ಉಡುಪಿ ಜಿಲ್ಲಾಸ್ಪತ್ರೆಯಲ್ಲಿ 20 ಹೆಚ್ಚುವರಿ ಆಕ್ಸಿಜನ್ ಬೆಡ್‌ಗಳ ವ್ಯವಸ್ಥೆ: ಸಚಿವ ಬಸವರಾಜ ಬೊಮ್ಮಾಯಿ

Update: 2021-05-02 13:27 GMT

 ಉಡುಪಿ, ಮೇ 2: ಈ ಬಾರಿ ಕಳೆದ ಬಾರಿಗಿಂತ ಕೋವಿಡ್ ಪರೀಕ್ಷೆಯಲ್ಲಿ ನೆಗೆಟಿವ್ ಬಂದರೂ ಉಸಿರಾಟದ ತೊಂದರೆ (ಸಾರಿ) ಇರುವ ಪ್ರಕರಣಗಳು ಹೆಚ್ಚಾಗಿ ಕಂಡುಬರುತ್ತಿವೆ. ಸದ್ಯಕ್ಕೆ ಜಿಲ್ಲೆಯಲ್ಲಿ ಬೆಡ್‌ಗಳ ಕೊರತೆ ಇಲ್ಲ. ಆದರೆ ಮುಂದಿನ ದಿನಗಳಲ್ಲಿ ಕೋವಿಡ್ ಮತ್ತು ಸಾರಿ ಪ್ರಕರಣಗಳು ಒಟ್ಟಿಗೆ ಹೆಚ್ಚಾದರೆ ಬೆಡ್‌ನ ಅವಶ್ಯಕತೆ ಇರುತ್ತದೆ. ಈ ನಿಟ್ಟಿನಲ್ಲಿ ಉಡುಪಿ ಜಿಲ್ಲಾಸ್ಪತ್ರೆಯಲ್ಲಿ ಹೆಚ್ಚುವರಿಯಾಗಿ ಸುಮಾರು 20 ಆಕ್ಸಿಜನ್ ಬೆಡ್‌ಗಳ ವ್ಯವಸ್ಥೆ ಮಾಡಲಾಗುವುದು ಎಂದು ರಾಜ್ಯ ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಉಡುಪಿ ಜಿಲ್ಲಾಸ್ಪತ್ರೆಗೆ ಇಂದು ಭೇಟಿ ನೀಡಿ ಕೋವಿಡ್ ಪ್ರಯೋಗಾಲಯದ ಕಾರ್ಯವೈಖರಿಯನ್ನು ಪರಿಶೀಲಿಸಿದ ಬಳಿಕ ಅವರು ಮಾಧ್ಯಮದವರೊಂದಿಗೆ ಮಾತನಾಡುತಿದ್ದರು.

ಇಲ್ಲಿ ಕೋವಿಡ್ ಮತ್ತು ಸಾರಿ ಪ್ರಕರಣಗಳಿಗೆ ಪ್ರತ್ಯೇಕ ಬೆಡ್ ಮೀಸಲಿರಿಸಲಾಗುವುದು. ಈ ಬಗ್ಗೆ ಜಿಲ್ಲಾಸ್ಪತ್ರೆಯ ವೈದ್ಯಾಧಿಕಾರಿಗಳು ಒಪ್ಪಿದ್ದು, ಜಿಲ್ಲಾಧಿಕಾರಿಗಳು ವ್ಯವಸ್ಥೆ ಮಾಡುವುದಾಗಿ ಹೇಳಿದ್ದಾರೆ ಎಂದರು.

ಜಿಲ್ಲೆಯಲ್ಲಿ ಪ್ರಸ್ತುತ ದಿನಕ್ಕೆ 600-650 ಕೊವಿಡ್ ಪ್ರಕರಣಗಳು ಕಂಡು ಬರುತ್ತಿದ್ದು, ಇದರಿಂದ ಮುಂದಿನ ದಿನಗಳಲ್ಲಿ ಜಿಲ್ಲಾಸ್ಪತ್ರೆಯಲ್ಲಿರುವ ಪ್ರಯೋ ಗಾಲಯದ ಅವಶ್ಯಕತೆ ಹೆಚ್ಚಿದೆ. ಪ್ರಸ್ತುತ ಪ್ರತಿದಿನ 2000 ಪರೀಕ್ಷೆಗಳನ್ನು ಮಾಡಲಾಗುತ್ತಿದೆ. ಇದನ್ನು ಹೆಚ್ಚಿಸುವ ಬಗ್ಗೆ ಈಗಾಗಲೇ ತೀರ್ಮಾನ ಮಾಡ ಲಾಗಿದೆ. ಈ ನಿಟ್ಟಿನಲ್ಲಿ ಸೌಲಭ್ಯಗಳನ್ನು ಒದಗಿಸಿ ಪ್ರತಿದಿನ 3000 ಪರೀಕ್ಷೆ ಮಾಡಲು ಎಲ್ಲ ರೀತಿಯ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಎಂದು ಅವರು ಹೇಳಿದರು.

ಅದೇ ರೀತಿ ಹೊರಗಡೆಯಿಂದ ಬಂದವರನ್ನು ಮತ್ತು ಹೋಮ್ ಐಸೋಲೇಷನ್‌ಗೆ ಯಾವ ರೀತಿ ಟ್ರಾಕ್ ಮಾಡಬೇಕು ಎಂಬುದನ್ನು ತಿಳಿಸಲಾಗಿದೆ. ಹೀಗೆ ಜಿಲ್ಲೆಯಲ್ಲಿ ಪರೀಕ್ಷೆ, ಚಿಕಿತ್ಸೆ ಮತ್ತು ಟ್ಯಾಕಿಂಗ್ ವ್ಯವಸ್ಥೆಯನ್ನು ಸರಿಯಾಗಿ ಮಾಡಲು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಅವರು ತಿಳಿಸಿದರು.

ಜನರ ಬೇಡಿಕೆ ಮತ್ತು ಒತ್ತಾಯದ ಮೇರೆಗೆ ದಿನಸಿ, ತರಕಾರಿ ಮಾರಾಟದ ಸಮಯವನ್ನು ವಿಸ್ತರಿಸಲಾಗಿದೆ. ಕೆಲವು ಸಮಯ ಕಡಿಮೆ ಅವಧಿ ನೀಡಿ ಪರಿಶೀಲನೆ ಮಾಡಿದಾಗ ಜನಸಂದಣಿ ಹೆಚ್ಚಾಗಿರುವುದು ಕಂಡು ಬಂದಿದೆ. ಆ ಜನಸಂದಣಿಯನ್ನು ತಪ್ಪಿಸಲು ಇದೀಗ ಸಮಯವನ್ನು ವಿಸ್ತರಣೆ ಮಾಡಲಾಗಿದೆ. ಇದರಿಂದ ಜನ ಸೇರುವುದು ಕಡಿಮೆ ಆಗುತ್ತದೆ ಎಂಬುದು ನಮ್ಮ ಆಶಯ ಎಂದು ಅವರು ಹೇಳಿದರು.

ಎಲ್ಲ ಕಡೆಗಳಲ್ಲಿ ವಿಶೇಷವಾಗಿ ಸಂತೆ ನಡೆಸುವ ಬಗ್ಗೆ ಸಮಸ್ಯೆಗಳು ಕೇಳಿಬರುತ್ತಿವೆ. ಈ ಬಗ್ಗೆ ಕ್ರಮ ತೆಗೆದುಕೊಳ್ಳಲು ಜಿಲ್ಲಾಧಿಕಾರಿಗೆ ಸೂಚನೆ ನೀಡಲಾಗುವುದು ಎಂದ ಅವರು, ವೆಂಟಿಲೇಟರ್ ಆಪರೇಟರ್‌ಗಳನ್ನು ನೇಮಕ ಮಾಡುವ ಬಗ್ಗೆ ಚಿಂತನೆಗಳು ನಡೆಯುತ್ತಿವೆ. ರೆಮಿಡಿಸಿವರ್ ಕಾಳಸಂತೆಯಲ್ಲಿ ಮಾರಾಟ ಮಾಡುವ ಬಗ್ಗೆ ಹೆಚ್ಚಿನ ನಿಗಾ ವಹಿಸಿ ಕ್ರಮ ತೆಗೆದುಕೊಳ್ಳಲಾಗುವುದು ಎಂದರು.

ಈ ಸಂದರ್ಭದಲ್ಲಿ ಶಾಸಕರಾದ ರಘುಪತಿ ಭಟ್, ಸುನೀಲ್ ಕುಮಾರ್, ಲಾಲಾಜಿ ಆರ್.ಮೆಂಡನ್, ಜಿಲ್ಲಾಧಿಕಾರಿ ಜಿ.ಜಗದೀಶ್, ಜಿಪಂ ಸಿಇಓ ಡಾ.ನವೀನ್ ಭಟ್, ಎಸ್ಪಿ ವಿಷ್ಣುವರ್ಧನ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸುಧೀರ್‌ಚಂದ್ರ ಸೂಡಾ, ಜಿಲ್ಲಾ ಸರ್ಜನ್ ಡಾ.ಮಧು ಸೂದನ್ ನಾಯಕ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ ಮೊದಲಾದವರು ಉಪಸ್ಥಿತರಿದ್ದರು.

ಲಸಿಕೆ ಪೂರೈಕೆಗೆ ಕ್ರಮ: ಸಚಿವರ ಭರವಸೆ

ಆಸ್ಪತ್ರೆಯ ಭೇಟಿಯ ಬಳಿಕ ಅಲ್ಲೇ ಸಮೀಪದ ಕೊರೋನ ಲಸಿಕಾ ಕೇಂದ್ರಕ್ಕೆ ತೆರಳಿದ ಸಚಿವ ಬಸವರಾಜ ಬೊಮ್ಮಾಯಿ, ಈ ಕುರಿತು ಪರಿಶೀಲನೆ ನಡೆಸಿದರು.

ಇದೇ ವೇಳೆ ಸಚಿವರು, ಲಸಿಕೆ ಪಡೆಯಲು ನಿಂತಿದ್ದ ನಾಗರಿಕರನ್ನು ವಿಚಾರಿಸಿ, ಅಗತ್ಯ ಲಸಿಕೆ ಪೂರೈಕೆಗೆ ಸಂಬಂಧಪಟ್ಟ ಸಚಿವರಲ್ಲಿ ಮಾತನಾಡಿ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಭರವಸೆ ನೀಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News