ಮಲೆನಾಡಿನಲ್ಲಿ ಕಳೆದೊಂದು ವಾರದಿಂದ ಉತ್ತಮ ಮಳೆ

Update: 2021-04-18 09:56 GMT

ಚಿಕ್ಕಮಗಳೂರು, ಎ.18: ಕಾಫಿನಾಡಿನ ಮಲೆನಾಡು ಭಾಗದಲ್ಲಿ ಕಳೆದೊಂದು ವಾರದಿಂದ ಉತ್ತಮ ಮಳೆಯಾಗುತ್ತಿದ್ದು, ಬಿಸಿಲಿನಿಂದ ಕಂಗೆಟ್ಟಿದ್ದ ಜನರಿಗೆ ಅಕಾಲಿಕ ಮಳೆ ನಿಟ್ಟುಸಿರು ಬಿಡುವಂತೆ ಮಾಡಿದೆ.

ಶನಿವಾರ ಜಿಲ್ಲೆಯ ಮಲೆನಾಡು ಭಾಗದ ಮೂಡಿಗೆರೆ, ಶೃಂಗೇರಿ, ಎನ್.ಆರ್.ಪುರ, ಕೊಪ್ಪ ತಾಲೂಕುಗಳ ವ್ಯಾಪ್ತಿಯಲ್ಲಿ ಗುಡುಗು ಮಿಂಚು ಸಹಿತ ಸಾಧಾರಣ ಮಳೆಯಾಗಿದ್ದು, ಬಾಳೆಹೊನ್ನೂರು ಸಮೀಪದ ಸಂಗಮೇಶ್ವರ ಗ್ರಾಮದಲ್ಲಿ ಆಲಿಕಲ್ಲು ಸಹಿತ ಧಾರಾಕಾರ ಮಳೆಯಾಗಿದೆ. ರವಿವಾರ ಎನ್,ಆರ್.ಪುರ ಕೊಪ್ಪ, ಶೃಂಗೇರಿ ತಾಲೂಕುಗಳ ವ್ಯಾಪ್ತಿಯಲ್ಲಿ ಅಪರಾಹ್ನ 2ರಿಂದ 3 ಗಂಟೆಯವರೆಗೆ ಗುಡುಗು, ಮಿಂಚು ಸಹಿತ  ಧಾರಾಕಾರ ಮಳೆಯಾಗಿದೆ.

ಮೂಡಿಗೆರೆ ತಾಲೂಕಿನ ಕೆಲವೆಡೆ ಸಾಧಾರಣ ಮಳೆಯಾಗಿದ್ದರೆ, ಚಿಕ್ಕಮಗಳೂರು ತಾಲೂಕಿನ ಮಲೆನಾಡು ಭಾಗವಾದ ಮಲ್ಲಂದೂರು, ಆಲ್ದೂರು, ಬನ್ನೂರು, ಸಿರವಾಸೆ, ವಸ್ತಾರೆ, ಆಣೂರು ಗ್ರಾಮಗಳ ವ್ಯಾಪ್ತಿಯಲ್ಲಿ ಉತ್ತಮ ಮಳೆಯಾಗಿದೆ.

ಚಿಕ್ಕಮಗಳೂರು ನಗರ ವ್ಯಾಪ್ತಿಯಲ್ಲಿ ಮಧ್ಯಾಹ್ನದಿಂದ ಸಂಜೆಯವರೆಗೆ ಮೋಡಕವಿದ ವಾತಾವರಣ ಇತ್ತಾದರೂ ಮಳೆಯ ಸುಳಿವಿರಲಿಲ್ಲ. ಕಡೂರು, ತರೀಕೆರೆ ತಾಲೂಕು ವ್ಯಾಪ್ತಿಯಲ್ಲಿಯೂ ಮೋಡ ಕವಿದ ವಾತಾವರಣವಿದ್ದು ರಾತ್ರಿ ವೇಳೆ ಮಳೆಯಾಗುವ ಸಾಧ್ಯತೆ ಹೆಚ್ಚಿದೆ.

ಕಳೆದ ಒಂದು ವಾರದಿಂದ ಜಿಲ್ಲೆಯ ಮಲೆನಾಡು ಭಾಗದ ಅಲಲ್ಲಿ ಉತ್ತಮ ಮಳೆಯಾಗುತ್ತಿದ್ದು, ಅಕಾಲಿಕ ಮಳೆಯಿಂದಾಗಿ ಕಾಪಿ,‌ಅಡಿಕೆ ಬೆಳೆಗಾರರ ಮುಖದಲ್ಲಿ ಮಂದಹಾಸ ಮೂಡಿದೆ. ಕಾಫಿ ಅಡಿಕೆ ತೋಟಗಳಿಗೆ ಮಳೆಯ ನೀರು ತಂಪೆರೆದಿದೆ. ಬಿಸಿಲ ಝಳವನ್ನೂ ಕಡಿಮೆ ಮಾಡಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News