ಚಾಮರಾಜನಗರಕ್ಕೆ ಸಿದ್ದರಾಮಯ್ಯ, ಡಿಕೆಶಿ ಭೇಟಿ: ಡಿಸಿ, ಉಸ್ತುವಾರಿ ಸಚಿವರ ವಿರುದ್ಧ ಘೋಷಣೆ ಕೂಗಿದ ಸ್ಥಳೀಯರು

Update: 2021-05-04 15:24 GMT

ಚಾಮರಾಜನಗರ, ಮೇ 4: ಕೋವಿಡ್ ಆಸ್ಪತ್ರೆಯಲ್ಲಿ ಆಮ್ಲಜನಕ ಸಿಗದೇ 24 ಸೋಂಕಿತರು ಮೃತಪಟ್ಟ ಹಿನ್ನೆಲೆಯಲ್ಲಿ ಚಾಮರಾಜನಗರ ಕೋವಿಡ್ ಆಸ್ಪತ್ರೆಗೆ ಮಂಗಳವಾರ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಭೇಟಿ ನೀಡಿದರು. ಈ ಸಂದರ್ಭದಲ್ಲಿ ಸ್ಥಳದಲ್ಲಿದ್ದ ಸ್ಥಳೀಯರು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರ ವಿರುದ್ಧ ಘೋಷಣೆ ಕೂಗಿ ಆಕ್ರೋಶ ಹೊರ ಹಾಕಿದರು.

ಕೋವಿಡ್ ಆಸ್ಪತ್ರೆಯಲ್ಲಿ ವೈದ್ಯಾಧಿಕಾರಿಗಳು ಮತ್ತು ಜಿಲ್ಲಾಧಿಕಾರಿಗಳ ಸಭೆ ಮುಗಿಯುವರೆಗೂ ಪ್ರತಿಭಟನೆ ನಡೆಸಿದ ಹತ್ತಕ್ಕೂ ಹೆಚ್ಚು ಮಂದಿ, ಸಿದ್ದರಾಮಯ್ಯ ಬಳಿಗೆ ತೆರಳಿ 'ಸಂತ್ರಸ್ತ ಕುಟುಂಬಗಳಿಗೆ ನ್ಯಾಯ ಕೊಡಿಸಬೇಕು. ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ, ಜಿಲ್ಲಾ ಉಸ್ತುವಾರಿ ಸಚಿವ ಎಸ್.ಸುರೇಶ್‌ಕುಮಾರ್ ಅವರನ್ನು ವಜಾಗೊಳಿಸಬೇಕು' ಎಂದು ಆಗ್ರಹಿಸಿದರು.

ಸ್ಥಳೀಯರು ಆರೋಗ್ಯ ಇಲಾಖೆ ಹಾಗೂ ಜಿಲ್ಲಾಸ್ಪತ್ರೆಯ ವೈದ್ಯಾಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು. ಘಟನೆಯ ಹೊಣೆ ಹೊತ್ತು ಆರೋಗ್ಯ ಸಚಿವ ಸುಧಾಕರ್ ಅವರು ರಾಜೀನಾಮೆ ಕೊಡಬೇಕು ಎಂದು ಒತ್ತಾಯಿಸಿದರು.

ಜಿಲ್ಲಾ ಕೋವಿಡ್ ಆಸ್ಪತ್ರೆಯ ನೋಡಲ್ ಅಧಿಕಾರಿ ಡಾ. ಮಹೇಶ್, ಜಿಲ್ಲಾ ಆರೋಗ್ಯಾಧಿಕಾರಿ ಡಾ.ಎಂ.ಸಿ.ರವಿ, ಡಾ. ಕೃಷ್ಣಪ್ರಸಾದ್ ಅವರನ್ನು ಮೊದಲು ಇಲ್ಲಿಂದ ವರ್ಗಾವಣೆ ಮಾಡಬೇಕು ಎಂದು ಸ್ಥಳೀಯ ಮುಖಂಡರೊಬ್ಬರು ಆಗ್ರಹಿಸಿದರು.

ದಸಂಸ ಜಿಲ್ಲಾ ಸಂಚಾಲಕ ನಾಗರಾಜು, ಛಲವಾದಿ ನಾರಾಯಣಸ್ವಾಮಿ, ನಿಜದನಿ ಗೋವಿಂದರಾಜು ಸೇರಿದಂತೆ ಹಲವು ಹೋರಾಟಗಾರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು

ಈ ವೇಳೆ ಪೊಲೀಸರು ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ರವರುಗಳಿಗೆ ಬಿಗಿ ಬಂದೋಬಸ್ತ್ ಏರ್ಪಡಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News