1-9ನೇ ತರಗತಿ ಪರೀಕ್ಷೆ ಬಗ್ಗೆ ಶೀಘ್ರದಲ್ಲಿ ಅಂತಿಮ ತೀರ್ಮಾನ: ಸಚಿವ ಸುರೇಶ್ ಕುಮಾರ್

Update: 2021-04-17 15:48 GMT

ಚಿಕ್ಕಮಗಳೂರು, ಎ.17: 1ರಿಂದ 9ನೇ ತರಗತಿ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸಬೇಕಾ ಅಥವಾ ಪರೀಕ್ಷೆ ನಡೆಸದೇ ವಿದ್ಯಾರ್ಥಿಗಳನ್ನು ಪಾಸ್ ಮಾಡಬೇಕಾ ಎಂಬ ಬಗ್ಗೆ ಸರಕಾರ ಗಂಭೀರವಾಗಿ ಚರ್ಚೆ ನಡೆಸಿದ್ದು, ಮುಂದಿನ ಎರಡು ದಿನಗಳಲ್ಲಿ ಈ ಬಗ್ಗೆ ಸರಕಾರ ಅಂತಿಮ ತೀರ್ಮಾನ ಪ್ರಕಟಿಸಲಿದೆ. ರಾಜ್ಯಾದ್ಯಂತ ಮೇ.24ರಂದು ಪಿಯುಸಿ ಪರೀಕ್ಷೆ ಆರಂಭವಾಗಲಿದ್ದು, ಜೂ.21ರಂದು ಎಸೆಸಲ್ಸಿ ಪರೀಕ್ಷೆಗಳು ಆರಂಭವಾಗಲಿವೆ. ಓರ್ವ ವಿದ್ಯಾರ್ಥಿಯೂ ಪರೀಕ್ಷೆಯಿಂದ ವಂಚಿತವಾಗಬಾರದೆಂಬ ಗುರಿಯೊಂದಿಗೆ ಇಲಾಖೆ ಎಲ್ಲ ಸಿದ್ಧತೆಗಳನ್ನು ಕೈಗೊಂಡು ಪರೀಕ್ಷೆ ನಡೆಸಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಖಾತೆ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.

ಶನಿವಾರ ನಗರದ ಜಿಪಂ ಕಚೇರಿಯ ಅಬ್ದುಲ್ ನಝೀರ್ ಸಾಬ್ ಸಭಾಂಗಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಕಳೆದ ಬಾರಿ ಕೋವಿಡ್-19 ಆತಂಕದ ನಡುವೆಯೂ ಎಸೆಸೆಲ್ಸಿ ಹಾಗೂ ಪಿಯುಸಿ ಪರೀಕ್ಷೆಗಳನ್ನು ಅತ್ಯಂತ ಯಶಸ್ವಿಯಾಗಿ ನಡೆಸಲಾಗಿದ್ದು, ಈ ಬಾರಿ ಮೇ 24ರಿಂದ ಪಿಯುಸಿ ಅಂತಿಮ ವರ್ಷದ ಪರೀಕ್ಷೆಗಳು ನಡೆಯಲಿದ್ದು, ಜೂ.21ರಿಂದ ಎಸೆಸೆಲ್ಸಿ ಪರೀಕ್ಷೆಗಳು ನಡೆಯಲಿವೆ. 1ರಿಂದ 9ನೇ ತರಗತಿವರೆಗಿನ ವಿದ್ಯಾರ್ಥಿಗಳನ್ನು ಪರೀಕ್ಷೆ ಸಂಬಂಧ ಶಿಕ್ಷಣ ಇಲಾಖೆ ಸರಕಾರದ ಅಂತಿಮ ನಿರ್ಧಾರಕ್ಕೆ ಕಾಯುತ್ತಿದೆ ಎಂದರು.

ಕೋವಿಡ್‍ನಿಂದಾಗಿ ಕಳೆದ 2010ರ ಮಾರ್ಚ್ ನಿಂದ ಇಲ್ಲಿಯವರೆಗೆ 1-5ನೇ ತರಗತಿವರೆಗೆ ಶಾಲೆಯನ್ನೇ ಆರಂಭಿಸಿಲ್ಲ. ಆದರೆ ಈ ಶಾಲಾ ಮಕ್ಕಳುಗೆ ವಿದ್ಯಾಗಮ ಶಿಕ್ಷಣ ಯೋಜನೆ ಮೂಲಕ ಪಾಠ ಮಾಡಲಾಗಿದೆ. ವಿದ್ಯಾಗಮ ಯೋಜನೆಯಡಿ 1ರಿಂದ 10ನೇ ತರಗತಿವರೆಗೂ ಪಾಠ ಪ್ರವಚನ ನಡೆದಿದ್ದು, 2021ರ ಸಾಲಿನಲ್ಲಿ ಫೆಬ್ರವರಿಯಿಂದ 6ರಿಂದ 9ನೇ ತರಗತಿವರೆಗಿನ ಶಾಲೆಗಳನ್ನು ಆರಂಭಿಸಲಾಗಿದ್ದು, ಶಾಲೆಗಳಲ್ಲಿ ಪಾಠ ಮಾಡಲಾಗಿದೆ. ಅಲ್ಲದೇ ಚಂದನ ವಾಹಿನಿ ಮೂಲಕ ಸಂವೇದ, ಸೇತುಬಂಧ ಯೋಜನೆ ಮೂಲಕ ತರಗತಿಗಳನ್ನು ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ 1ರಿಂದ 9ನೇ ತರಗತಿವರೆಗಿನ ಮಕ್ಕಳಿಗೆ ಪರೀಕ್ಷೆ ನಡೆಸಿ ಪಾಸ್ ಮಾಡುವುದೋ ಅಥವಾ ಪರೀಕ್ಷೆ ನಡೆಸದೇ ಪಾಸ್ ಮಾಡುವುದೋ ಎಂಬ ಬಗ್ಗೆ ಶಿಕ್ಷಣ ತಜ್ಞರ ನೇತೃತ್ವದಲ್ಲಿ ಅಭಿಪ್ರಾಯ ಸಂಗ್ರಹಿಸಲಾಗಿದೆ. ಈ ಸಂಬಂಧ ಸರಕಾರದ ತೀರ್ಮಾನಕ್ಕೆ ಶಿಕ್ಷಣ ಇಲಾಖೆ ಕಾಯುತ್ತಿದ್ದು, ಮುಂದಿನ ಎರಡು ದಿನಗಳಲ್ಲಿ ಈ ಬಗ್ಗೆ ಅಂತಿಮ ತೀರ್ಮಾನ ಪ್ರಕಟಿಸಲಾಗುವುದು ಎಂದರು.

ಎಸೆಸೆಲ್ಸಿ, ಪಿಯುಸಿ ಪರೀಕ್ಷೆಗಳ ಹಿನ್ನೆಲೆಯಲ್ಲಿ ರಾಜ್ಯದ 21 ಶೈಕ್ಷಣಿಕ ಜಿಲ್ಲೆಗಳಲ್ಲಿ ಡಿಡಿಪಿಯು, ಡಿಡಿಪಿಐ, ಡಯಟ್ ಪ್ರಾಂಶುಪಾಲರು ಮತ್ತು ಬಿಇಒಗಳನ್ನೊಳಗೊಂಡ ಅಧಿಕಾರಿಗಳ ಸಭೆ ನಡೆಸಲಾಗಿದೆ. ಈ ಸಭೆಗಳಲ್ಲಿ ಬರಲಿರುವ ಎಸೆಸೆಲ್ಸಿ ಪಿಯುಸಿ ಪರೀಕ್ಷೆಗಳ ಹಿನ್ನೆಲೆಯಲ್ಲಿ ಎಲ್ಲ ತಾಲೂಕು ವ್ಯಾಪ್ತಿಯಲ್ಲಿ ವಿದ್ಯಾರ್ಥಿಗಳ ಪರೀಕ್ಷಾ ಸಿದ್ಧತೆ, ಪರೀಕ್ಷಾ ಕೇಂದ್ರಗಳಲ್ಲಿನ ಸಿದ್ಧತೆ ಸಂಬಂಧ ಅಧಿಕಾರಿಗಳಿಂದ ಮಾಹಿತಿ ಪಡೆಯಲಾಗಿದೆ. ಪರೀಕ್ಷೆಗಳನ್ನು ಯಶಸ್ವಿಯಾಗಿ ನಡೆಸುವ ನಿಟ್ಟಿನಲ್ಲಿ ಶಿಕ್ಷಣ ಇಲಾಖೆಯ ಅಧಿಕಾರಿಗಳ ನೀಡುವ ಸಲಹೆ, ಸಮಸ್ಯೆಗಳನ್ನು ಆಲಿಸಲಾಗುತ್ತಿದೆ ಎಂದರು.

ಕಳೆದ ವರ್ಷ ಶಿಕ್ಷಣ ಸೇರಿದಂತೆ ಎಲ್ಲ ಇಲಾಖಾಧಿಕಾರಿಗಳ ಸಹಕಾರದಿಂದ ಎಸೆಸೆಲ್ಸಿ ಪರೀಕ್ಷೆಗಳನ್ನು ಯಶಸ್ವಿಯಾಗಿ ನಡೆಸಿದ್ದು, ಶೇ.98ರಷ್ಟು ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ಈ ಬಾರಿಯೂ ಕೊರೋನ ಸಂದಿಗ್ಧತೆ ಸವಾಲಿನ ನಡುವೆ ಇಲಾಖಾಧಿಕಾರಿಗಳ ಸಮನ್ವಯದ ಕಾರ್ಯನಿರ್ವಹಣೆಯೊಂದಿಗೆ ಪರೀಕ್ಷೆಯನ್ನು ಯಶಸ್ವಿಯಾಗಿ ನಡೆಸಲು ಶಿಕ್ಷಣ ಇಲಾಖೆ ಇಂತಹ ಸಭೆಗಳ ಮೂಲಕ ಚರ್ಚಿಸಿ ಸಮಸ್ಯೆ, ಸಲಹೆಗಳನ್ನು ಆಲಿಸಲು ಮುಂದಾಗಿದೆ ಎಂದರು.

ಈ ಬಾರಿ ಕೋವಿಡ್ ಎರಡನೇ ಅಲೆ ತೀವ್ರವಾಗಿರುವ ಹಿನ್ನೆಲೆಯಲ್ಲಿ ಪರೀಕ್ಷಾ ಕೇಂದ್ರಗಳು ಕೇವಲ ಪರೀಕ್ಷಾ ಕೇಂದ್ರಗಳಾಗಿರದೇ ವಿದ್ಯಾರ್ಥಿಗಳ ಸುರಕ್ಷತಾ ಕೇಂದ್ರಗಳಾಗಿ ಕಾರ್ಯನಿರ್ವಹಿಸಲಿವೆ. ಕೋವಿಡ್ ನಿಯಂತ್ರಣದ ಮಾರ್ಗಸೂಚಿಗಳನ್ನು ಅನುಸರಿಸಿಕೊಂಡು ಪರೀಕ್ಷೆಗಳನ್ನು ನಡೆಸಲಾಗುವುದು. ಮಕ್ಕಳ ಆರೋಗ್ಯದ ಹಿತದೃಷ್ಟಿಯಿಂದ ಆರೋಗ್ಯ ಇಲಾಖೆಯಿಂದ ಎಸ್‍ಒಪಿ ಮೂಲಕ ಮಾಹಿತಿ ಸಂಗ್ರಹಿಸಿ ಅದರಂತೆ ಪರೀಕ್ಷಾ ಕೇಂದ್ರಗಳಲ್ಲಿ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು. ಒಟ್ಟಾರೆ ಯಾವುದೇ ಓರ್ವ ವಿದ್ಯಾರ್ಥಿಯೂ ಪರೀಕ್ಷೆಯಿಂದ ವಂಚಿತವಾಗದಿರಲು ಎಲ್ಲ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಸಚಿವ ಸುರೇಶ್ ಕುಮಾರ್ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಜಿಲ್ಲಾಧಿಕಾರಿ ಕೆ.ಎನ್.ರಮೇಶ್, ಜಿಪಂ ಸಿಇಒ ಎಸ್ ಪೂವಿತಾ ಉಪಸ್ಥಿತರಿದ್ದರು.

ಚಿಕ್ಕಮಗಳೂರು, ಹಾಸನ, ಶಿವಮೊಗ್ಗ ಶೈಕ್ಷಣಿಕ ಜಿಲ್ಲೆಗಳ ವ್ಯಾಪ್ತಿಯಲ್ಲಿ ಈ ಬಾರಿ ಎಸೆಸೆಲ್ಸಿ ಪರೀಕ್ಷೆ ಬರೆಯಲು 59,634 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದು, 234 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಬರೆಯಲಿದ್ದಾರೆ. ಪಿಯುಸಿ ಪರೀಕ್ಷೆಗೆ 42,593 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದು, 81 ಪರೀಕ್ಷಾ ಕೇಂದ್ರಗಳನ್ನು ಗುರುತಿಸಲಾಗಿದೆ. ರಾಜ್ಯಾದ್ಯಂತ ಕಳೆದ ಬಾರಿ 3020 ಪರೀಕ್ಷಾ ಕೇಂದ್ರಗಳಲ್ಲಿ 8,48,203 ಎಸೆಸೆಲ್ಸಿ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ಈ ಬಾರಿ 875798 ಎಸೆಸೆಲ್ಸಿ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಪಿಯುಸಿ ಪರೀಕ್ಷೆಯನ್ನು ಕಳೆದ ಬಾರಿ 675277 ವಿದ್ಯಾರ್ಥಿಗಳು ಬರೆದಿದ್ದು, ಈ ಬಾರಿ 701651 ವಿದ್ಯಾರ್ಥಿಗಳು ಪಿಯುಸಿ ಪರೀಕ್ಷೆ ಬರೆಯಲಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News