆಸ್ಪತ್ರೆಗಳಲ್ಲಿ ಕೋವಿಡ್ ಚಿಕಿತ್ಸೆಗೆ ಬೆಡ್‌ಗಳು ದೊರಕುವಂತಹ ಮಾಹಿತಿಯನ್ನು ಜಿಲ್ಲಾಡಳಿತದೊಂದಿಗೆ ಹಂಚಿಕೊಳ್ಳಬೇಕು. ಅವುಗಳ ನಿರ್ವಹಣೆ ಮಾಡಲು ಈಗಾಗಲೇ ಅಧಿಕಾರಿಗಳನ್ನು ನಿಯೋಜಿಸಲಾಗಿದೆ. ಈ ಅಧಿಕಾರಿಗಳು ತಮಗೆ ನೀಡಿರುವ ಆಸ್ಪತ್ರೆಗಳ ಮೇಲ್ವಿಚಾರಣೆ ನಡೆಸಲು ಸೂಚಿಸಿದ ಡಿಸಿ, ಜಿಲ್ಲೆಯಲ್ಲಿ ಯಾವುದೇ ಒಬ್ಬ ಸೋಂಕಿತ ವ್ಯಕ್ತಿಯು ಚಿಕಿತ್ಸೆ ಅಥವಾ ಔಷಧಿ ದೊರಕದೆ ಸಾವು ಉಂಟಾಗದಂತೆ ಎಚ್ಚರವಹಿಸಬೇಕು. ಕೊರೋನ ಚಿಕಿತ್ಸೆಗೆ ಪೂರಕವಾಗುವ ಔಷಧಿ ಹಾಗೂ ಆಕ್ಸಿಜನ್ ಕೊರತೆ ಉಂಟಾದಲ್ಲಿ ಕೂಡಲೇ ಜಿಲ್ಲಾ ಡ್ರಗ್ ಕಂಟ್ರೋಲರ್ ಅಧಿಕಾರಿಗಳನ್ನು ಸಂಪರ್ಕಿಸಬೇಕು ಎಂದರು.

ಕೊರೋನ ದೃಢಪಟ್ಟು ಸಾಮಾನ್ಯ ರೋಗಿಗಳು ಆಗಿದ್ದಲ್ಲಿ ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆಯಡಿಯಲ್ಲಿ ಚಿಕಿತ್ಸೆ ಪಡೆಯಲು ಅವಕಾಶವಿರುವುದಿಲ್ಲ. ಆದರೆ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಹೊಂದುವುದು ಅವಶ್ಯವೆಂದ ಪ್ರಕರಣಗಳಲ್ಲಿ ಮಾತ್ರ ಆಯುಷ್ಮಾನ್ ವ್ಯಾಪ್ತಿಯಲ್ಲಿ ಚಿಕಿತ್ಸೆ ಪಡೆಯಲು ಅರ್ಹರಿರುತ್ತಾರೆ. ಈ ಬಗ್ಗೆ ಸಲಹೆ ಸೂಚನೆ ನೀಡಲು ಆರೋಗ್ಯ ಮಿತ್ರರನ್ನು ನೇಮಿಸಬೇಕು. ಅವರ ಚಿಕಿತ್ಸೆಗೆ ಸಂಬಂಧಿಸಿದ ದಾಖಲೆಗಳನ್ನು ಇಟ್ಟುಕೊಳ್ಳಬೇಕು. ತಪ್ಪಿದಲ್ಲಿ ಕೆಪಿಎಮ್‌ಇ ಹಾಗೂ ವಿಪತ್ತು ನಿರ್ವಹಣಾ ಕಾಯ್ದೆಯ ಅನ್ವಯ ಕ್ರಮ ತೆಗೆದುಕೊಳ್ಳಲಾಗುವುದು ಎಂದರು.ಚಿಕಿತ್ಸೆಗೆ ಬರಲು ತೊಂದರೆಯಿರುವ ದೂರದ ಸಾಮಾನ್ಯ ರೋಗಿಗಳಿಗೆ ಸಾಧ್ಯವಾದಷ್ಟು ಆರೋಗ್ಯ ಸಂಜೀವಿನಿ ಅಡಿಯಲ್ಲಿ ಆನ್‌ಲೈನ್ ಮೂಲಕ ಟೆಲಿಮೆಡಿಸಿನ್‌ಗಳನ್ನು ನೀಡಲು ಮುಂದಾಗಬೇಕು.ಸೋಂಕಿತರನ್ನು ಚಿಕಿತ್ಸೆಗೆ ಕರೆತರಲು ಆ್ಯಂಬುಲೆನ್ಸ್‌ಗಳು ಸುವ್ಯವಸ್ಥಿತ ರೀತಿಯಲ್ಲಿರುವಂತೆ ನೋಡಿಕೊಳ್ಳಬೇಕು. ಖಾಸಗಿ ಆ್ಯಂಬುಲೆನ್ಸ್‌ಗಳ ಸಹಿತ ಅವುಗಳ ಚಾಲಕರ ಮೊಬೈಲ್ ನಂಬರ್‌ಗನ್ನು ಕ್ರೋಢಿಕರಿಸಿಟ್ಟುಕೊಳ್ಳಬೇಕು ಎಂದರು.

ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಖಾಸಗಿ ಆಸ್ಪತ್ರೆಗಳು ಹಾಗೂ ವೈದ್ಯಕೀಯ ಕಾಲೇಜುಗಳ ಆಸ್ಪತ್ರೆಗಳ ಕೋವಿಡ್ ಚಿಕಿತ್ಸೆಗೆ ಸಂಬಂಧಿಸಿದ ಮೇಲ್ವಿಚಾರಣೆಯನ್ನು ಮಹಾನಗರಪಾಲಿಕೆ ಆಯುಕ್ತರು ಹಾಗೂ ಆರೋಗ್ಯಾಧಿಕಾರಿಗಳು ನೋಡಿಕೊಳ್ಳಬೇಕು ಎಂದು ಡಿಸಿ ಸೂಚಿಸಿದರು.ಕೋವಿಡ್ ಪೀಡಿತರಿಗೆ ಸಕಾಲದಲ್ಲಿ ಸೂಕ್ತ ಚಿಕಿತ್ಸೆ ನೀಡಬೇಕು. ಕೊನೆಯ ಘಳಿಗೆಯಲ್ಲಿ ಚಿಕಿತ್ಸೆ ನೀಡಲಾಗುವುದಿಲ್ಲ ಎಂದು ರೋಗಿಗಳನ್ನು ಸ್ಥಳಾಂತರಿಸಲು ಮುಂದಾಗಬಾರದು. ಹೀಗೆ ಮಾಡಿದರೆ ಅಂತಹ ವೈದ್ಯರ ಮೇಲೆ ವೈದ್ಯಕೀಯ ನಿರ್ಲಕ್ಷ್ಯ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗುವುದು ಎಂದು ಎಚ್ಚರಿಸಿದರು.

ಜಿಪಂ ಸಿಇಒ ಡಾ. ಕುಮಾರ್ ಮಾತನಾಡಿ, ಖಾಸಗಿ ಆಸ್ಪತ್ರೆಗಳಲ್ಲಿ ಕೊರೋನ ಸೋಂಕು ನಿರೋಧಕ ಚುಚ್ಚು ಮದ್ದು ನೀಡುವ ಪ್ರಮಾಣ ತುಂಬಾ ಕಡಿಮೆ ಇದೆ. ಅವುಗಳನ್ನು ಹೆಚ್ಚಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು. ಕೊರೋನ ನಿಯಂತ್ರಣಕ್ಕೆ ಖಾಸಗಿ ಆಸ್ಪತ್ರೆಯ ವೈದ್ಯರು ಹಾಗೂ ಸಿಬ್ಬಂದಿ ವರ್ಗವು ಸರಕಾರದ ವೈದ್ಯಕೀಯ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸಬೇಕು ಎಂದರು.

ಖಾಸಗಿ ಆಸ್ಪತ್ರೆಯಲ್ಲಿ ಕೊರೋನ ಪರೀಕ್ಷೆಯ ವರದಿಯನ್ನು ಎರಡು ದಿನದೊಳಗೆ ನೀಡಬೇಕು. ಕೆಲವೆಡೆ 7 ದಿನವಾದರೂ ವರದಿ ಕೊಡದಿರುವ ಬಗ್ಗೆ ದೂರು ಬಂದಿದೆ. ವರದಿ ವಿಳಂಬವಾದರೆ ಸೋಂಕು ಹರಡುವ ಸಾಧ್ಯತೆ ಹೆಚ್ಚಿದೆ ಎಂದರು.

ಸಭೆಯಲ್ಲಿ ಮಹಾನಗರ ಪಾಲಿಕೆಯ ಆಯುಕ್ತ ಅಕ್ಷಯ್ ಶ್ರೀಧರ್, ಅಪರ ಜಿಲ್ಲಾಧಿಕಾರಿ ಎಂ.ಜೆ ರೂಪಾ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ ಕಿಶೋರ್ ಕುಮಾರ್, ಜಿಲ್ಲಾ ಶಸ್ತ್ರ ಚಿಕಿತ್ಸಕರು ಮತ್ತು ವೈದ್ಯಕೀಯ ಅಧೀಕ್ಷಕ ಡಾ. ಸದಾಶಿವ ಶಾನುಭೋಗ, ಮೆಡಿಕಲ್ ಕಾಲೇಜಿನ ಅಧಿಕಾರಿಗಳು ಹಾಗೂ ಖಾಸಗಿ ಆಸ್ಪತ್ರೆಯ ಪ್ರತಿನಿಧಿಗಳು, ವೈದ್ಯಾಧಿಕಾರಿಗಳು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News