ರಾಜ್ಯದಲ್ಲಿ ಲಾಕ್‍ಡೌನ್ ಮಾಡುವ ಪರಿಸ್ಥಿತಿ ಇಲ್ಲ: ಮುಖ್ಯಮಂತ್ರಿ ಯಡಿಯೂರಪ್ಪ

Update: 2021-04-19 14:50 GMT

ಬೆಂಗಳೂರು, ಎ.19: ರಾಜ್ಯದಲ್ಲಿ ಕೋವಿಡ್ ಪ್ರಕರಣಗಳು ಏರಿಕೆಯಾಗುತ್ತಿದ್ದರೂ ಲಾಕ್‍ಡೌನ್ ಮಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿಲ್ಲ. ಆದರೆ, ರಾತ್ರಿ ಕರ್ಫ್ಯೂ ಅನ್ನು ವಿಸ್ತರಣೆ ಮಾಡುವುದು ಸೇರಿದಂತೆ ಮತ್ತಷ್ಟು ಕಠಿಣ ಕ್ರಮಗಳನ್ನು ಕೈಗೊಳ್ಳುವ ಕುರಿತು ಮಂಗಳವಾರ(ಎ.20) ರಾಜ್ಯಪಾಲರ ಅಧ್ಯಕ್ಷತೆಯಲ್ಲಿ ನಡೆಯುವ ಉಭಯ ಸದನಗಳ ಮುಖಂಡರ ಸಭೆಯ ಬಳಿಕ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.

ಕೋವಿಡ್ ಸೋಂಕಿಗೆ ತುತ್ತಾಗಿರುವ ಹಿನ್ನೆಲೆಯಲ್ಲಿ ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮುಖ್ಯಮಂತ್ರಿ, ವಿಡಿಯೋ ಕಾನ್ಫರೆನ್ಸ್ ಮೂಲಕ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಬೆಂಗಳೂರಿನ ಶಾಸಕರು, ಸಚಿವರು, ಸಂಸದರ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದರು.

ರಾಜ್ಯದಲ್ಲಿ ಪುನಃ ಲಾಕ್‍ಡೌನ್ ಹೇರುವಂತಹ ಪರಿಸ್ಥಿತಿ ನಿರ್ಮಾಣವಾಗಿಲ್ಲ. ಉಭಯ ಸದನಗಳ ಮುಖಂಡರ ಸಭೆಯಲ್ಲಿ ವ್ಯಕ್ತವಾಗುವ ಅಭಿಪ್ರಾಯಗಳನ್ನು ಕ್ರೋಢಿಕರಿಸಿ ನೂತನ ಮಾರ್ಗಸೂಚಿಗಳನ್ನು ಪ್ರಕಟ ಮಾಡಲಾಗುವುದು. ಬಿಬಿಎಂಪಿ ವ್ಯಾಪ್ತಿಯ ಎಂಟು ವಲಯಗಳಿಗೂ ಒಬ್ಬೊಬ್ಬ ಸಚಿವರನ್ನು ಉಸ್ತುವಾರಿಯನ್ನಾಗಿ ನೇಮಕ ಮಾಡಲಾಗಿದೆ. ಆಯಾ ವಲಯಗಳಲ್ಲಿ ಕೋವಿಡ್ ಸೋಂಕು ನಿಯಂತ್ರಣಕ್ಕಾಗಿ ಅಗತ್ಯ ಕ್ರಮಗಳನ್ನು ಕೈಗೊಳ್ಳುತ್ತಿದ್ದಾರೆ ಎಂದು ಮುಖ್ಯಮಂತ್ರಿ ಹೇಳಿದರು.

ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ಹಿರಿಯ ಶಾಸಕ ರಾಮಲಿಂಗಾರೆಡ್ಡಿ ಮಾತನಾಡಿ, ಕೋವಿಡ್ ನಿಯಂತ್ರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರಕಾರಕ್ಕೆ ನಾವು ಸಂಪೂರ್ಣ ಸಹಕಾರ ನೀಡಲು ಬದ್ಧವಾಗಿದ್ದೇವೆ. ಈ ವಿಚಾರದಲ್ಲಿ ನಾವು ರಾಜಕಾರಣ ಮಾಡುವುದಿಲ್ಲ. ಸರಕಾರವೂ ಅಷ್ಟೇ ಈ ಸೂಕ್ಷ್ಮ ಪರಿಸ್ಥಿತಿಯಲ್ಲಿ ರಾಜಕಾರಣ ಮಾಡಬಾರದು ಎಂದರು.

ಆಹಾರವಾಗಲಿ ಅಥವಾ ಔಷಧಿಯಾಗಲಿ ನ್ಯಾಯಯುತವಾಗಿ ವಿತರಿಸಿ. ರಾಜ್ಯದಲ್ಲಿ ಒಂದೆಡೆ ಹಾಸಿಗೆ ಇಲ್ಲ, ಮತ್ತೊಂದೆಡೆ ತೀವ್ರ ನಿಗಾ ಘಟಕದಲ್ಲಿ ಸ್ಥಳಾವಕಾಶ ಇಲ್ಲ. ಮತ್ತೊಂದೆಡೆ ಆಮ್ಲಜನಕದ ದಾಸ್ತಾನು ಇಲ್ಲ ಎಂಬ ಭಯಾನಕ ಪರಿಸ್ಥಿತಿ ಉಂಟಾಗಿದೆ. ಸಾರ್ವಜನಿಕರ ಹಿತದೃಷ್ಟಿಯಿಂದ ಬೆಂಗಳೂರು ನಗರದಲ್ಲಿ ಕನಿಷ್ಠ 25,000 ಹಾಸಿಗೆಗಳನ್ನು ವ್ಯವಸ್ಥೆ ಮಾಡಿ ಎಂದು ಅವರು ಸಲಹೆ ನೀಡಿದರು.

ಮನೆಯಲ್ಲಿ ದಿಗ್ಬಂಧನದಲ್ಲಿರುವ(ಹೋಮ್ ಐಸೋಲೇಷನ್) ಜನರು ರಸ್ತೆಗಳಲ್ಲಿ ಓಡಾಡುತ್ತಿದ್ದಾರೆ. ಲಾಕ್‍ಡೌನ್ ಗಿಂತಲೂ ದಂಡಪ್ರಕ್ರಿಯಾ ಸಂಹಿತೆ ಪರಿಚ್ಛೇಧ 144 ಜಾರಿ ಮಾಡಿ ಗುಂಪು ಸೇರುವುದನ್ನು ತಡೆಯುವುದು ಉತ್ತಮ. ಕಲ್ಯಾಣ ಮಂಟಪ, ಸಮುದಾಯ ಭವನ, ಮಾರುಕಟ್ಟೆಗಳಲ್ಲಿ ಜನಸಂದಣಿ ನಿಯಂತ್ರಿಸಬೇಕು ಎಂದು ರಾಮಲಿಂಗಾರೆಡ್ಡಿ ಹೇಳಿದರು.

ಈಗಾಗಲೆ ಜಾರಿಯಲ್ಲಿರುವ ರಾತ್ರಿ ಕರ್ಫ್ಯೂ ಸಮಯ(ರಾತ್ರಿ 10 ರಿಂದ ಬೆಳಗ್ಗೆ 5 ಗಂಟೆ) ಬದಲಾವಣೆ ಅಗತ್ಯವಿಲ್ಲ. ಕೊಳಗೇರಿಗಳಲ್ಲಿ ಕೋವಿಡ್ ಲಸಿಕಾ ಆಭಿಯಾನಕ್ಕೆ ಒತ್ತು ಕೊಡಿ. ಬಿ ಯು ನಂಬರ್ ಸೃಜನೆಯಾಗುವಲ್ಲಿ ವಿಳಂಬವಾಗುತ್ತಿದೆ. ಆದಷ್ಟು ಬೇಗ ಈ ಸಂಖ್ಯೆ ಸೃಜನೆಯಾದರೆ ರೋಗಿಗಳನ್ನು ಆಸ್ಪತ್ರೆಯಲ್ಲಿ ದಾಖಲು ಮಾಡಿ, ಚಿಕಿತ್ಸೆ ನೀಡಲು ಸಹಕಾರಿಯಾಗುತ್ತದೆ ಎಂದು ಅವರು ತಿಳಿಸಿದರು.

ಕೇಂದ್ರದ ಮಾಜಿ ಸಚಿವ ಹಾಗೂ ವಿಧಾನಪರಿಷತ್ ಸದಸ್ಯ ಸಿ.ಎಂ.ಇಬ್ರಾಹಿಮ್ ಮಾತನಾಡಿ, ಕೋವಿಡ್ ಸೋಂಕಿಗೆ ತುತ್ತಾಗಿ ಅಸುನೀಗುವ ತಂದೆ, ತಾಯಿಯನ್ನು ಹೆತ್ತ ಮಕ್ಕಳೂ ಮುಟ್ಟುತ್ತಿಲ್ಲ. ಶವದ ಮೂಲಕ ಕೋವಿಡ್-19ರ ಸೋಂಕು ಹರಡುವುದಿಲ್ಲ ಎಂಬ ವಿಷಯವನ್ನು ಜನಸಾಮಾನ್ಯರಿಗೆ ವೈದ್ಯರ ಮೂಲಕ ಮನವರಿಕೆ ಮಾಡಿಕೊಡಿ ಎಂದು ಮನವಿ ಮಾಡಿದರು.

ಕನಿಷ್ಠ ವಾರಕ್ಕೊಮ್ಮೆ ಅಥವಾ ಹತ್ತು ದಿನಗಳಿಗೊಮ್ಮೆ ರಾಜ್ಯದಲ್ಲಿ ಹಾಗೂ ಪ್ರಮುಖವಾಗಿ ಬೆಂಗಳೂರಿನಲ್ಲಿ ಕೋವಿಡ್ ಪರಿಸ್ಥಿತಿ ಹೇಗಿದೆ ಎಂಬುದರ ಕುರಿತು ಪ್ರಗತಿ ಪರಿಶೀಲನಾ ಸಭೆ ನಡೆಸಿ ಎಂದು ಅವರು ಸಲಹೆ ನೀಡಿದರು.

ದಾಸರಹಳ್ಳಿ ಶಾಸಕ ಮಂಜುನಾಥ್ ಮಾತನಾಡಿ, ಸಂಚಾರಿ ವೈದ್ಯರ ತಂಡ ರಚಿಸಿ ಹೋಮ್ ಐಸೋಲೇಷನ್ ನಲ್ಲಿ ಇರುವವರಿಗೆ ಬೃಹತ್ ಬೆಂಗಳೂರು ಮಹಾ ನಗರ ಪಾಲಿಕೆ ಮೂಲಕ ಉಚಿತ ಔಷಧಿ ವಿತರಿಸಿ. ಪ್ರತಿ ವಿಧಾನಸಭಾ ಕ್ಷೇತ್ರಕ್ಕೂ ಕೋವಿಡ್ ಕೇರ್ ಸೆಂಟರ್ ಸ್ಥಾಪಿಸಿ. ಸತ್ತವರನ್ನು ಅವರ ಜಮೀನುಗಳಲ್ಲಿ ಅಂತ್ಯ ಸಂಸ್ಕಾರ ಮಾಡಲು ಅವಕಾಶ ಕಲ್ಪಿಸಿ. ಇದರಿಂದ ಸ್ಮಶಾನಗಳಲ್ಲಿ ಅಂತ್ಯ ಸಂಸ್ಕಾರಕ್ಕೆ ಸಾಲುಗಟ್ಟಿ ನಿಲುವುದು ತಪ್ಪುತ್ತದೆ ಎಂದರು.

ಸಭೆಯಲ್ಲಿ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥ ನಾರಾಯಣ ಸಚಿವರಾದ ಆರ್.ಅಶೋಕ್, ಡಾ.ಕೆ.ಸುಧಾಕರ್, ಬಸವರಾಜ ಬೊಮ್ಮಾಯಿ, ಅರವಿಂದ ಲಿಂಬಾವಳಿ, ಶಾಸಕರು, ಸಂಸದರು ಪಾಲ್ಗೊಂಡಿದ್ದರು.​

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News