'ಟೀಕಾ ಉತ್ಸವ್'ನಂತಹ ಬಾಯಿ ಬಡಾಯಿ ಬಿಟ್ಟಾಕಿ ಎಲ್ಲರಿಗೂ ಉಚಿತವಾಗಿ ಲಸಿಕೆ ನೀಡಿ: ಸಿದ್ದರಾಮಯ್ಯ

Update: 2021-04-25 12:00 GMT

ಬೆಂಗಳೂರು, ಎ. 25: 'ಕೋವಿಡ್ ಲಸಿಕೆ ಪಡೆಯುವುದನ್ನು ಪ್ರೋತ್ಸಾಹಿಸಬೇಕಾದ ಕೇಂದ್ರ ಸರಕಾರ, ಅದರ ಬೆಲೆ ಏರಿಸಿ ಜನತೆ ಅದನ್ನು ಪಡೆಯದಂತೆ ಮಾಡಲು ಹೊರಟಿದೆ. ನರೇಂದ್ರ ಮೋದಿ ಅವರೇ, 'ಟೀಕಾ ಉತ್ಸವ್'ನಂತಹ ಬಾಯಿ ಬಡಾಯಿಯನ್ನು ಬಿಟ್ಟಾಕಿ ಮೊದಲು ಎಲ್ಲರಿಗೂ ಉಚಿತವಾಗಿ ಲಸಿಕೆ ನೀಡಿ' ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಇಂದಿಲ್ಲಿ ಆಗ್ರಹಿಸಿದ್ದಾರೆ.

ರವಿವಾರ ಸರಣಿ ಟ್ವೀಟ್ ಮಾಡಿರುವ ಅವರು, `ಅನ್ನಭಾಗ್ಯ ಯೋಜನೆ ಎಂದರೆ ಉರ್ಕೊಳ್ಳುತ್ತಿದ್ದ ಮತ್ತು ಆ ಯೋಜನೆಗೆ ಕಲ್ಲು ಹಾಕಲು ಪ್ರಯತ್ನಿಸುತ್ತಿರುವ ರಾಜ್ಯ ಬಿಜೆಪಿ ನಾಯಕರು, ಈಗ ಪ್ರಧಾನಿ ಮೋದಿ ಘೋಷಿಸಿರುವ ಎರಡು ತಿಂಗಳ ಕಾಲ ಐದು ಕಿಲೋ ಅಕ್ಕಿ ನೀಡುವ ಯೋಜನೆಯನ್ನು ಕೊಂಡಾಡುತ್ತಿರುವುದು ತಮಾಷೆಯಾಗಿದೆ' ಎಂದು ಇದೇ ಸಂದರ್ಭದಲ್ಲಿ ಲೇವಡಿ ಮಾಡಿದ್ದಾರೆ.

`ಕೊರೋನ ಸೋಂಕಿನಿಂದ ತೀವ್ರ ಸಂಕಷ್ಟಕ್ಕೀಡಾಗಿರುವ ಜನರಿಗೆ ಪ್ರತಿ ತಿಂಗಳು ಉಚಿತವಾಗಿ ಹತ್ತು ಕಿಲೋ ಅಕ್ಕಿ ನೀಡಬೇಕೆಂದು ಪ್ರಾರಂಭದಿಂದಲೂ ಒತ್ತಾಯಿಸುತ್ತಾ ಬಂದಿದ್ದೇನೆ. ಪ್ರಧಾನಿ ಮೋದಿಯವರು ಈಗಲಾದರೂ ಎಚ್ಚೆತ್ತುಕೊಳ್ಳಿ. ಕೊರೋನ ಕಷ್ಟ ಕೊನೆಯಾಗುವವರೆಗಾದರೂ ಹತ್ತು ಕಿಲೋ ಅಕ್ಕಿ ನೀಡಿ ಪುಣ್ಯ ಕಟ್ಕೊಳ್ಳಿ' ಎಂದು ಸಿದ್ದರಾಮಯ್ಯ ಇದೇ ವೇಳೆ ಆಗ್ರಹಿಸಿದ್ದಾರೆ.

`ಅನ್ನಭಾಗ್ಯ ಯೋಜನೆಯನ್ನು ನಿಲ್ಲಿಸಲು ಶತಪ್ರಯತ್ನ ಮಾಡುತ್ತಿರುವ ರಾಜ್ಯ ಸರಕಾರ ಹಲವಾರು ಜಿಲ್ಲೆಗಳಲ್ಲಿ ತಿಂಗಳಿಗೆ ಐದು ಕಿಲೋ ಅಕ್ಕಿ ಬದಲಿಗೆ ಎರಡು ಕಿಲೋ ಅಕ್ಕಿ ನೀಡುತ್ತಿದೆ. ಮುಖ್ಯಮಂತ್ರಿ ಯಡಿಯೂರಪ್ಪ ಅವರೇ, ಈ ಅನ್ಯಾಯವನ್ನು ತಕ್ಷಣ ಸರಿಪಡಿಸಿ. ಬಡವರ ಶಾಪಕ್ಕೆ ಈಡಾಗಬೇಡಿ' ಎಂದು ಸಿದ್ದರಾಮಯ್ಯ ಇದೇ ಸಂದರ್ಭದಲ್ಲಿ ಎಚ್ಚರಿಕೆ ನೀಡಿದ್ದಾರೆ.

`ಕರ್ನಾಟಕವನ್ನು ಹಸಿವು ಮುಕ್ತ ರಾಜ್ಯ ಮಾಡುವ ಉದ್ದೇಶದಿಂದ ಅನ್ನಭಾಗ್ಯ, ಕ್ಷೀರಭಾಗ್ಯ, ಇಂದಿರಾ ಕ್ಯಾಂಟೀನ್, ಮಾತೃಪೂರ್ಣ ಮೊದಲಾದ ಯೋಜನೆಗಳನ್ನು ಜಾರಿಗೆ ತಂದಿದ್ದೆ. ಅವೆಲ್ಲವನ್ನೂ ಬಡವರ ವಿರೋಧಿ ರಾಜ್ಯ ಬಿಜೆಪಿ ಸರಕಾರ ನಿಲ್ಲಿಸಲು ಹೊರಟಿದೆ. ಅವುಗಳಿಗೆ ಅಡ್ಡಗಾಲು ಹಾಕಿದರೆ ಬಡವರ ಶಾಪ ತಟ್ಟದೆ ಇರದು' ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಇದೇ ವೇಳೆ ಎಚ್ಚರಿಸಿದ್ದಾರೆ.

`ಔಷಧಿ, ಆಮ್ಲಜನಕ, ವೆಂಟಿಲೇಟರ್ ಕೊಡಿ ಎಂದು ಪ್ರಧಾನಿ ಮೋದಿ ಅವರನ್ನು ಬೇಡುತ್ತಿರುವ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಕಂಡಾಗ ಕನಿಕರ ಮೂಡುತ್ತಿದೆ. ಕರ್ನಾಟಕ ರಾಜ್ಯದಿಂದ ಆಯ್ಕೆಯಾಗಿರುವ 25 ಮಂದಿ ಬಿಜೆಪಿ ಸಂಸದರು ಎಲ್ಲಿ ಅಡಗಿ ಕೂತಿದ್ದಾರೆ? ಅವರನ್ನು ದೆಹಲಿಗೆ ಅಟ್ಟಿ ರಾಜ್ಯದ ನ್ಯಾಯಬದ್ಧ ಪಾಲಿಗಾಗಿ ಪ್ರಧಾನಿ ಮನೆ ಮುಂದೆ ಧರಣಿ ಕೂರಿಸಿ'
-ಸಿದ್ದರಾಮಯ್ಯ, ವಿಪಕ್ಷ ನಾಯಕ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News