×
Ad

ಸರ್ಕಾರದ ಮಾರ್ಗಸೂಚಿಯನ್ನು ಜಾರಿಗೊಳಿಸಲು ಸಚಿವ ಕೋಟ ಸೂಚನೆ

Update: 2021-04-23 21:33 IST

ಮಂಗಳೂರು, ಎ.23: ಕೋವಿಡ್ ನಿಯಂತ್ರಣಕ್ಕೆ ರಾಜ್ಯ ಸರಕಾರ ಹೊರಡಿಸಿರುವ ಕಠಿಣ ನಿಯಮಗಳ ಸಹಿತ ಎಲ್ಲಾ ಮಾರ್ಗ ಸೂಚಿಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕು ಎಂದು ದ.ಕ.ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅಧಿಕಾರಿಗಳಿಗೆ ಸೂಚನೆ ನೀಡಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕೋವಿಡ್ ನಿಯಂತ್ರಣ ಕುರಿತು ಶುಕ್ರವಾರ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಕೊರೋನ ಸೋಂಕು ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸರಕಾರ ಅನೇಕ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿ ದ್ದರೂ ಕೂಡ ಸೋಂಕು ವ್ಯಾಪಕವಾಗಿ ಹರಡುತ್ತಿದೆ. ಹಾಗಾಗಿ ಅನಿವಾರ್ಯವಾಗಿ ಲಾಕ್‌ಡೌನ್ ಮಾಡಲಾಗಿದೆ. ಹಾಗಾಗಿ ಸಾರ್ವಜನಿಕರು ಅನಗತ್ಯವಾಗಿ ಓಡಾಡುವುದನ್ನು ನಿಲ್ಲಿಸಬೇಕು. ಅಗತ್ಯವಿದ್ದರೆ ಮಾತ್ರ ಮನೆಯಿಂದ ಹೊರಬರಬೇಕು ಎಂದು ಸಾರ್ವಜನಿಕರಲ್ಲಿ ಸಚಿವರು ಮನವಿ ಮಾಡಿದರು.

ಜಿಲ್ಲೆಯಲ್ಲಿ ಕೋವಿಡ್-19 ಪೀಡಿತರಿಗೆ ಚಿಕಿತ್ಸೆ ನೀಡಲು ಸರಕಾರಿ ಸಹಿತ ಖಾಸಗಿ 66 ಆಸ್ಪತ್ರೆಗಳಲ್ಲಿ 4,816 ಬೆಡ್‌ಗಳನ್ನು ಕಾಯ್ದಿರಿಸಲಾಗಿದೆ. ಅವುಗಳಲ್ಲಿ 3,035 ಸಾಮಾನ್ಯ ಬೆಡ್‌ಗಳು, 1,263 ಆಕ್ಸಿಜೆನ್ ಬೆಡ್‌ಗಳು, 243 ಹೈಪ್ರೆಷರ್ ಬೆಡ್‌ಗಳು, 135 ಐಸಿಯು ಬೆಡ್‌ಗಳು, 140 ವೆಂಟಿಲೇಟರ್ ಐಸಿಯು ಬೆಡ್ ಸೇರಿವೆ ಎಂದ ಅವರು, ಕೋವಿಡ್ ಚಿಕಿತ್ಸೆಗೆ ಅಗತ್ಯವಿರುವ ಔಷಧಿಗಳು ಸೇರಿದಂತೆ ರೆಮಿಡೀಸ್ ಸಿವಿಯರ್ ಹಾಗೂ ಆಕ್ಸಿಜೆನ್ ಕೊರತೆ ಉಂಟಾಗದಂತೆ ನೋಡಿಕೊಳ್ಳಬೇಕು ಎಂದರು.

ಕೋವಿಡ್ ದೃಢಪಟ್ಟು ತೀವ್ರ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿರುವವರು ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕದಡಿ ಖಾಸಗಿ ನರ್ಸಿಂಗ್ ಹೋಂಗಳಲ್ಲಿ ಚಿಕಿತ್ಸೆ ಪಡೆಯಲು ಅವಕಾಶವಿದೆ. ಸಾಮಾನ್ಯ ಸೋಂಕಿತರು ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯ ಬಹುದು ಎಂದ ಅವರು, ಖಾಸಗಿ ಆಸ್ಪತ್ರೆಗಳಲ್ಲಿ ಸರಕಾರ ಕೋವಿಡ್ ಚಿಕಿತ್ಸೆಗೆ ನಿಗದಿಪಡಿಸಿರುವ ದರವನ್ನು ಪಡೆಯಬಹುದು. ಅಧಿಕ ದರ ವಸೂಲಿ ಮಾಡಿದರೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿಗಳಿಗೆ ದೂರು ನೀಡಬಹುದು ಎಂದರು.

ಕೋವಿಡ್‌ನಿಂದ ಮರಣ ಹೊಂದುವವರ ಅಂತ್ಯ ಸಂಸ್ಕಾರರದ ವೆಚ್ಚವನ್ನು ಸರಕಾರವೇ ಭರಿಸುತ್ತದೆ. ಅದರ ನಿರ್ವಹಣೆಯನ್ನು ಮಂಗಳೂರು ಮನಪಾ ಸಹಿತ ಸ್ಥಳೀಯಾಡಳಿತ ಸಂಸ್ಥೆಗಳು ನಿರ್ವಹಿಸಬೇಕು. ಇದರ ಮೇಲುಸ್ತುವಾರಿಗೆ ನೋಡಲ್ ಅಧಿಕಾರಿ ಗಳನ್ನು ನೇಮಕ ಮಾಡಬೇಕು ಎಂದು ಸಚಿವರು ಸೂಚನೆ ನೀಡಿದರು.

ಕೊರೋನ ನಿರೋಧಕ ಚುಚ್ಚುಮದ್ದುಗಳನ್ನು 18 ವರ್ಷ ಮೇಲ್ಪಟ್ಟ ಎಲ್ಲರಿಗೂ ನೀಡಲು ಸರಕಾರ ಬದ್ಧವಾಗಿದೆ. ಜಿಲ್ಲೆಯಲ್ಲಿ ಅವಶ್ಯವಿರುವ ಚುಚ್ಚುಮದ್ದನ್ನು ದಾಸ್ತಾನು ಇಟ್ಟುಕೊಳ್ಳಲು ಕ್ರಮಕೈಗೊಳ್ಳಬೇಕು ಎಂದರು.

ಸಭೆಯಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್, ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ., ಪೊಲೀಸ್ ಆಯುಕ್ತ ಶಶಿಕುಮಾರ್, ಜಿಪಂ ಸಿಇಒ ಡಾ.ಕುಮಾರ್, ಶಾಸಕರಾದ ವೇದವ್ಯಾಸ ಕಾಮತ್, ರಾಜೇಶ್ ನಾಯ್ಕ್, ಹರೀಶ್ ಪೂಂಜ, ಮನಪಾ ಆಯುಕ್ತ ಅಕ್ಷಯ್ ಶ್ರೀಧರ್, ಮೇಯರ್ ಪ್ರೇಮಾನಂದ ಶೆಟ್ಟಿ, ಉಪಮೇಯರ್ ಸುಮಂಗಳಾ ರಾವ್ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News