ಸಿಎಂ ಬಿಎಸ್‍ವೈ ಎ.23ರಂದು ಆಸ್ಪತ್ರೆಯಿಂದ ಬಿಡುಗಡೆ ಸಾಧ್ಯತೆ

Update: 2021-04-20 12:05 GMT

ಬೆಂಗಳೂರು, ಎ.20: ಎರಡನೆ ಬಾರಿ ಕೊರೋನ ಸೋಂಕಿಗೆ ತುತ್ತಾಗಿ ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಎ.23ರಂದು ಆಸ್ಪತ್ರೆಯಿಂದ ಬಿಡುಗಡೆಯಾಗುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ.

ಬೆಳಗಾವಿ ಲೋಕಸಭಾ ಕ್ಷೇತ್ರ, ಬಸವಕಲ್ಯಾಣ ಹಾಗೂ ಮಸ್ಕಿ ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆ ಪ್ರಚಾರದಲ್ಲಿ ತೊಡಗಿಕೊಂಡಿದ್ದ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಚುನಾವಣಾ ಪ್ರಚಾರದ ವೇಳೆ ಜ್ವರ ಕಾಣಿಸಿಕೊಂಡಿತ್ತು. ಬೆಳಗಾವಿ ಕ್ಷೇತ್ರದಲ್ಲಿ ರೋಡ್ ಶೋ ನಡೆಸುವ ವೇಳೆ ಜ್ವರ ಹೆಚ್ಚಾದ ಹಿನ್ನೆಲೆಯಲ್ಲಿ ಅವರು ಪ್ರಚಾರ ಮೊಟಕುಗೊಳಿಸಿ ಬೆಂಗಳೂರಿಗೆ ಹಿಂದಿರುಗಿದ್ದರು.

ಎ.16ರಂದು ಮತ್ತೆ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಎಂ.ಎಸ್.ರಾಮಯ್ಯ ಆಸ್ಪತ್ರೆಯಲ್ಲಿ ಯಡಿಯೂರಪ್ಪ ಕೋವಿಡ್ ಪರೀಕ್ಷೆಗೆ ಒಳಪಟ್ಟಿದ್ದರು. ಈ ವೇಳೆ ಕೋವಿಡ್ ಪಾಸಿಟಿವ್ ಬಂದಿದ್ದು ದೃಢಪಟ್ಟಿದ್ದರಿಂದ, ಅವರನ್ನ ಎಚ್‍ಎಎಲ್ ಬಳಿಯಿರುವ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ತಜ್ಞರ ವೈದ್ಯರ ತಂಡ ನಿಯಮಿತವಾಗಿ ಮುಖ್ಯಮಂತ್ರಿಯ ಆರೋಗ್ಯ ತಪಾಸಣೆ ನಡೆಸುತ್ತಿದ್ದಾರೆ. ಅವರು ಚಿಕಿತ್ಸೆಗೆ ಸ್ಪಂದಿಸುತ್ತಿದ್ದು, ಆರೋಗ್ಯವು ಸ್ಥಿರವಾಗಿದೆ. ಇನ್ನೆರಡು ದಿನಗಳಲ್ಲಿ ಪುನಃ ಅವರನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗುವುದು. ಕೋವಿಡ್ ಪರೀಕ್ಷೆ ನೆಗೆಟಿವ್ ಬಂದಲ್ಲಿ ಅವರನ್ನು ಎ.23ರಂದು ಆಸ್ಪತ್ರೆಯಿಂದ ಬಿಡುಗಡೆಗೊಳಿಸುವ ಸಾಧ್ಯತೆಯಿದೆ.

ಆನಂತರ ಅವರು ತಮ್ಮ ನಿವಾಸದಲ್ಲಿ ಹೋಂ ಕ್ವಾರಂಟೈನ್ ಅವಧಿಯನ್ನು ಪೂರ್ಣಗೊಳಿಸಿದ ಬಳಿಕ ಎಂದಿನಂತೆ ಸಾರ್ವಜನಿಕವಾಗಿ ತಮ್ಮ ಕರ್ತವ್ಯವನ್ನ ನಿರ್ವಹಿಸಲಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News