ಕೊರೋನ ಚಿಕಿತ್ಸೆ ಬಗ್ಗೆ ಸುಳ್ಳು ಮಾಹಿತಿ ಆರೋಪ: ಖಾಸಗಿ ಆಸ್ಪತ್ರೆಗಳಿಗೆ ನೋಟಿಸ್ ಜಾರಿಗೊಳಿಸಿದ ಆರೋಗ್ಯ ಇಲಾಖೆ

Update: 2021-04-28 13:29 GMT
ಸಾಂದರ್ಭಿಕ ಚಿತ್ರ

ಹುಬ್ಬಳ್ಳಿ, ಎ.28: ಕೊರೋನ ಸೋಂಕಿತರ ಚಿಕಿತ್ಸೆಯ ಕುರಿತಂತೆ ಸರಕಾರಕ್ಕೆ ಹಾಗೂ ಜಿಲ್ಲಾಡಳಿತಕ್ಕೆ ಸುಳ್ಳು ಮಾಹಿತಿ ನೀಡಿದ ಹುಬ್ಬಳ್ಳಿಯ ಮೂರು ಖಾಸಗಿ ಆಸ್ಪತ್ರೆಗಳಿಗೆ ಆರೋಗ್ಯ ಇಲಾಖೆ ನೋಟಿಸ್ ನೀಡಿದೆ.

ಸುಳ್ಳು ಲೆಕ್ಕ ನೀಡಿದ ಮೂರು ಆಸ್ಪತ್ರೆಗಳಿಗೆ ಸಾಂಕ್ರಾಮಿಕ ರೋಗ ಕಾಯ್ದೆ ಹಾಗೂ ವಿಪತ್ತು ನಿರ್ವಹಣಾ ಕಾಯ್ದೆ ಅನ್ವಯ 24 ಗಂಟೆಯಲ್ಲಿ ಉತ್ತರ ನೀಡುವಂತೆ ತಿಳಿಸಿ ನೋಟಿಸ್ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಮಾಹಿತಿ ನೀಡಿದ್ದಾರೆ.

ಮೊದಲನೆ ಖಾಸಗಿ ಆಸ್ಪತ್ರೆಯಲ್ಲಿ ಕೋವಿಡ್ ಸೋಂಕಿತರ ಚಿಕಿತ್ಸೆಗಾಗಿ 75 ಹಾಸಿಗೆಗಳನ್ನು ಮೀಸಲಿಡಲಾಗಿದ್ದು, 31 ಜನ ಸೋಂಕಿತರಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಆಸ್ಪತ್ರೆಯವರು ಮಾಹಿತಿ ನೀಡಿದ್ದರು. ಆದರೆ ಜಿಲ್ಲಾ ಆರೋಗ್ಯಾಧಿಕಾರಿ ಶಕುಂತಲಾ ಆಸ್ಪತ್ರೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಕೇವಲ 6 ಜನ ಕೋವಿಡ್ ಸೋಂಕಿತರು ಮಾತ್ರ ಚಿಕಿತ್ಸೆ ಪಡೆಯುತ್ತಿದ್ದರು. ಅಲ್ಲದೆ, ಕೊರೋನ ಅಲ್ಲದ ಪ್ರಕರಣಗಳನ್ನು ಕೂಡಾ ಕೊರೋನ ಸೋಂಕಿತರು ಎಂದು ಪರಿಗಣಿಸಿ ಜಿಲ್ಲಾಡಳಿತಕ್ಕೆ ಒಟ್ಟು 31 ಜನ ಕೋವಿಡ್ ಸೋಂಕಿತರಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಸುಳ್ಳು ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ.

ಎರಡನೆ ಆಸ್ಪತ್ರೆಯಲ್ಲಿ ಕೊರೋನ ಸೋಂಕಿತರ ಚಿಕಿತ್ಸೆಗಾಗಿ 26 ಹಾಸಿಗೆಗಳನ್ನು ಮೀಸಲಿಡಲಾಗಿದ್ದು, 26 ಪ್ರಕರಣಗಳನ್ನು ದಾಖಲು ಮಾಡಿಕೊಳ್ಳಲಾಗಿದೆ ಎಂದು ಆಸ್ಪತ್ರೆಯಿಂದ ಮಾಹಿತಿ ನೀಡಿದ್ದರು. ಆದರೆ ಜಿಲ್ಲಾ ಆರೋಗ್ಯಾಧಿಕಾರಿ ಭೇಟಿ ನೀಡಿದ ಸಂದರ್ಭದಲ್ಲಿ ಕೇವಲ 6 ಜನರಿಗೆ ಚಿಕಿತ್ಸೆ ನೀಡುತ್ತಿರುವುದು ಕಂಡು ಬಂದಿದೆ.

ಮೂರನೆ ಆಸ್ಪತ್ರೆಯಲ್ಲಿ 150 ಹಾಸಿಗೆಗಳಿಗೆ ಅನುಮತಿ ಪಡೆದಿದ್ದು, ಇದರಲ್ಲಿ ಶೇ.50ರಷ್ಟು ಹಾಸಿಗೆಗಳನ್ನು ಕೋವಿಡ್ ಸೋಂಕಿತರಿಗೆ ಮೀಸಲಿಡಬೇಕಾಗಿತ್ತು. ಆದರೆ ಈ ಆಸ್ಪತ್ರೆಯವರು ಕೋವಿಡ್ ದೃಢಪಟ್ಟ ಪ್ರಕರಣಗಳ ಲ್ಯಾಬೋರೇಟರಿ ಫಲಿತಾಂಶ ಇಲ್ಲದೇ ಕೋವಿಡ್ ಪ್ರಕರಣಗಳೆಂದು ಒಳರೋಗಿಯಾಗಿ ದಾಖಲು ಮಾಡಿಕೊಂಡಿರುವುದು ಕಂಡು ಬಂದಿದೆ.

ಸರಕಾರಕ್ಕೆ ಹಾಗೂ ಜಿಲ್ಲಾಡಳಿತಕ್ಕೆ ಈ ರೀತಿ ಸುಳ್ಳು ಮಾಹಿತಿ ನೀಡಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಡಿಸಿ ನಿತೇಶ್ ಪಾಟೀಲ್ ಮುಂದಿನ 24 ಗಂಟೆಗಳಲ್ಲಿ ಈ ಮೂರು ಆಸ್ಪತ್ರೆಗಳು ಸೂಕ್ತ ಕಾರಣ ನೀಡಬೇಕು ಇಲ್ಲದಿದ್ದಲ್ಲಿ, ಕಾನೂನು ಕ್ರಮ ಜರುಗಿಸಲಾಗುವುದು ಎಂದು ನೋಟಿಸ್‍ನಲ್ಲಿ ಎಚ್ಚರಿಕೆ ನೀಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News