ಕೇಂದ್ರದಿಂದ ಆಮ್ಲಜನಕ ಹಂಚಿಕೆ ಕಡಿಮೆಯಾದರೆ ಹಲವು ಆರೋಗ್ಯ ಸೇವಾ ಕೇಂದ್ರಗಳು ಮುಚ್ಚುವ ಪರಿಸ್ಥಿತಿ: ಬಿಎಸ್‌ವೈ

Update: 2021-04-23 15:32 GMT

ಬೆಂಗಳೂರು, ಎ. 23: ಕೋವಿಡ್ ಸೋಂಕಿತರ ಚಿಕಿತ್ಸೆಗೆ ಅಗತ್ಯವಿರುವ ಆಮ್ಲಜನಕ ಹಾಗೂ ರೆಮ್‍ಡೆಸಿವಿರ್ ಹೆಚ್ಚುವರಿ ಉತ್ಪಾದನೆ ಹಾಗೂ ಪೂರೈಕೆಗೆ ಕೇಂದ್ರ ಸರಕಾರ ಸಿದ್ಧವಿದ್ದು, ರಾಜ್ಯ ಸರಕಾರಗಳೂ ಪರಸ್ಪರ ಸಹಕರಿಸುವ ಮೂಲಕ ಈ ಸವಾಲನ್ನು ಸಮರ್ಥವಾಗಿ ಎದುರಿಸಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ.

ಶುಕ್ರವಾರ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ನಡೆಸಿದ ವಿಡಿಯೋ ಕಾನ್ಫರೆನ್ಸ್ ನಲ್ಲಿ ಈ ವಿಷಯ ತಿಳಿಸಿದ ಅವರು, ಈಗ ಎದುರಾಗಿರುವ ವಿಪತ್ತನ್ನು ಎದುರಿಸಲು ಆರೋಗ್ಯ ಸೇವಾ ವ್ಯವಸ್ಥೆ ಸುಧಾರಣೆಗೆ ಒತ್ತು ನೀಡುವುದು, ಮುನ್ನೆಚ್ಚರಿಕೆಯ ಕ್ರಮಗಳ ಕಟ್ಟುನಿಟ್ಟಿನ ಪಾಲನೆ, ಆಸ್ಪತ್ರೆಗೆ ಅನಗತ್ಯ ದಾಖಲಾಗುವುದನ್ನು ತಪ್ಪಿಸುವುದು, ಆಮ್ಲಜನಕದ ಸಮರ್ಪಕ ಹಾಗೂ ಮಿತಬಳಕೆಗೆ ಆದ್ಯತೆ ನೀಡುವುದು ಹಾಗೂ ಜನರಲ್ಲಿ ವಿಶ್ವಾಸ ಮೂಡಿಸುವುದು ಅಗತ್ಯ ಎಂದು ಮೋದಿ ತಿಳಿಸಿದರು.

ಆಮ್ಲಜನಕದ ದುರ್ಬಳಕೆಯಾಗದಂತೆ ಎಲ್ಲ ರಾಜ್ಯಗಳಲ್ಲೂ ಆಕ್ಸಿಜನ್ ಆಡಿಟ್ ಮಾಡಿಸುವಂತೆ ಪ್ರಧಾನಮಂತ್ರಿ ಮೋದಿಯವರು ಸಲಹೆ ನೀಡಿದ್ದು, ಜೊತೆಗೆ ಆಮ್ಲಜನಕದ ಟ್ಯಾಂಕರುಗಳ ಸುಗಮ ಸಂಚಾರಕ್ಕೆ ರಾಜ್ಯ ಸರಕಾರಗಳು ವ್ಯವಸ್ಥೆ ಮಾಡಬೇಕು. ಆಮ್ಲಜನಕ ಮತ್ತು ರೆಮ್‍ಡೆಸಿವಿರ್ ಸದ್ಬಳಕೆಯಾಗುವ ನಿಟ್ಟಿನಲ್ಲಿ ಆತಂಕದ ಕೊಳ್ಳುವಿಕೆಯನ್ನು ನಿಯಂತ್ರಿಸಬೇಕು. ಅಲ್ಲದೆ, ಹೆಚ್ಚುತ್ತಿರುವ ಪ್ರಕರಣಗಳಿಂದಾಗಿ ಮಾನವ ಸಂಪನ್ಮೂಲ ಅಗತ್ಯತೆಯೂ ಹೆಚ್ಚುತ್ತಿದ್ದು, ಇತ್ತೀಚೆಗೆ ನಿವೃತ್ತರಾದ ಸಿಬ್ಬಂದಿಯ ಸೇವೆ ಬಳಕೆ ಮಾಡಿಕೊಳ್ಳಿ ಎಂದು ಮೋದಿ ಸೂಚಿಸಿದ್ದಾರೆ.

ಆಮ್ಲಜನಕ ಪೂರೈಕೆಗೆ ಮನವಿ: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿಡಿಯೋ ಕಾನ್ಫರೆನ್ಸ್ ನಲ್ಲಿ ಮಾತನಾಡಿ, ರಾಜ್ಯದಲ್ಲಿ ಕೋವಿಡ್ ಸೋಂಕು ನಿಯಂತ್ರಣಕ್ಕಾಗಿ ಕೈಗೊಳ್ಳುತ್ತಿರುವ ಕ್ರಮಗಳು ಹಾಗೂ ರಾಜ್ಯದ ವಸ್ತುಸ್ಥಿತಿಯನ್ನು ವಿವರಿಸಿದರು. ಕೋವಿಡ್ ಸೋಂಕಿತರ ಚಿಕಿತ್ಸೆಗಾಗಿ ರಾಜ್ಯಕ್ಕೆ ದಿನಕ್ಕೆ 1,471 ಟನ್ ಆಮ್ಲಜನಕ ಹಂಚಿಕೆ ಮಾಡುವಂತೆ ಮುಖ್ಯಮಂತ್ರಿ ಯಡಿಯೂರಪ್ಪ, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಇದೇ ವೇಳೆ ಮನವಿ ಮಾಡಿದರು.

ರಾಜ್ಯದಲ್ಲಿ ಆಮ್ಲಜನಕದ ಬಳಕೆ ದಿನೇ ದಿನೇ ಹೆಚ್ಚುತ್ತಿದ್ದು, ನಿನ್ನೆ ರಾಜ್ಯದಲ್ಲಿ 500 ಟನ್ ಬಳಕೆಯಾಗಿದೆ. ಕೇಂದ್ರ ಸರಕಾರವು ರಾಜ್ಯಕ್ಕೆ ಕೇವಲ 300 ಟನ್ ಆಮ್ಲಜನಕ ಹಂಚಿಕೆ ಮಾಡಿದ್ದು, ಇದೇ ಪರಿಸ್ಥಿತಿ ಮುಂದುವರಿದರೆ ಹಲವು ಆರೋಗ್ಯ ಸೇವಾ ಕೇಂದ್ರಗಳನ್ನು ಮುಚ್ಚುವ ಪರಿಸ್ಥಿತಿ ಎದುರಾಗುವುದು. ಕೇಂದ್ರ ಸರಕಾರದ ಮಾರ್ಗಸೂಚಿಗಳನ್ವಯ ರಾಜ್ಯಕ್ಕೆ ಎ.25ರಿಂದ 1,142 ಟನ್ ಆಮ್ಲಜನಕ ಅಗತ್ಯವಿದೆ ಹಾಗೂ ಎ.30ರ ನಂತರ 1,471 ಟನ್ ಆಮ್ಲಜನಕದ ಅಗತ್ಯವಿದೆ. ಆಮ್ಲಜನಕ ಕೊರತೆ ನೀಗಿಸಿ, ಕೂಡಲೇ 1,471 ಟನ್ ಆಮ್ಲಜನಕ ಹಂಚಿಕೆ ಮಾಡಬೇಕು ಎಂದು ಮುಖ್ಯಮಂತ್ರಿ ಯಡಿಯೂರಪ್ಪ, ಪ್ರಧಾನಿಗೆ ಮನವಿ ಮಾಡಿದರು.

ಈ ಸಂದರ್ಭದಲ್ಲಿ ರಾಜ್ಯದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿದ್ದು, ಪಾಸಿಟಿವಿಟಿ ದರ ಶೇ.16ರಷ್ಟಿದೆ. ಬೆಂಗಳೂರು ನಗರ ಅತಿಹೆಚ್ಚು ಕೋವಿಡ್ ಸೋಂಕು ಪೀಡಿತವಾಗಿದ್ದು, ತುಮಕೂರು, ಬಳ್ಳಾರಿ, ಮೈಸೂರು, ಹಾಸನ ಮತ್ತು ಕಲಬುರಗಿ ಜಿಲ್ಲೆಗಳಲ್ಲಿಯೂ ಹೆಚ್ಚಿನ ಪ್ರಕರಣಗಳು ವರದಿಯಾಗುತ್ತಿವೆ. ಸಾರ್ವಜನಿಕ ಸ್ಥಳಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನ ಸೇರದಂತೆ ತಡೆಯಲು ಕೆಲವು ನಿರ್ಬಂಧಗಳನ್ನು ವಿಧಿಸಲಾಗಿದೆ.

ಜೊತೆಗೆ ಇತರ ಮುನ್ನೆಚ್ಚರಿಕೆಯ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಜಾರಿಗೆ ತರಲಾಗುತ್ತಿದೆ. ರಾಜ್ಯದ ಆರ್ಥಿಕ ಚಟುವಟಿಕೆಗಳ ಮೇಲೆ ಕನಿಷ್ಠ ಪರಿಣಾಮವಾಗುವ ರೀತಿಯಲ್ಲಿ ನಿರ್ಬಂಧಗಳನ್ನು ವಿಧಿಸಲಾಗಿದೆ. ಆರು ತಿಂಗಳಲ್ಲಿ ರಾಜ್ಯದ ಸರಕಾರಿ ಆಸ್ಪತ್ರೆಗಳ ಮೂಲಸೌಕರ್ಯ ಅಭಿವೃದ್ಧಿಗೆ ಕ್ರಮ ವಹಿಸಿದ್ದು, ಇದೀಗ ಅನುಕೂಲವಾಗಿದೆ. ಸರಕಾರದ ಶಿಫಾರಸಿನ ಮೇರೆಗೆ ರೋಗಿಗಳನ್ನು ದಾಖಲಿಸಲು ಖಾಸಗಿ ಆಸ್ಪತ್ರೆಗಳ ಶೇ.50ರಷ್ಟು ಹಾಸಿಗೆಗಳನ್ನು ಪಡೆಯಲಾಗುತ್ತಿದೆ ಎಂದು ಅವರು ತಿಳಿಸಿದರು.

ಬೆಂಗಳೂರಿನಲ್ಲಿ ಕೋವಿಡ್ ನಿರ್ವಹಣೆಗೆ ಕೈಗೊಂಡಿರುವ ಕ್ರಮಗಳನ್ನು ವಿವರಿಸಿದ ಮುಖ್ಯಮಂತ್ರಿ, ನಗರದ 8 ವಲಯಗಳ ಕೋವಿಡ್ ನಿರ್ವಹಣೆ ಉಸ್ತುವಾರಿಗೆ ಸಚಿವರನ್ನು ನೇಮಕ ಮಾಡಲಾಗಿದೆ. ಹಿರಿಯ ಐಎಎಸ್ ಅಧಿಕಾರಿಗಳನ್ನು ನೋಡಲ್ ಅಧಿಕಾರಿಗಳನ್ನಾಗಿ ನೇಮಕ ಮಾಡಲಾಗಿದೆ. ಲಸಿಕೆ ಕಾರ್ಯಕ್ರಮದ ಪ್ರಗತಿಯೂ ಉತ್ತಮವಾಗಿದ್ದು, ಈವರೆಗೆ 82 ಲಕ್ಷ ಜನರಿಗೆ ಲಸಿಕೆ ನೀಡಲಾಗಿದೆ. ಮೇ 1ರಿಂದ ಹೊಸ ಲಸಿಕಾ ನೀತಿ ಜಾರಿಗೆ ಬರುತ್ತಿರುವ ಹಿನ್ನೆಲೆಯಲ್ಲಿ ಎಲ್ಲ ರಾಜ್ಯಗಳಿಗೂ ಲಸಿಕೆಗಳು ಸಮಾನವಾಗಿ ಹಂಚಿಕೆಯಾಗುವಂತೆ ಕ್ರಮ ಕೈಗೊಳ್ಳಲಾಗುವುದು ಎಂದು ವಿವರಿಸಿದರು.

ಸ್ಟೆಪ್ ಡೌನ್ ಆಸ್ಪತ್ರೆಗಳಿಗೆ ಅನುಮತಿ
ಮುಂದಿನ ದಿನಗಳಲ್ಲಿ ಹೆಚ್ಚಿನ ಬೇಡಿಕೆ ಬಂದರೆ ಅನುವಾಗುವಂತೆ ಖಾಸಗಿ ಆಸ್ಪತ್ರೆಗಳು ಸಮೀಪದ ಹೊಟೇಲ್‍ಗಳ ಸಹಯೋಗದೊಂದಿಗೆ ಸ್ಟೆಪ್ ಡೌನ್ ಆಸ್ಪತ್ರೆಗಳನ್ನು ಸ್ಥಾಪಿಸಲು ಅನುಮತಿ ನೀಡಲಾಗಿದೆ. ಐಸಿಯು ಸೌಲಭ್ಯಗಳಿರುವ ಫೀಲ್ಡ್ ಆಸ್ಪತ್ರೆಗಳನ್ನು ಸ್ಥಾಪಿಸಲು ಚಿಂತನೆ ನಡೆಸಲಾಗುತ್ತಿದೆ. ರಾಜ್ಯದಲ್ಲಿ ರೆಮ್‍ಡಿಸಿವಿರ್ ಕೊರತೆಯಾಗದಂತೆ ಎಚ್ಚರ ವಹಿಸಲಾಗುತ್ತಿದ್ದು, ಮುಂದಿನ 10 ದಿನಗಳಿಗೆ 2 ಲಕ್ಷ ಡೋಸ್‍ಗಳಷ್ಟು ರೆಮ್‍ಡಿಸಿವಿರ್ ಒದಗಿಸಬೇಕು'
-ಯಡಿಯೂರಪ್ಪ, ಮುಖ್ಯಮಂತ್ರಿ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News