ಡಿಜೆ ಹಳ್ಳಿ, ಕೆಜಿ ಹಳ್ಳಿ ಗಲಭೆ ಪ್ರಕರಣ: ತನಿಖಾ ಪ್ರಗತಿ ವರದಿ ಸಲ್ಲಿಸಲು ಎನ್‍ಐಎಗೆ ಹೈಕೋರ್ಟ್ ನಿರ್ದೇಶನ

Update: 2021-04-20 19:33 GMT

ಬೆಂಗಳೂರು, ಎ.20: ನಗರದ ಡಿಜೆ ಹಳ್ಳಿ ಮತ್ತು ಕೆಜಿ ಹಳ್ಳಿ ವ್ಯಾಪ್ತಿಯಲ್ಲಿ ನಡೆದಿದ್ದ ಗಲಭೆ ಪ್ರಕರಣ ಸಂಬಂಧ ತನಿಖಾ ಪ್ರಗತಿ ವರದಿ ಸಲ್ಲಿಸುವಂತೆ ನಗರ ಪೊಲೀಸರು ಹಾಗೂ ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್‍ಐಎ)ಗೆ ಹೈಕೋರ್ಟ್ ನಿರ್ದೇಶಿಸಿದೆ.

ಗಲಭೆ ಪ್ರಕರಣವನ್ನು ಎನ್‍ಐಎಗೆ ವಹಿಸುವಂತೆ ಹಾಗೂ ಗಲಭೆಯಲ್ಲಿ ಆಗಿರುವ ನಷ್ಟವನ್ನು ಅಂದಾಜು ಮಾಡಿ ಹೊಣೆಗಾರಿಕೆ ನಿಗದಿಪಡಿಸಲು ಕ್ಲೇಮ್ ಕಮಿಷನರ್ ನೇಮಕ ಮಾಡುವಂತೆ ಕೋರಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ,ಎಸ್ ಓಕ ನೇತೃತ್ವದ ವಿಭಾಗೀಯ ಪೀಠ, ಈ ನಿರ್ದೇಶನ ನೀಡಿದೆ.

ಈ ವೇಳೆ ಸರಕಾರದ ಪರ ವಕೀಲರು ಪೀಠಕ್ಕೆ ಮಾಹಿತಿ ನೀಡಿ, ಕ್ಲೇಮ್ ಕಮಿಷನರ್ ಗೆ ಎಲ್ಲ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಲಾಗಿದೆ. ಗಲಭೆಯಲ್ಲಿ ನಷ್ಟ ಅನುಭವಿಸಿದವರು ಪರಿಹಾರ ಕೋರಿ ಈವರೆಗೆ 90 ಅರ್ಜಿಗಳನ್ನು ಸಲ್ಲಿಸಿದ್ದಾರೆ. ಅರ್ಜಿಗಳ ಪರಿಶೀಲನೆ ನಡೆಯುತ್ತಿದೆ ಎಂದು ಮಾಹಿತಿ ನೀಡಿದರು.

ಹೇಳಿಕೆ ದಾಖಲಿಸಿಕೊಂಡ ಪೀಠ, ಗಲಭೆ ಸಂಬಂಧ ದಾಖಲಾಗಿರುವ ಪ್ರಕರಣಗಳಲ್ಲಿ ಈವರೆಗೆ ನಡೆಸಿರುವ ತನಿಖೆಯ ಪ್ರಗತಿ ವರದಿಯನ್ನು ಮುಂದಿನ ವಿಚಾರಣೆ ವೇಳೆ ಮುಚ್ಚಿದ ಲಕೋಟೆಯಲ್ಲಿ ಸಲ್ಲಿಸುವಂತೆ ಬಾಣಸವಾಡಿ ಎಸಿಪಿ ಹಾಗೂ ರಾಷ್ಟ್ರೀಯ ತನಿಖಾ ಸಂಸ್ಥೆಯ ಅಧಿಕಾರಿಗಳಿಗೆ ನಿರ್ದೇಶಿಸಿ, ವಿಚಾರಣೆಯನ್ನು ಜೂ.22ಕ್ಕೆ ಮುಂದೂಡಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News