ಲಸಿಕೆಯ ದಾಸ್ತಾನಿಲ್ಲದೆ ಪ್ರಚಾರ ತೆಗೆದುಕೊಳ್ಳುತ್ತಿರುವ ಕೇಂದ್ರ- ರಾಜ್ಯ ಸರಕಾರ: ಕುಮಾರಸ್ವಾಮಿ ಆಕ್ರೋಶ

Update: 2021-04-29 16:57 GMT

ಬೆಂಗಳೂರು, ಎ.29: ಮೇ ಒಂದರಿಂದ 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಲಸಿಕೆ ಎಂದು ಬೊಬ್ಬೆ ಹೊಡೆದ ಕೇಂದ್ರ ಮತ್ತು ರಾಜ್ಯ ಸರಕಾರ ಪುಕ್ಕಟೆ ಪುಂಗಿ ಊದಿದ್ದೇ ಬಂತು. ಲಸಿಕೆಯ ದಾಸ್ತಾನಿಲ್ಲದೆ, ಸೂಕ್ತ ಮುನ್ನೆಚ್ಚರಿಕೆ, ವ್ಯವಸ್ಥೆ ಮಾಡಿಕೊಳ್ಳದೆ ಬರೀ ಪ್ರಚಾರ ತೆಗೆದುಕೊಂಡ ಕೇಂದ್ರ, ರಾಜ್ಯ ಸರಕಾರಗಳ ನಿಲುವು ಅಕ್ಷಮ್ಯ ಮತ್ತು ಖಂಡನೀಯ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಸಂಬಂಧ ಸರಣಿ ಟ್ವೀಟ್‍ಗಳನ್ನು ಮಾಡಿರುವ ಅವರು, ಲಭ್ಯವಿರುವ ಮಾಹಿತಿ ಪ್ರಕಾರ ಮೇ ಒಂದರಿಂದ 18 ವರ್ಷ ಮೇಲ್ಪಟ್ಟವರಿಗೆ ಲಸಿಕೆ ನೀಡಲು ಸರಕಾರ ಏದುರುಸಿರು ಬಿಡುತ್ತಿದೆ. 45 ವರ್ಷ ಮೇಲ್ಪಟ್ಟವರಿಗೆ ಎರಡನೇ ಡೋಸ್ ಕೊಡಲು ಹೆಣಗಾಡುತ್ತಿದೆ ಎಂದು ಹೇಳಿದ್ದಾರೆ.

18 ವರ್ಷ ಮೇಲ್ಪಟ್ಟ ದೇಶದ ಕೋಟ್ಯಾಂತರ ಮಂದಿಗೆ ಲಸಿಕೆ ನೀಡುವುದಾಗಿ ಬಾಯಿಮಾತಿನ ಉಪಚಾರ ಮಾಡಿದ ಕೇಂದ್ರ ಮತ್ತು ರಾಜ್ಯ ಸರಕಾರದ ಹೊಣೆಗೇಡಿತನ ಮತ್ತು ತಿಕ್ಕಲುತನವನ್ನು ದೇಶದ ಜನತೆ ಎಂದಿಗೂ ಕ್ಷಮಿಸರು. ಆತುರಗಾರನಿಗೆ ಬುದ್ಧಿ ಕಡಿಮೆ ಎಂಬಂತೆ ಕೇವಲ ಮಾತಿನಲ್ಲಿ ಜನರನ್ನು ಓಲೈಸುವ ಇಂತಹ ಬೂಟಾಟಿಕೆಯನ್ನು ಸರಕಾರ ಬಿಡಬೇಕು. ‘ನಿಮ್ಮನ್ನು ನೀವೇ ಕಾಪಾಡಿಕೊಳ್ಳಿ’ ಎನ್ನುವ ಸರಕಾರ ಇದ್ದರೇನು? ಇಲ್ಲದಿದ್ದರೇನು? ಎಂದು ಅವರು ಟೀಕಿಸಿದ್ದಾರೆ.

ಮೊದಲ ಹಂತದಲ್ಲಿ 45 ವರ್ಷ ಮೇಲ್ಪಟ್ಟವರಿಗೆ ಎಷ್ಟು ಮಂದಿಗೆ ಲಸಿಕೆ ಹಾಕಲಾಗಿದೆ? ಅವರಲ್ಲಿ ಎಷ್ಟು ಮಂದಿಗೆ ಎರಡನೇ ಹಂತದಲ್ಲಿ ಲಸಿಕೆ ಕೊಡಲಾಗಿದೆ ಎಂಬ ಅಂಕಿ ಅಂಶಗಳನ್ನು ಸಾರ್ವಜನಿಕವಾಗಿ ಬಹಿರಂಗಗೊಳಿಸಿ. 18 ವರ್ಷ ಮೇಲ್ಪಟ್ಟವರಿಗೆ ಎಷ್ಟು ಮಂದಿಗೆ ಯಾವತ್ತಿನಿಂದ ಲಸಿಕೆ ಹಾಕುವ ಅಭಿಯಾನ ಶುರು ಮಾಡುವಿರಿ? ಎಂಬುದನ್ನು ಸ್ಪಷ್ಟವಾಗಿ ದೇಶದ ಜನತೆಗೆ ಮಾಹಿತಿ ಕೊಡಿ. ಬಾಯಿ ಬಿಟ್ಟರೆ ಬಣ್ಣಗೇಡು ಎಂಬಂತೆ ವರ್ತಿಸುತ್ತಿರುವ ಕೇಂದ್ರ ಮತ್ತು ರಾಜ್ಯ ಸರಕಾರಗಳ ನಿರ್ಲಕ್ಷ್ಯತನ ದೇಶದ ಜನತೆ ಮೂರ್ಖರು ಎಂದು ಭಾವಿಸಿದಂತಿದೆ ಎಂದು ಅವರು ಹೇಳಿದ್ದಾರೆ.

ದೇಶದಾದ್ಯಂತ ಕೊರೋನ ಸೋಂಕಿತರು ಬೆಡ್, ಆಕ್ಸಿಜನ್, ಆಂಬ್ಯುಲೆನ್ಸ್, ಔಷಧಿಗಳಿಲ್ಲದೆ ಪರದಾಡುತ್ತಿದ್ದಾರೆ. ಸತ್ತವರ ಅಂತ್ಯಸಂಸ್ಕಾರಕ್ಕೂ ಪಾಳಿಯಲ್ಲಿ ನಿಲ್ಲಬೇಕಾದ ವ್ಯವಸ್ಥೆ ಸೃಷ್ಟಿಸಿದ ಕೇಂದ್ರ-ರಾಜ್ಯ ಸರಕಾರಗಳ ದಯನೀಯ ವೈಫಲ್ಯದ ಬಗ್ಗೆ ದೇಶದ ಜನತೆ ಹಿಡಿಶಾಪ ಹಾಕುತ್ತಿದ್ದಾರೆ ಎಂದು ಕುಮಾರಸ್ವಾಮಿ ತಿಳಿಸಿದ್ದಾರೆ.

ಅರಿವುಗೇಡಿಗಳಂತೆ ಪುಕ್ಕಟೆ ಪ್ರವಚನ ನೀಡುತ್ತಿರುವ ಪ್ರಧಾನಿ, ಮುಖ್ಯಮಂತ್ರಿ ಮತ್ತು ಸಚಿವರು ಕನಿಷ್ಠ ಸಾಮಾನ್ಯ ರೀತಿ ಪ್ರತಿಕ್ರಿಯಿಸುವುದನ್ನು, ಇಂತಹ ದುರಿತ ಕಾಲದಲ್ಲಿ ತೆಗೆದುಕೊಳ್ಳಬೇಕಾದ ಎಚ್ಚರಿಕೆಯನ್ನು ಜವಾಬ್ದಾರಿಯಿಂದ ನಿಭಾಯಿಸುವುದು ಒಳಿತು. ಲಸಿಕೆ ನೀಡುವ ವಿಷಯದಲ್ಲಿ ಜನತೆ ಸಿನಿಕರಾಗದಂತೆ ಎಚ್ಚರ ವಹಿಸುವುದು ಸರಕಾರಗಳ ಜವಾಬ್ದಾರಿ. ಸಾರ್ವಜನಿಕರ ಆರೋಗ್ಯದ ವಿಷಯದಲ್ಲಿ ಸರಕಾರ ಉಡಾಫೆಯ ಧೋರಣೆ ತಳೆಯುವುದು ಸರಿಯಲ್ಲ ಎಂದು ಕುಮಾರಸ್ವಾಮಿ ಹೇಳಿದ್ದಾರೆ.

ಮಾತಿನಲ್ಲಿ ಬ್ರಹ್ಮ ನೀತಿಯಲ್ಲಿ ಕ್ರೋಧಿ, ಈ ಲೋಕದ ಭುಂಜಕರು, ನಾ ಹೆಚ್ಚು ತಾ ಹೆಚ್ಚು ಎಂದು ನಡೆದಾಡುವರಯ್ಯ, ನಾನು ನೀನೆಂಬ ಉಭಯವಳಿದು, ತಾನು ತಾನಾದುದ ನಾನಾರನೂ ಕಾಣೆನಯ್ಯ ಝೇಂಕಾರ ನಿಜಲಿಂಗಪ್ರಭುವೆ.- ಜಕ್ಕಣಯ್ಯ ಎಂದು ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News