ಬೆಂಗಳೂರಿನಲ್ಲಿ ಕೋವಿಡ್ ನಿಯಂತ್ರಣಕ್ಕೆ ಕಠಿಣ ಕ್ರಮ ಅನಿವಾರ್ಯ: ಸಚಿವ ಡಾ. ಸುಧಾಕರ್

Update: 2021-04-18 12:53 GMT

ಬೆಂಗಳೂರು, ಎ. 18: ರಾಜ್ಯದ ರಾಜಧಾನಿ ಬೆಂಗಳೂರು ನಗರದಲ್ಲಿ ಕೊರೋನ ಸೋಂಕಿನ ಪ್ರಕರಣಗಳು ಮಿತಿ ಮೀರುತ್ತಿದ್ದು, ನಮ್ಮ ನಿರೀಕ್ಷೆಗೂ ಮೀರಿ ಹಬ್ಬುತ್ತಿದೆ. ಸೋಂಕು ಸಮುದಾಯಕ್ಕೂ ವ್ಯಾಪಿಸಿದೆ. ಹೀಗಾಗಿ ನಾವು ಕಠಿಣ ಕ್ರಮಗಳನ್ನು ತೆಗೆದುಕೊಳ್ಳದಿದ್ದರೆ ಪರಿಸ್ಥಿತಿ ಇನ್ನಷ್ಟು ಬಿಗಡಾಯಿಸಲಿದೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಇಂದಿಲ್ಲಿ ಆತಂಕ ವ್ಯಕ್ತಪಡಿಸಿದ್ದಾರೆ.

ರವಿವಾರ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ನಾಳೆ (ಎ.19)ಕಂದಾಯ ಸಚಿವ ಆರ್.ಅಶೋಕ್ ನೇತೃತ್ವದಲ್ಲಿ ಬೆಂಗಳೂರು ನಗರ ಪ್ರತಿನಿಸುವ ಸಚಿವರು, ಶಾಸಕರು, ಸಂಸದರು ಸೇರಿದಂತೆ ಜನಪ್ರತಿನಿಗಳ ಸಭೆಯನ್ನು ಕರೆಯಲಾಗಿದೆ. ಸಭೆಯಲ್ಲಿ ಕಠಿಣವಾದ ನಿರ್ಧಾರವನ್ನು ತೆಗೆದುಕೊಳ್ಳುವ ಬಗ್ಗೆ ಎಲ್ಲರ ಸಲಹೆ-ಸೂಚನೆಗಳನ್ನು ಆಧರಿಸಿ ತೀರ್ಮಾನಿಸಲಾಗುವುದು ಎಂದು ಸ್ಪಷ್ಟಪಡಿಸಿದರು.

ಬೆಂಗಳೂರು ನಗರದಲ್ಲಿ ಸೋಂಕು ನಿಯಂತ್ರಣ ಹೇರುವ ದೃಷ್ಟಿಯಿಂದ ವಿಶೇಷವಾದ ಕಠಿಣ ಕ್ರಮ ಅನಿವಾರ್ಯವಾಗಿದೆ. ಈಗಾಗಲೇ ಸಾಕಷ್ಟು ಸಮಸ್ಯೆಗಳು ಎದುರಾಗಿವೆ. ಇಲ್ಲವಾದರೆ ಇನ್ನಷ್ಟು ಸಮಸ್ಯೆಗಳು ಸೃಷ್ಟಿಸುವುದು ಖಚಿತ ಎಂದ ಅವರು,

ಸಾರ್ವಜನಿಕರು ಕೊರೋನ ಮಾರ್ಗಸೂಚಿ ಪಾಲನೆ ಮಾಡದ ಕಾರಣ ಸೋಂಕಿನ ಪ್ರಮಾಣ ಹೆಚ್ಚಾಗುತ್ತಿದೆ. ಸರಕಾರ ಏನೇ ಬಿಗಿ ಕ್ರಮ ಕೈಗೊಂಡರೂ ಸಾರ್ವಜನಿಕರ ಸಹಕಾರವಿಲ್ಲದಿದ್ದರೆ ನಾವು ಏನು ಮಾಡಲು ಸಾಧ್ಯವಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಕೊರತೆ ಇದೆ: ರಾಜ್ಯದಲ್ಲಿ ಐಸಿಇಯು ಹಾಸಿಗೆಗಳ ಕೊರತೆ ಇದೆ. ಕೊರೋನ ಸೋಂಕಿನ ಪ್ರಮಾಣ ದಿನದಿಂದ ದಿನಕ್ಕೆ ಹೆಚ್ಚುತ್ತಿರುವುದರಿಂದ ಆಸ್ಪತ್ರೆಗಳಲ್ಲಿ ಐಸಿಯು ಹಾಸಿಗೆಗಳ ಕೊರತೆ ಎದುರಾಗಿದೆ. ಆದರೂ, ಪ್ರತಿಯೊಬ್ಬರಿಗೂ ಉತ್ತಮ ಚಿಕಿತ್ಸೆ ಕೊಡಿಸಲು ನಾವು ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದೇವೆ. ಐಸಿಯು ಹಾಸಿಗೆ ಸಾಮರ್ಥ್ಯಕ್ಕಿಂತ ಹೆಚ್ಚಾಗಿ ರೋಗಿಗಳ ಸಂಖ್ಯೆ ಹೆಚ್ಚಾಗಿದ್ದರಿಂದ ಈ ಸಮಸ್ಯೆ ಎದುರಾಗಿದೆ ಎಂದು ಅವರು ತಿಳಿಸಿದರು.

ಪ್ರತಿನಿತ್ಯ ಐಸಿಯು ಹಾಸಿಗೆಗಳ ಸಂಖ್ಯೆ ಹೆಚ್ಚಳ ಮಾಡಲು ಕ್ರಮ ಕೈಗೊಂಡಿದ್ದೇವೆ. ಸಾರ್ವಜನಿಕರ ಉದಾಸೀನ ಹಾಗೂ ನಮ್ಮ ಕೆಲವು ನೂನ್ಯತೆ ಇವೆ. ಆಸ್ಪತ್ರೆಯಲ್ಲಿ ಉಂಟಾಗಿರುವ ಪ್ರಮಾದಗಳನ್ನು ಸರಿಪಡಿಸಲು ಬಿಬಿಎಂಪಿ ವಲಯವಾರು ನೋಡಲ್ ಅಧಿಕಾರಿಗಳನ್ನು ನೇಮಕ ಮಾಡುತ್ತಿದ್ದೇವೆ. ಐಎಎಸ್, ಐಪಿಎಸ್, ಬಿಬಿಎಂಪಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು ಇದರಲ್ಲಿ ಇರುತ್ತಾರೆ. ಯಾವುದೇ ರೀತಿಯ ಸಮಸ್ಯೆಯಾಗದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಎಂದು ಹೇಳಿದರು.

ನಗರದಲ್ಲಿ ಏಕಾಏಕಿ ರೋಗಿಗಳ ಸಂಖ್ಯೆ ಏರಿಕೆಯಾಗಿದ್ದರಿಂದ ಸರಕಾರಿ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ ಹಾಸಿಗೆಗಳ ಕೊರತೆ ಎದುರಾಗಿದೆ. ಎಷ್ಟು ಲಭ್ಯವಿದೆಯೋ ಅಷ್ಟನ್ನು ಬಳಸಿಕೊಂಡು ಚಿಕಿತ್ಸೆ ನೀಡುತ್ತಿದ್ದೇವೆ. ಕೊರತೆ ಎದುರಾಗದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದ್ದೇವೆ. ಕರ್ನಾಟಕದಲ್ಲೇ 800 ಮೆಟ್ರಿಕ್ ಟನ್ ಆಕ್ಸಿಜನ್ ಉತ್ಪಾದನೆ ಮಾಡುವ ಸಾಮರ್ಥ್ಯವಿದೆ. ಪ್ರಸ್ತುತ ನಮ್ಮಲ್ಲಿ 300 ಮೆಟ್ರಿಕ್ ಟನ್ ಆಕ್ಸಿಜನ್ ಲಭ್ಯವಿದೆ. ಸದ್ಯಕ್ಕೆ ನಮಗೆ 200 ಮೆಟ್ರಿಕ್ ಟನ್ ಆಕ್ಸಿಜನ್ ಬೇಕಾಗಿದೆ. ಹೆಚ್ಚುವರಿ ಆಕ್ಸಿಜನ್ ನೀಡುವಂತೆ ಕೇಂದ್ರಕ್ಕೆ ಮನವಿ ಮಾಡಲಾಗಿದೆ ಎಂದು ಅವರು ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News