ಚಾಮರಾಜನಗರ ದುರಂತ: ವಿಚಾರಣೆಗೆ ನ್ಯಾ.ವೇಣುಗೋಪಾಲಗೌಡ ನೇತೃತ್ವದ ಸಮಿತಿ ರಚಿಸಿದ ಹೈಕೋರ್ಟ್

Update: 2021-05-05 15:35 GMT

ಬೆಂಗಳೂರು, ಮೇ 5: ಚಾಮರಾಜನಗರದ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ವೇಳೆ ಆಕ್ಸಿಜನ್ ಕೊರತೆಯಿಂದಾಗಿ 24 ರೋಗಿಗಳು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗಾಗಿ ಹೈಕೋರ್ಟ್, ರಾಜ್ಯ ಕಾನೂನು ಸೇವಾ ಪ್ರಾಧಿಕಾರದ ಮುಖ್ಯಸ್ಥ ನಿವೃತ್ತ ನ್ಯಾಯಮೂರ್ತಿ ಎ.ಎನ್.ವೇಣುಗೋಪಾಲಗೌಡ ನೇತೃತ್ವದಲ್ಲಿ ಸಮಿತಿ ರಚಿಸಿ ಬುಧವಾರ ಆದೇಶಿಸಿದೆ.

ಕೋವಿಡ್ ಸೋಂಕು ನಿರ್ವಹಣೆ ಮತ್ತು ಚಿಕಿತ್ಸೆಗೆ ಸಂಬಂಧಿಸಿದಂತೆ ಸಲ್ಲಿಕೆಯಾಗಿರುವ ಹಲವು ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕಾ ಹಾಗೂ ನ್ಯಾಯಮೂರ್ತಿ ಅರವಿಂದ ಕುಮಾರ್ ಅವರಿದ್ದ ವಿಭಾಗೀಯ ಪೀಠ ಈ ಆದೇಶ ಮಾಡಿದೆ.

ವೇಣುಗೋಪಾಲಗೌಡ ನೇತೃತ್ವದ ಸಮಿತಿಯು ಸೀಝ್ ಆಗಿರುವ ದಾಖಲೆಗಳನ್ನು ಪರಿಶೀಲಿಸಿ, ಸತ್ಯಶೋಧನೆ ನಡೆಸಿ ಮೇ 10ರೊಳಗೆ ಹೈಕೋರ್ಟ್ ಗೆ ವರದಿ ಸಲ್ಲಿಸಬೇಕು. ಈ ಸಮಿತಿಯ ವಿಚಾರಣೆಗೆ ರಾಜ್ಯ ಸರಕಾರ ಅಗತ್ಯವಿರುವ ಎಲ್ಲ ಸಹಕಾರ ನೀಡಬೇಕು ಎಂದು ಹೈಕೋರ್ಟ್ ವಿಭಾಗೀಯ ಪೀಠ ಸೂಚನೆ ನೀಡಿದೆ.

ರಾಜ್ಯದಲ್ಲಿ ಮುಂದೆ ಇಂತಹ ಘಟನೆಗಳು ಮರುಕಳಿಸಬಾರದು. ಈ ನಿಟ್ಟಿನಲ್ಲಿ ಸಮಿತಿಯು ಸತ್ಯಶೋಧನೆ ನಡೆಸಬೇಕು ಎಂದು ಹೈಕೋರ್ಟ್ ತಿಳಿಸಿತು. ಈ ನಡುವೆ ರಾಜ್ಯ ಸರಕಾರ ಪ್ರಕರಣದ ತನಿಖೆಗಾಗಿ ನಿವೃತ್ತ ನ್ಯಾಯಮೂರ್ತಿ ಬಿ.ಎ.ಪಾಟೀಲ್ ಅವರ ಏಕ ಸದಸ್ಯ ಆಯೋಗ ನೇಮಕ ಮಾಡಿರುವುದಾಗಿ ಹೈಕೋರ್ಟ್‍ಗೆ ಮಾಹಿತಿ ನೀಡಿತು. ಅಲ್ಲದೆ, ಸಮಿತಿಯು ಒಂದು ತಿಂಗಳಲ್ಲಿ ವಿಚಾರಣೆ ನಡೆಸಿ ವರದಿ ಸಲ್ಲಿಸಲಿದೆ ಎಂದು ಹೇಳಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News