ಕೋವಿಡ್ ಸೋಂಕಿತರಿಗೆ ಉತ್ತಮ ಚಿಕಿತ್ಸೆ ನೀಡಲು ಸಚಿವ ಕೋಟ ಸೂಚನೆ

Update: 2021-05-05 16:59 GMT

ಮಂಗಳೂರು, ಮೇ 5 : ಕೋವಿಡ್ ಸೋಂಕು ಧೃಡಪಟ್ಟಿರುವ ರೋಗಿಗಳಲ್ಲಿ ಶೇ.85.70ಕ್ಕೂ ಅಧಿಕ ರೋಗಿಗಳು ಹೋಮ್ ಐಸೋಲೇಶನ್ ಚಿಕಿತ್ಸೆ ಪಡೆಯುತ್ತಿದ್ದು. ಅವರ ಆರೋಗ್ಯ ಕ್ಷೇಮಗಳನ್ನು ವಿಚಾರಿಸಲು ವೈದ್ಯಕೀಯ ತಂಡಗಳನ್ನು ರಚಿಸಿ ಸೂಕ್ತ ಚಿಕಿತ್ಸೆ ಕೊಡಲು ಮುಂದಾಗ ಬೇಕು ಎಂದು ದ.ಕ.ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಕೋವಿಡ್ ಪ್ರಕರಣ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವ ಕುರಿತು ದ.ಕ. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ ವೈದ್ಯಕೀಯ ತಜ್ಞರ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು.

ಜಿಲ್ಲೆಯ 8,414 ಕೋವಿಡ್ ಸಕ್ರಿಯ ಪ್ರಕರಣಗಳ ಪೈಕಿ 1,204 ರೋಗಿಗಳು ಆಸ್ಪತ್ರೆಯಲ್ಲಿ ಮತ್ತು 7,210 ರೋಗಿಗಳು ಮನೆಯಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದಾರೆ. ಹೋಮ್ ಐಸೋಲೇಶನ್ ಒಳಗಾದವರಿಗೆ ಸೂಕ್ತ ಚಿಕಿತ್ಸೆ ನೀಡಲು ವೈದ್ಯರನ್ನು ಒಳಗೊಂಡ 78ಕ್ಕೂ ಹೆಚ್ಚು ತಂಡಗಳನ್ನು ರಚಿಸಲಾಗಿದೆ. ಅವರು ಮನೆ ಮನೆಗೆ ಭೇಟಿ ನೀಡಿ ಸೂಕ್ತ ಚಿಕಿತ್ಸೆ ನೀಡಲಿದ್ದಾರೆ. ಈ ತಂಡದ ಮೇಲ್ವಿಚಾರಣೆಗೆ ಅಧಿಕಾರಿಗಳನ್ನು ನೇಮಕ ಮಾಡಬೇಕು ಎಂದು ಜಿಲ್ಲಾಧಿಕಾರಿಗೆ ಸೂಚನೆ ನೀಡಿದರು.

ಮನೆಯಲ್ಲೇ ಚಿಕಿತ್ಸೆ ಪಡೆಯುತ್ತಿರುವ ಕೋವಿಡ್ ರೋಗಿಗಳಲ್ಲಿ 45 ವರ್ಷ ಮೇಲ್ಪಟ್ಟ ಹಾಗೂ 45 ವರ್ಷದೊಳಗಿನ ರೋಗಿಗಳ ಮಾಹಿತಿ ಕಲೆ ಹಾಕಬೇಕು. ಅವರಲ್ಲಿ ರಕ್ತದೊತ್ತಡ, ಮಧುಮೇಹ ಮತ್ತಿತರ ಕಾಯಿಲೆ ಹೊಂದಿರುವವರನ್ನು ಗುರುತಿಸಿ ಅವರ ರಕ್ತ ಮತ್ತಿತರ ಪರೀಕ್ಷೆಗಳನ್ನು ಮಾಡುವ ಮೂಲಕ ವಿಶೇಷ ಗಮನ ಹರಿಸಬೇಕು ಎಂದರು.

ಖಾಸಗಿ ನರ್ಸಿಂಗ್ ಹೋಮ್‌ಗಳಲ್ಲಿ ಕೋವಿಡ್ ಚಿಕಿತ್ಸೆ ಪಡೆಯುತ್ತಿರುವವರಿಂದ ಸರಕಾರ ನಿಗದಿಪಡಿಸಿರುವ ದರವನ್ನು ಮಾತ್ರ ತೆಗೆದು ಕೊಳ್ಳಬೇಕು. ಅಧಿಕ ದರ ವಸೂಲಿ ಮಾಡಿದರೆ ಜಿಲ್ಲಾ ಆರೋಗ್ಯ ಅಧಿಕಾರಿಗಳ ಕಚೇರಿಗೆ ದೂರು ನೀಡಬಹುದು. ಅಲ್ಲದೆ ಹೆಚ್ಚುವರಿಯಾಗಿ ವಸೂಲಿ ಮಾಡಿದ ಶುಲ್ಕವನ್ನು ಮರು ಪಾವತಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು.

ರೆಡಿಸಿವಿಯರ್ ಔಷದಿ ಕೋವಿಡ್ ಸೋಂಕಿತರೆಲ್ಲರಿಗೂ ಅವಶ್ಯಕತೆ ಇಲ್ಲ. ಪ್ರಾರಂಭದ ಹಂತದಲ್ಲಿ ಉಸಿರಾಟದ ತೊಂದರೆ ಇರುವಂತಹವರಿಗೆ ನೀಡಲಾಗುವುದು ಎಂದು ದೇಶದ ವೈದ್ಯಕೀಯ ಸಂಸ್ಥೆಗಳು ತಿಳಿಸಿವೆ. ಹಾಗಾಗಿ ಅಗತ್ಯವಿರುವ ರೋಗಿಗಳಿಗೆ ಮಾತ್ರ ಈ ಔಷಧಿಯನ್ನು ನೀಡಲಾಗುತ್ತದೆ ಎಂದರು.

ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಮಾತನಾಡಿ ಜಿಲ್ಲೆಯಲ್ಲಿ ಕೆಲವು ಧಾರ್ಮಿಕ ಸಂಸ್ಥೆಗಳ ಸಹಿತ ಖಾಸಗಿ ಸಂಸ್ಥೆಗಳು ಕೋವಿಡ್ ಕೇರ್ ಸೆಂಟರ್‌ಗಳನ್ನು ತೆರೆಯಲು ಮುಂದೆ ಬರುತ್ತಿವೆ. ಕೋವಿಡ್ ಕೇರ್ ಸೆಂಟರ್‌ಗಳನ್ನು ತೆರೆಯುವ ಮುನ್ನ ರೋಗಿಗಳಿಗೆ ಅಗತ್ಯವಿರುವ ಮೂಲಭೂತ ಸೌಕರ್ಯಗಳ ಬಗ್ಗೆ ಜಿಲ್ಲಾ ಆರೋಗ್ಯ ಅಧಿಕಾರಿಗಳು ಪರಿಶೀಲನೆ ನಡೆಸಿ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.

ಸಭೆಯಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್, ಶಾಸಕ ಭರತ್ ವೈ.ಶೆಟ್ಟಿ, ಜಿಪಂ ಸಿಇಒ ಡಾ.ಕುಮಾರ್, ಅಪರ ಜಿಲ್ಲಾಧಿಕಾರಿ ದಿನೇಶ್, ಉಪವಿಭಾಗಾಧಿಕಾರಿ ಮದನ್ ಮೋಹನ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಕಿಶೋರ್ ಕುಮಾರ್, ಜಿಲ್ಲಾ ಶಸ್ತ್ರ ಚಿಕಿತ್ಸಕರು ಮತ್ತು ಅಧೀಕ್ಷಕ ಡಾ. ಸದಾಶಿವ ಶ್ಯಾನುಬೋಗ್, ಲೇಡಿಗೋಷನ್ ಆಸ್ಪತ್ರೆಯ ಮೆಡಿಕಲ್ ಅಧೀಕ್ಷಕ ಡಾ. ದುರ್ಗಾ ಪ್ರಸಾದ್ ಎಂ.ಆರ್, ಡಾ. ಚಕ್ರಪಾಣಿ, ಡಾ. ಅಭಯ ನಿರ್ಗುಡೆ, ಡಾ. ಶ್ರೀಪಾದ ಜಿ. ಮಚಂದಳಿ ಮತ್ತಿತರ ವೈದ್ಯಾಧಿಕಾರಿಗಳು ಉಪಸ್ಥಿತರಿದ್ದರು.
 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News