×
Ad

ದ.ಕ. ಜಿಲ್ಲೆಯಲ್ಲಿ ಶುಕ್ರವಾರ ರಾತ್ರಿಯಿಂದಲೇ ವಾರಾಂತ್ಯ ಕರ್ಫ್ಯೂ : ಜಿಲ್ಲಾಧಿಕಾರಿ ಡಾ. ರಾಜೇಂದ್ರ

Update: 2021-05-06 21:01 IST

ಮಂಗಳೂರು, ಮೇ 6: ದ.ಕ.ಜಿಲ್ಲಾದ್ಯಂತ ಶುಕ್ರವಾರ ರಾತ್ರಿ 9 ಗಂಟೆಯಿಂದ ಸೋಮವಾರ ಬೆಳಗ್ಗೆ 6 ಗಂಟೆಯವರೆಗೆ ವಾರಾಂತ್ಯ ಕರ್ಫ್ಯೂ ಜಾರಿಯಲ್ಲಿರುತ್ತದೆ ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಅವರು ತಿಳಿಸಿದ್ದಾರೆ.

ಔಷಧಿ ಅಂಗಡಿಗಳು ಮತ್ತು ಆಸ್ಪತ್ರೆಗಳನ್ನು ಹೊರತುಪಡಿಸಿ ಶುಕ್ರವಾರ ರಾತ್ರಿ 9ರಿಂದ ಸೋಮವಾರ ಬೆಳಗ್ಗೆ 6ರವರೆಗೆ ಎಲ್ಲಾ ರೀತಿಯ ಚಟುವಟಿಕೆಗಳನ್ನು ಕಟ್ಟುನಿಟ್ಟಾಗಿ ನಿರ್ಬಂಧಿಸಿದೆ. ಸಾರ್ವಜನಿಕರು ಈ ಸೇವೆಗಳನ್ನು ತಮ್ಮ ಹತ್ತಿರದ ಅಂಗಡಿಗಳಿಂದ ಮಾತ್ರವೇ ಪಡೆಯತಕ್ಕದ್ದು.

ತುರ್ತು ಮತ್ತು ಅಗತ್ಯ ಸೇವೆಗಳೊಂದಿಗೆ ವ್ಯವಹರಿಸುವ ಮತ್ತು 24x7 ಕಾರ್ಯಾಚರಣೆಗಳ ಅಗತ್ಯವಿರುವ ಕೈಗಾರಿಕೆಗಳು/ಕಂಪನಿಗಳು/ಸಂಸ್ಥೆಗಳಿಗೆ ಮಾತ್ರ ಕಾರ್ಯನಿರ್ವಹಿಸಲು ಅನುಮತಿ ನೀಡಲಾಗಿದೆ.

ಈ ಸಂದರ್ಭ ಯಾವುದೇ ನಿರ್ಮಾಣ ಚಟುವಟಿಕೆಗಳಿಗೆ ಅವಕಾಶವಿಲ್ಲ. ನಿರ್ಮಾಣ ಚಟುವಟಿಕೆಗಳು ನಡೆಯುವ ಸ್ಥಳದಲ್ಲೇ ಕಾರ್ಮಿಕರು ಲಭ್ಯವಿದ್ದಲ್ಲಿ ಕಾಮಗಾರಿ ನಡೆಸಬಹುದಾಗಿದೆ. ಆದರೆ ಹೊರಗಿನ ಪ್ರದೇಶಗಳಿಂದ ಕಾರ್ಮಿಕರನ್ನು ಕರೆತರಲು ಅವಕಾಶವಿಲ್ಲ. 

ರೋಗಿಗಳು ಮತ್ತು ಅವರ ಪರಿಚಾರಕರು/ವೈದ್ಯಕೀಯ ತುರ್ತು ಸಂದರ್ಭ ಜನರಿಗೆ ಕನಿಷ್ಠ ಪುರಾವೆಗಳೊಂದಿಗೆ ಸಂಚರಿಸಲು ಅನುಮತಿಸಲಾಗಿದೆ.

ಮೇ 8 ಮತ್ತು 9ರಂದು ನಿಗದಿಯಾಗಿರುವ ಮದುವೆ ಕಾರ್ಯಕ್ರಮಗಳನ್ನು ಸರಕಾರದ ಮಾರ್ಗಸೂಚಿಯಂತೆ ಜನರ ಪರಿಮಿತಿಗೊಳಪಟ್ಟು ಕೋವಿಡ್-19 ನಿಯಮ ಪಾಲಿಸಿ ನಡೆಸಲು ಅನುಮತಿ ನೀಡಲಾಗಿದೆ.

ಶವಸಂಸ್ಕಾರ /ಅಂತ್ಯಕ್ರಿಯೆಗಳನ್ನು ಗರಿಷ್ಠ 5 ಜನರ ಪರಿಮಿತಿಗೊಳಪಟ್ಟು ಕೋವಿಡ್-19 ನಿಯಮ ಪಾಲಿಸಿ ನಡೆಸಬಹುದಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News