ಮುಷ್ಕರ ಸ್ಥಗಿತಗೊಳಿಸಿ ಕೆಲಸಕ್ಕೆ ಹಾಜರಾಗುವಂತೆ ಸಾರಿಗೆ ನೌಕರರಿಗೆ ಗೃಹ ಸಚಿವ ಬೊಮ್ಮಾಯಿ ಮನವಿ

Update: 2021-04-19 15:28 GMT

ಬೆಂಗಳೂರು, ಎ.19: ಸಾರ್ವಜನಿಕರ ಹಿತದೃಷ್ಟಿಯಿಂದ ಮುಷ್ಕರವನ್ನು ಸ್ಥಗಿತಗೊಳಿಸಿ ಕೆಲಸಕ್ಕೆ ಹಾಜರಾಗುವಂತೆ ಮುಷ್ಕರನಿರತ ಸಾರಿಗೆ ನೌಕರರಿಗೆ ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಬಸವರಾಜ ಬೊಮ್ಮಾಯಿ ಮತ್ತೊಮ್ಮೆ ಮನವಿ ಮಾಡಿದರು.

ಸೋಮವಾರ ಇಲ್ಲಿನ ಆರ್.ಟಿ.ನಗರದಲ್ಲಿರುವ ತಮ್ಮ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಾರಿಗೆ ನೌಕರರ ಸಂಘದ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್  ಅವರು ಇಂದು ತಮ್ಮನ್ನು ಭೇಟಿ ಮಾಡಿದ್ದರು. ಈ ಸಂದರ್ಭದಲ್ಲಿ ಅವರು ಸಾರಿಗೆ ನೌಕರರ ವಿಚಾರದ ಬಗ್ಗೆ ಪ್ರಸ್ತಾವ ಮಾಡಿದರು. ಆಗ ಅವರಿಗೆ ಹಲವು ವಿಚಾರಗಳನ್ನು ಸ್ಪಷ್ಟವಾಗಿ ಹೇಳಿದ್ದೇನೆ ಎಂದರು.

ಮುಷ್ಕರ ಮಾಡಲು ಇದು ಸೂಕ್ತ ಸಂದರ್ಭ ಅಲ್ಲ. ಕೋವಿಡ್ ಎಲ್ಲರನ್ನು ಕಾಡುತ್ತಿದೆ. ರಾಜ್ಯದ ಆರ್ಥಿಕ ಪರಿಸ್ಥಿತಿ ಸರಿಯಾಗಿಲ್ಲ. ಜನ ಸಂಕಷ್ಟದಲ್ಲಿದ್ದಾರೆ. ಹೀಗಾಗಿ ತಾವು ಮುಷ್ಕರ ಸ್ಥಗಿತಗೊಳಿಸಿ ಕೆಲಸಕ್ಕೆ ಹಾಜರಾಗಿ. ನಿಮ್ಮ ಬೇಡಿಕೆಗಳ ಬಗ್ಗೆ ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ಸಾರಿಗೆ ಸಚಿವ ಲಕ್ಷ್ಮಣ ಸವದಿ ಗಮನಕ್ಕೆ ತರುತ್ತೇನೆ. ಮೊದಲು ಮುಷ್ಕರ ಸ್ಥಗಿತಗೊಳಿಸಿ ಕೆಲಸಕ್ಕೆ ಹಾಜರಾಗಿ ಎಂಬ ಮನವಿಯನ್ನು ಮಾಡಿದ್ದೇನೆ ಎಂದು ಅವರು ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News