ಕೋವಿಡ್ ಸೋಂಕಿತರೆಲ್ಲ ಆಸ್ಪತ್ರೆಗೆ ದಾಖಲಾಗಬೇಕಿಲ್ಲ: ಡಾ.ಅಶ್ವತ್ಥ ನಾರಾಯಣ

Update: 2021-04-25 12:06 GMT

ಬೆಂಗಳೂರು, ಎ. 25: ಕೋವಿಡ್ ಸೋಂಕಿತರು ಹೊರ ರೋಗಿಗಳಾಗಿ(ಒಪಿಡಿ)ಆಸ್ಪತ್ರೆಗೆ ಬಂದು ಚಿಕಿತ್ಸೆ ಪಡೆದು ಮನೆಯಲ್ಲೇ ಹೋಮ್ ಕ್ವಾರಂಟೈನ್ ಆಗಬಹುದು. ಉತ್ತಮ ಔಷಧಿ ನೀಡಲಾಗುತ್ತಿದೆ. ರೋಗ ಲಕ್ಷಣಗಳಿದ್ದವರೆಲ್ಲ ಆಸ್ಪತ್ರೆಗೆ ದಾಖಲಾಗಬೇಕು ಎಂದಿಲ್ಲ. ಮನೆಯಲ್ಲೇ ಇದ್ದು ಉತ್ತಮ ಚಿಕಿತ್ಸೆ ಪಡೆಯಬಹುದು ಎಂದು ಉಪ ಮುಖ್ಯಮಂತ್ರಿ ಡಾ.ಅಶ್ವತ್ಥ ನಾರಾಯಣ ಇಂದಿಲ್ಲಿ ಹೇಳಿದ್ದಾರೆ.

ರವಿವಾರ ಇಲ್ಲಿನ ಮಲ್ಲೇಶ್ವರಂನಲ್ಲಿರುವ ಕೆ.ಸಿ.ಜನರಲ್ ಆಸ್ಪತ್ರೆಯ ಕೋವಿಡ್ ಚಿಕಿತ್ಸಾ ಘಟಕಗಳಿಗೆ ಭೇಟಿ ಸೋಂಕಿತರ ಯೋಗ ಕ್ಷೇಮ ವಿಚಾರಿಸಿದರು. ಇದೇ ಸಂದರ್ಭದಲ್ಲಿ ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ ಸಂಸದ ಪಿ.ಸಿ.ಮೋಹನ್ ಅವರೊಂದಿಗೆ ಆಸ್ಪತ್ರೆಗೆ ಬಂದ ಅವರು ಪಿಪಿಎ ಕಿಟ್ ಧರಿಸಿ ಸೋಂಕಿತರನ್ನು ಭೇಟಿ ಮಾಡಿ ಮಾತನಾಡಿದರು.

ಅಲ್ಲದೆ, ಮಲ್ಲೇಶ್ವರಂ ಕೆ.ಸಿ.ಜನರಲ್ ಆಸ್ಪತ್ರೆ ಆವರಣದಲ್ಲಿ ಹೊಸದಾಗಿ ಸ್ಥಾಪಿಸಲಾಗಿರುವ ಮಾಡ್ಯೂಲರ್ ಕೋವಿಡ್ ಐಸಿಯು ಘಟಕಗಳ ಒಳಕ್ಕೂ ಅವರು ತೆರಳಿ ಅಲ್ಲಿನ ವ್ಯವಸ್ಥೆಯನ್ನು ಕೂಲಂಕಶವಾಗಿ ಪರಿಶೀಲನೆ ಮಾಡಿದರು. ಕೆ.ಸಿ. ಜನರಲ್ ಆಸ್ಪತ್ರೆಯಲ್ಲಿ ಹೆಚ್ಚು ತಜ್ಞ ವೈದ್ಯರು ಕರ್ತವ್ಯ ನಿರ್ವಹಿಸುತ್ತಿದ್ದು, ಅತ್ಯುತ್ತಮ ಸೌಲಭ್ಯಗಳು ಇವೆ. ಹೀಗಾಗಿ ಇಲ್ಲಿಯೇ ಇನ್ನೊಂದು ದೊಡ್ಡ ಪ್ರಮಾಣದ ಹೊರ ರೋಗಿಗಳ ವಿಭಾಗ(ಒಪಿಡಿ)ವನ್ನು ತೆರೆಯಲು ಸರಕಾರ ನಿರ್ಧರಿಸಿದೆ ಎಂದು ಡಾ.ಅಶ್ವತ್ಥ ನಾರಾಯಣ ಹೇಳಿದರು. 

ಕೆ.ಸಿ.ಜನರಲ್ ಆಸ್ಪತ್ರೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸುರೇಖಾ ಎಂಬ ನರ್ಸ್ ಹೆಸರನ್ನು ಪ್ರಧಾನಿ ಮೋದಿ ಅವರು ತಮ್ಮ ಜನಪ್ರಿಯ `ಮನ್ ಕೀ ಬಾತ್' ಭಾಷಣದಲ್ಲಿ ಪ್ರಸ್ತಾಪ ಮಾಡಿದ್ದಾರೆ. ಇದು ಅತ್ಯಂತ ಸಂತೋಷದ ಸಂಗತಿ. ಅವರಿಗೆ ಸರಕಾರದ ಮೆಚ್ಚುಗೆ ಇದೆ. ಹಾಗೆಯೇ ಆಸ್ಪತ್ರೆಯ ಎಲ್ಲ ವೈದ್ಯರು, ನರ್ಸ್‍ಗಳು ಹಾಗೂ ಪ್ಯಾರಾ ಮಡಿಕಲ್ ಸಿಬ್ಬಂದಿ ತಮ್ಮ ಜೀವವನ್ನು ಒತ್ತೆ ಇಟ್ಟು ಕರ್ತವ್ಯ ನಿರ್ವಹಿಸುತ್ತಿದ್ದಾರೆ ಎಂದು ಅವರು ಹೇಳಿದರು. 

'ಬೆಡ್ ಕೊರತೆ ನೀಗಿಸುತ್ತೇವೆ': ಬೆಂಗಳೂರು ನಗರದಲ್ಲಿ ಕೋವಿಡ್ ಸೋಂಕಿತರಿಗೆ ಹಾಸಿಗೆಗಳ ಕೊರತೆ ಇದೆ. ಅದನ್ನು ಇಲ್ಲ ಎಂದು ಹೇಳುತ್ತಿಲ್ಲ. ಆದರೆ, ಆ ಸಮಸ್ಯೆಯನ್ನು ಬಗೆಹರಿಸಲು ಎಲ್ಲ ಪ್ರಯತ್ನ ಮಾಡಲಾಗುತ್ತಿದೆ. ಒಂದು ವೇಳೆ ಬೆಡ್ ಸಿಗದಿದ್ದರೂ ಕೆ.ಸಿ.ಜನರಲ್ ಆಸ್ಪತ್ರೆಯಲ್ಲಿ ಯಾರೇ ಬಂದರೂ ಅವರನ್ನು ತಪಾಸಣೆ ಮಾಡಿ ಉತ್ತಮ ಚಿಕಿತ್ಸೆ ನೀಡುವ ವ್ಯವಸ್ಥೆ ಮಾಡಿದ್ದೇವೆ ಎಂದು ಡಾ.ಅಶ್ವತ್ಥನಾರಾಯಣ ಪ್ರಶ್ನೆಯೊಂದಕ್ಕೆ ಉತ್ತರ ನೀಡಿದರು. 

ಈ ಆಸ್ಪತ್ರೆಯಲ್ಲಿ 450 ಬೆಡ್ ವ್ಯವಸ್ಥೆ ಇದೆ. ಇದು ಸಾಕಾಗುತ್ತಿಲ್ಲ ನಿಜ. ಆದರೆ ದಿನಕ್ಕೆ ಕೊನೆಪಕ್ಷ 2 ಸಾವಿರ ಜನರಿಗೆ ಚಿಕಿತ್ಸೆ ಸಿಗುವ ವ್ಯವಸ್ಥೆ ಆಗಬೇಕು. ಅದಕ್ಕೆ ಅಗತ್ಯವಾದ ಪ್ರಯತ್ನ ಮಾಡುತ್ತಿದ್ದೇವೆ ಎಂದರು ಅವರು, ಕೋವಿಡ್ ಪೀಡಿತರೆಲ್ಲರೂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುವ ಅಗತ್ಯವಿಲ್ಲ. ಮನೆಗಳಲ್ಲೇ ಪ್ರತ್ಯೇಕವಾಗಿದ್ದು ಚಿಕಿತ್ಸೆ ಪಡೆದು ಗುಣಮುಖರಾಗಬಹುದು ಎಂದು ಹೇಳಿದರು. 

'ರೆಮ್‍ಡಿಸಿವಿರ್ ಕೊರತೆ ಇಲ್ಲ': ರಾಜ್ಯದಲ್ಲಿ ರೆಮ್‍ಡಿಸಿವಿರ್ ಕೊರತೆ ಬಹತೇಕ ನೀಗುತ್ತಿದೆ. ಕೇಂದ್ರ ಸರಕಾರದಿಂದ ಇಂದು 1.50 ಲಕ್ಷಕ್ಕಿಂತ ಹೆಚ್ಚಿನ ರೆಮ್‍ಡಿಸಿವಿರ್ ವಯಲ್ಸ್ ರಾಜ್ಯಕ್ಕೆ ಹಂಚಿಕೆಯಾಗಿದೆ. ಇನ್ನು ಕೊರತೆಯಾಗಲ್ಲ, ಅಗತ್ಯ ಇರುವವರಿಗೆ ನೀಡಲಾಗುವುದು. ಅದಕ್ಕೆ ಎಲ್ಲ ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದು ಡಾ.ಅಶ್ವತ್ಥ ನಾರಾಯಣ ಪ್ರಶ್ನೆಯೊಂದಕ್ಕೆ ಉತ್ತರ ನೀಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News