ವಾರಂತ್ಯದ ಕರ್ಫ್ಯೂ ವಿಸ್ತರಣೆ ಬಗ್ಗೆ ಮುಖ್ಯಮಂತ್ರಿಯಿಂದ ಸೂಕ್ತ ನಿರ್ಧಾರ: ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್

Update: 2021-04-24 14:18 GMT

ಬೆಂಗಳೂರು, ಎ. 24: ರಾಜ್ಯದಲ್ಲಿ ಕೊರೋನ ವೈರಸ್ ಸೋಂಕು ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ವಾರಂತ್ಯದ ಕರ್ಫ್ಯೂವನ್ನು ವಾರದ ದಿನಗಳಲ್ಲಿಯೂ ಮೇ 4ರವರೆಗೆ ಮುಂದುವರೆಸುವುದು ಸೂಕ್ತ ಎಂಬ ಅಭಿಪ್ರಾಯವನ್ನು ಅಧಿಕಾರಿಗಳು ವ್ಯಕ್ತಪಡಿಸಿದ್ದಾರೆ ಎಂದು ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್ ಇಂದಿಲ್ಲಿ ತಿಳಿಸಿದ್ದಾರೆ.

ಶನಿವಾರ ನಗರದಲ್ಲಿ ಬಿಬಿಎಂಪಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಬಳಿಕ ಮಾತನಾಡಿದ ಅವರು, ರಾಜ್ಯದಲ್ಲಿ ವಾರಾಂತ್ಯದ ಕರ್ಫ್ಯೂವನ್ನು ವಾರದ ದಿನಗಳಲ್ಲಿ ಮುಂದುವರಿಸಿದರೆ ಒಳಿತು ಎಂಬ ಅಭಿಪ್ರಾಯ ಸಭೆಯಲ್ಲಿ ಕೇಳಿ ಬಂದಿದೆ. ಈ ಕುರಿತು ರಾಜ್ಯ ಸರಕಾರ ಹಾಗೂ ಮುಖ್ಯಮಂತ್ರಿ ಯಡಿಯೂರಪ್ಪನವರು ಸೂಕ್ತ ನಿರ್ಧಾರವನ್ನು ಕೈಗೊಳ್ಳಲಿದ್ದಾರೆ ಎಂದು ಸ್ಪಷ್ಟಪಡಿಸಿದರು.

ಸೋಂಕು ತಡೆಗಟ್ಟುವ ಉದ್ದೇಶದಿಂದ ಮಾರ್ಗಸೂಚಿ ಪಾಲನೆ ಸೇರಿದಂತೆ ಜನಸಾಮಾನ್ಯರ ಮೇಲೆಯೂ ಜವಾಬ್ದಾರಿ ಇದೆ. ಎಲ್ಲವನ್ನೂ ಸರಕಾರವೇ ಮಾಡುತ್ತದೆ ಎಂಬ ಭಾವನೆ ಸರಿಯಲ್ಲ ಎಂದು ಆಕ್ಷೇಪಿಸಿದ ಅವರು, ಜನರು ಅನಗತ್ಯ ಹೊರಗೆ ಸಂಚರಿಸಬಾರದು. ಸರಕಾರದೊಂದಿಗೆ ಜನರು ಕೈಜೋಡಿಸಬೇಕು. ರಾಜ್ಯದಲ್ಲಿ ಸೋಂಕಿನ ಪ್ರಮಾಣ ತ್ವರಿತ ಗತಿಯಲ್ಲಿ ಹೆಚ್ಚಾಗುತ್ತಿದೆ. ಒಂದೆರಡು ವಾರಗಳಲ್ಲಿ ಸೋಂಕು ಕಡಿಮೆಯಾಗಬಹುದೆಂಬ ನಿರೀಕ್ಷೆ ಇದೆ ಎಂದು ಹೇಳಿದರು.

ರಾಜ್ಯದಲ್ಲಿ ಆರ್ಥಿಕ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ವಾಣಿಜ್ಯ ಚಟುವಟಿಕೆಗಳು ನಡೆಯಬೇಕಿದೆ. ಹೀಗಾಗಿ ಸಂಪೂರ್ಣ ಲಾಕ್‍ಡೌನ್ ಮಾಡಲು ಸಾಧ್ಯವಿಲ್ಲ. ವಾರಾಂತ್ಯದ ಕರ್ಫ್ಯೂ ಸೇರಿದಂತೆ ಕೆಲ ನಿರ್ಬಂಧಗಳನ್ನು ಹೇರಿದ್ದು, ಜನರು ಸಹಕರಿಸುವ ಮೂಲಕ ಸೋಂಕು ಹರಡುವುದನ್ನು ತಡೆಗಟ್ಟಬೇಕು ಎಂದು ರವಿಕುಮಾರ್ ಅವರು, ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗಳಿಗೆ ಉತ್ತರಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News