ಉಡುಪಿ ಜಿಲ್ಲೆಯಲ್ಲಿ ಮಂಗಳವಾರ 109 ಮಂದಿಗೆ ಕೊರೋನ ಪಾಸಿಟಿವ್, ಒಂದು ಬಲಿ

Update: 2021-04-20 14:51 GMT

ಉಡುಪಿ, ಎ.20: ಕೊರೋನ ಎರಡನೇ ಅಲೆ ಅಬ್ಬರದ ನಡುವೆ ಜಿಲ್ಲೆಯಲ್ಲಿ ಮಂಗಳವಾರ 109 ಮಂದಿಯಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ದಿನದಲ್ಲಿ 72 ವರ್ಷ ಪ್ರಾಯದ ವೃದ್ಧರೊಬ್ಬರು ಕೋವಿಡ್‌ಗೆ ಬಲಿಯಾದರೆ, 113 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ. 742 ಮಂದಿ ಈಗಲೂ ಸೋಂಕಿಗೆ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಸುಧೀರ್‌ಚಂದ್ರ ಸೂಡ ತಿಳಿಸಿದ್ದಾರೆ.

ಉಸಿರಾಟ ತೊಂದರೆ ಹಾಗೂ ಇತರ ಸಮಸ್ಯೆಗಳೊಂದಿಗೆ ಎ.17ರಂದು ಮಣಿಪಾಲದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಪರ್ಕಳದ 72 ವರ್ಷ ಪ್ರಾಯದ ಹಿರಿಯ ನಾಗರಿಕರೊಬ್ಬರು ಸೋಮವಾರ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಈ ಮೂಲಕ ಜಿಲ್ಲೆಯಲ್ಲಿ ಕೋವಿಡ್‌ಗೆ ಬಲಿಯಾದವರ ಒಟ್ಟು ಸಂಖ್ಯೆ 194ಕ್ಕೇರಿದೆ.

ಇಂದು ಪಾಸಿಟಿವ್ ಬಂದ 109 ಮಂದಿಯಲ್ಲಿ 51 ಮಂದಿ ಪುರುಷರಾದರೆ, 58 ಮಂದಿ ಮಹಿಳೆಯರು. ಇವರಲ್ಲಿ 28 ಮಂದಿ ಉಡುಪಿ ತಾಲೂಕಿನವರಾದರೆ 29 ಮಂದಿ ಕುಂದಾಪುರ ಹಾಗೂ 49 ಮಂದಿ ಕಾರ್ಕಳ ತಾಲೂಕಿನವರು. ಹೊರಜಿಲ್ಲೆಯ ಮೂವರು ಸಹ ಇಲ್ಲಿ ಕೋವಿಡ್ ಸೋಂಕಿಗೆ ಪಾಸಿಟಿವ್ ಬಂದಿದ್ದಾರೆ ಎಂದು ಡಾ.ಸೂಡ ತಿಳಿಸಿದರು.

ಸೋಮವಾರ 113 ಮಂದಿ ಸೋಂಕಿನಿಂದ ಗುಣಮುಖರಾಗುವ ಮೂಲಕ ಜಿಲ್ಲೆಯಲ್ಲಿ ಕೊರೋನದಿಂದ ಚೇತರಿಸಿಕೊಂಡವರ ಸಂಖ್ಯೆ ಈಗ 26,0774ಕ್ಕೇರಿದೆ. ನಿನ್ನೆ ಜಿಲ್ಲೆಯ 4093 ಮಂದಿ ಕೋವಿಡ್ ಪರೀಕ್ಷೆ ಮಾಡಿಸಿಕೊಂಡಿದ್ದಾರೆ. ಇಂದಿನ 109 ಮಂದಿ ಸೇರಿ ಈವರೆಗೆ ಸೋಂಕಿಗೆ ಪಾಸಿಟಿವ್ ಬಂದವರ ಸಂಖ್ಯೆ 27,012 ಎಂದು ಡಾ.ಸೂಡ ತಿಳಿಸಿದರು.

ಉಡುಪಿ ಜಿಲ್ಲೆಯಲ್ಲಿ ಈವರೆಗೆ ಒಟ್ಟು 4,72,860 ಮಂದಿಯನ್ನು ಕೋವಿಡ್ ಪರೀಕ್ಷೆಗೊಳಪಡಿಸಲಾಗಿದೆ.

3968 ಮಂದಿಯಿಂದ ಕೊರೋನ ಲಸಿಕೆ ಸ್ವೀಕಾರ
ಕೊರೋನ ವಿರುದ್ಧದ ಲಭ್ಯವಿರುವ ಲಸಿಕೆಯನ್ನು ಜಿಲ್ಲೆಯಲ್ಲಿ ಇಂದು ಒಟ್ಟು 3968 ಮಂದಿ ಸ್ವೀಕರಿಸಿದ್ದಾರೆ. ಇವರಲ್ಲಿ 2609 ಮಂದಿ ಲಸಿಕೆಯ ಮೊದಲ ಡೋಸ್ ಪಡೆದರೆ, 1359 ಮಂದಿಗೆ ಎರಡನೇ ಡೋಸ್ ನೀಡಲಾಯಿತು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸುಧೀರ್‌ಚಂದ್ರ ಸೂಡ ತಿಳಿಸಿದ್ದಾರೆ.

ಮಂಗಳವಾರ ಜಿಲ್ಲೆಯಲ್ಲಿ 45 ವರ್ಷ ಮೇಲಿನ ಒಟ್ಟು 3796 ಮಂದಿ ಲಸಿಕೆಯನ್ನು ಸ್ವೀಕರಿಸಿದ್ದು, ಇವರಲ್ಲಿ 2526 ಮಂದಿ ಮೊದಲ ಡೋಸ್‌ನ್ನೂ, 1270 ಮಂದಿ ಎರಡನೇ ಡೋಸ್‌ನ್ನು ಪಡೆದಿದ್ದಾರೆ. 114 ಮಂದಿ ಆರೋಗ್ಯ ಕಾರ್ಯಕರ್ತರು ಹಾಗೂ 58 ಮಂದಿ ಕೊರೋನ ಮುಂಚೂಣಿ ಯೋಧರು ಸಹ ಇಂದು ಲಸಿಕೆ ಸ್ವೀಕರಿಸಿದವರಲ್ಲಿ ಸೇರಿದ್ದಾರೆ.

ಜಿಲ್ಲೆಯಲ್ಲಿ ಇದುವರೆಗೆ 1,69,903 ಮಂದಿ ಲಸಿಕೆಯ ಮೊದಲ ಡೋಸ್‌ನ್ನು ಪಡೆದರೆ, 31,648 ಮಂದಿ ಎರಡನೇ ಡೋಸ್‌ನ್ನು ಸ್ವೀಕರಿಸಿದ್ದಾರೆ ಎಂದು ಡಾ.ಸೂಡ ತಿಳಿಸಿದರು.

ಮಾಸ್ಕ್ ಧರಿಸದವರಿಂದ 86,050ರೂ. ದಂಡ ವಸೂಲಿ
ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಕೊವೀಡ್-19 ಎರಡನೆ ಅಲೆಯನ್ನು ತಡೆಯಲು ಜಿಲ್ಲಾಡಳಿತ ಕೋವಿಡ್-19 ಮಾರ್ಗಸೂಚಿಗಳನ್ನು ಪಾಲಿಸದವರ ವಿರುದ್ಧ ಕ್ರಮಕ್ಕೆ ಮುಂದಾಗಿದ್ದು, ಸೋಮವಾರ ಮಾಸ್ಕ್ ಧರಿಸದ ಹಾಗೂ ಇತರ ನಿಯಮ ಉಲ್ಲಂಘಿಸಿದ 853 ಮಂದಿಯಿಂದ ಒಟ್ಟು 86,050ರೂ. ದಂಡ ವಸೂಲಿ ಮಾಡಿದೆ.

ನಗರಸಭೆ, ಪುರಸಭೆ, ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ 2,400ರೂ., ಗ್ರಾಪಂ ವ್ಯಾಪ್ತಿಯಲ್ಲಿ 2,800ರೂ., ಅಬಕಾರಿ ಇಲಾಖೆಯಿಂದ 1,800ರೂ., ಕಂದಾಯ ಇಲಾಖೆಯಿಂದ 5,000ರೂ., ಪೊಲೀಸ್ ಇಲಾಖೆಯಿಂದ 74,050ರೂ. ದಂಡವನ್ನು ವಸೂಲಿ ಮಾಡಲಾಗಿದೆ.

ಉಡುಪಿ ಜಿಲ್ಲೆಯಲ್ಲಿ ಈವರೆಗೆ ಮಾಸ್ಕ್ ಧರಿಸದ 29,655 ಮಂದಿಯಿಂದ 31,42,650ರೂ. ದಂಡ ಸಂಗ್ರಹಿಸಲಾಗಿದೆ ಎಂದು ಉಡುಪಿ ಜಿಲ್ಲಾಡಳಿತದ ಮೂಲಗಳು ತಿಳಿಸಿವೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News