45 ವರ್ಷ ಮೇಲ್ಪಟ್ಟ ಪೊಲೀಸ್ ಸಿಬ್ಬಂದಿ, ಕುಟುಂಬಸ್ಥರಿಗೆ ಕೋವಿಡ್ ಲಸಿಕೆ ಕಡ್ಡಾಯ: ಪ್ರವೀಣ್ ಸೂದ್

Update: 2021-04-18 18:24 GMT

ಬೆಂಗಳೂರು, ಎ.18:ಕೋವಿಡ್ ಸೋಂಕಿನ ಎರಡನೇ ಅಲೆಯ ವೇಗ ತೀವ್ರವಾಗುತ್ತಿರುವ ಹಿನ್ನೆಲೆ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕೆಂದು ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಅವರು ಸೂಚನೆ ನೀಡಿದ್ದಾರೆ.

ಈ ಕುರಿತು ಪ್ರಕಟಣೆ ಬಿಡುಗಡೆ ಮಾಡಿರುವ ಅವರು, ಇಲಾಖೆಯ ಅಧಿಕಾರಿ, ಸಿಬ್ಬಂದಿ ಮತ್ತು ಕುಟುಂಬ ವರ್ಗದ ಹಿತದೃಷ್ಟಿಯಿಂದ ರೋಗದ ಗಾಂಭೀರ್ಯತೆ ಅರಿತು ಘಟಕಾಧಿಕಾರಿಗಳು, ಅಧಿಕಾರಿ ಮತ್ತು ಸಿಬ್ಬಂದಿಯ ಮನೋಸ್ಥೈರ್ಯ ಹೆಚ್ಚಿಸಲು ಕೆಲವೊಂದು ಕ್ರಮಗಳನ್ನು ಕೈಗೊಳ್ಳಬೇಕು ಎಂದು ಹೇಳಿದರು.

ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಯಲ್ಲಿ ಕೋವಿಡ್ ಸಾಂಕ್ರಾಮಿಕ ಸಂಬಂಧಿತ ಸೂಕ್ತ ನಡವಳಿಕೆ ಬಗ್ಗೆ ಹೆಚ್ಚಿನ ಅರಿವು ಮೂಡಿಸಲು ಕ್ರಮ ಕೈಗೊಳ್ಳಬೇಕು. 45 ವರ್ಷ ಮೇಲ್ಪಟ್ಟ ಕುಟುಂಬದ ಸದಸ್ಯರಿಗೆ ಮೊದಲನೆಯ ಮತ್ತು ಎರಡನೇಯ ಕೋವಿಡ್ ಲಸಿಕೆಯನ್ನು ತಪ್ಪದೇ ಕಡ್ಡಾಯವಾಗಿ ಹಾಕಿಸಲು ಕ್ರಮ ಕೈಗೊಳ್ಳುವುದು. ಅದೇ ರೀತಿ, ನಿಯಮಿತವಾಗಿ ಕೋವಿಡ್ -19 ಪರೀಕ್ಷೆ ನಡೆಸಲು ಅಗತ್ಯ ಕ್ರಮ ಕೈಗೊಳ್ಳುವುದು. ಇತರೆ ಖಾಯಿಲೆಗಳಿಂದ ಬಳಲುತ್ತಿರುವ ಅಧಿಕಾರಿ ಮತ್ತು ಸಿಬ್ಬಂದಿಗೆ ಕಚೇರಿ ಕರ್ತವ್ಯಗಳಿಗೆ ಮಾತ್ರ ನೇಮಿಸಬೇಕು.

ಕರ್ತವ್ಯ ನಿರ್ವಹಿಸುತ್ತಿರುವ ಎಲ್ಲಾ ಸಿಬ್ಬಂದಿ ಮೂರು ಪಾಳಿಯಲ್ಲಿ ಕರ್ತವ್ಯಕ್ಕೆ ನೇಮಿಸುವ ಬಗ್ಗೆ ಹಾಗೂ ಎಲ್ಲಾ ಸಿಬ್ಬಂದಿಗೆ ಅನುಕೂಲವಾಗುವಂತೆ ಅಗತ್ಯ ಸೌಕರ್ಯಗಳನ್ನು ಒದಗಿಸಲು ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದ್ದಾರೆ.

ಇನ್ನು, ಪೊಲೀಸ್ ಸಿಬ್ಬಂದಿ ಮತ್ತು ಅವರ ಕುಟುಂಬದ ಸದಸ್ಯರಿಗೆ ಕೋವಿಡ್ ಲಕ್ಷಣಗಳು ಕಂಡುಬಂದರೆ ಅತ್ಯುತ್ತಮ ವೈದ್ಯಕೀಯ ಸೌಲಭ್ಯ ಹಾಗೂ ಸೂಕ್ತ ಚಿಕಿತ್ಸೆ ದೊರಕುವಂತೆ ನಿಗಾ ವಹಿಸಲು ಘಟಕಗಳಲ್ಲಿ ಒಬ್ಬ ಜವಾಬ್ದಾರಿಯುತ ಹಿರಿಯ ಅಧಿಕಾರಿಯನ್ನು ಸಮನ್ವಯಾಧಿ ಕಾರಿಯನ್ನಾಗಿ ನೇಮಿಸುವುದು.

ಎಲ್ಲ ಪೊಲೀಸ್ ಠಾಣೆ, ಕಚೇರಿಗಳು ಮತ್ತು ಎಲ್ಲಾ ಘಟಕಗಳ ಒಳ ಆವರಣ ಮತ್ತು ಹೊರಾಂಗಣವನ್ನು ಸ್ಯಾನಿಟೈಸ್ ಮಾಡಬೇಕು. ಎಲ್ಲ ಅಧಿಕಾರಿ, ಸಿಬ್ಬಂದಿ ಕರ್ತವ್ಯದ ಸಮಯದಲ್ಲಿ ಮಾಸ್ಕ್, ಫೇಸ್‍ಶೀಲ್ಡ್ ಧರಿಸಿ ಸುರಕ್ಷಿತ ಅಂತರ ಕಾಪಾಡಿಕೊಳ್ಳವುದು ಮತ್ತು ಸುರಕ್ಷತೆ ಮಾಡಿಕೊಳ್ಳುವುದು.

ಒಂದು ವೇಳೆ ವೈದ್ಯರ ಸಲಹೆಯ ಮೇರೆಗೆ ಆಸ್ಪತ್ರೆಗೆ ಒಳರೋಗಿಯಾಗಿ ದಾಖಲಾಗುವ ಸಂದರ್ಭ ಬಂದಲ್ಲಿ ಎಲ್ಲಾ ಜಿಲ್ಲಾ ಪೊಲೀಸ್ ಅಧೀಕ್ಷಕರು, ನಗರ ಪೊಲೀಸ್ ಆಯುಕ್ತರು ಮತ್ತು ವಿಶೇಷ ಘಟಕಗಳ ಘಟಕಾಧಿಕಾರಿಗಳು ಸಂಬಂಧಿಸಿದ ಜಿಲ್ಲಾಧಿಕಾರಿಗಳೊಂದಿಗೆ ಮತ್ತು ನಗರ ಆಯುಕ್ತರೊಂದಿಗೆ ಸಮನ್ವಯ ಸಾಧಿಸಬೇಕು ಎಂದು ಡಿಜಿಪಿ ತಿಳಿಸಿದ್ದಾರೆ.

ಜತೆಗೆ ಪೊಲೀಸ್ ಠಾಣೆ ಮತ್ತು ಕಚೇರಿಗಳ ಮುಂಭಾಗ ಸಾರ್ವಜನಿಕರ ಭೇಟಿಗೆ ಪ್ರತ್ಯೇಕ ವ್ಯವಸ್ಥೆ ಮಾಡುವುದು. ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗೆ ಚಿಕಿತ್ಸೆ ನಿರಾಕರಿಸಿದ ಆರೋಗ್ಯ ಭಾಗ್ಯ ಯೋಜನೆಯಡಿ ನೋಂದಾಯಿತ ಆಸ್ಪತ್ರೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ನಿರ್ದೇಶನ ಮಾಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News