ದ.ಕ.ಜಿಲ್ಲೆಯಲ್ಲಿ ಆಕ್ಸಿಜನ್, ವೆಂಟಿಲೇಟರ್ ಕೊರತೆ ಇಲ್ಲ: ಸಂಸದ ನಳಿನ್ ಕುಮಾರ್

Update: 2021-05-07 15:58 GMT

ಮಂಗಳೂರು, ಮೇ 7: ದ.ಕ.ಜಿಲ್ಲೆಯ ಕೊರೋನ ಸೋಂಕಿತರಿಗೆ ಯಾವುದೇ ಸಮಸ್ಯೆಗಳು ಎದುರಾಗದಂತೆ ಮುನ್ನೆಚ್ಚರಿಕೆ ಕ್ರಮ ವಹಿಸಲಾಗುತ್ತಿದ್ದು, ಸದ್ಯ ಜಿಲ್ಲೆಯಲ್ಲಿ ಯಾವುದೇ ರೀತಿಯ ಆಕ್ಸಿಜನ್, ಬೆಡ್, ವೆಂಟಿಲೇಟರ್‌ಗಳ ಕೊರತೆ ಇಲ್ಲ ಎಂದು ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.

ನಗರದ ವೆನ್ಲಾಕ್ ಆಸ್ಪತ್ರೆ ಬಳಿ ನೂತನವಾಗಿ ಆರಂಭವಾಗುವ ಆಕ್ಸಿಜನ್ ಪ್ಲಾಂಟ್‌ನ ಕಾಮಗಾರಿ ವೀಕ್ಷಿಸಿದ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

ಒಂದು ವರ್ಷದಲ್ಲಿ ವೆನ್ಲಾಕ್ ಆಸ್ಪತ್ರೆ ಹಾಗೂ ತಾಲೂಕಿನ ಆಸ್ಪತ್ರೆಗಳನ್ನು ಉನ್ನತೀಕರಿಸುವ ಕಾರ್ಯವನ್ನು ರಾಜ್ಯ ಮತ್ತು ಕೇಂದ್ರ ಸರಕಾರ ಮಾಡುತ್ತಿದೆ. ಜಿಲ್ಲೆಯಲ್ಲಿ ಕೋವಿಡ್ ಸೋಂಕು ಪ್ರಕರಣ ಹೆಚ್ಚುತ್ತಿದ್ದು, ಜನತೆ ಜಾಗೃತರಾಗಬೇಕಾಗಿದೆ. ಆದ್ದರಿಂದ ಕಟ್ಟುನಿಟ್ಟಿನ ಲಾಕ್‌ಡೌನ್‌ನ ಅನಿವಾರ್ಯತೆ ಇದೆ ಎಂದರು.

ಬೆಂಗಳೂರಿನಲ್ಲಿ ನಡೆದಿರುವ ಬೆಡ್ ಬ್ಲಾಕಿಂಗ್ ಪ್ರಕರಣವನ್ನು ರಾಜಕೀಯ ಮತ್ತು ಮತೀಯವಾಗಿ ಮಾಡುತ್ತಿರುವುದು ಸರಿಯಲ್ಲ. ಯಾರೇ ಮಾಡಿದರೂ ಅದು ತಪ್ಪೇ. ಅದರಲ್ಲಿ ಜಾತಿ, ಮತ, ಪಂಥ ಬೇಡ. ಜನರ ಜೀವದ ಜೊತೆಗೆ ಚೆಲ್ಲಾಟವಾಡುವುದು ಸರಿಯಲ್ಲ ಎಂದರು.

ಈ ಸಂದರ್ಭ ಶಾಸಕರಾದ ವೇದವ್ಯಾಸ ಕಾಮತ್, ಡಾ.ವೈ.ಭರತ್ ಶೆಟ್ಟಿ, ಮೇಯರ್ ಪ್ರೇಮಾನಂದ ಶೆಟ್ಟಿ, ರಾಜ್ಯ ಮೀನುಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ನಿತಿನ್ ಕುಮಾರ್, ವೆನ್ಲಾಕ್ ಡಿಎಂಒ ಡಾ.ಸದಾಶಿವ ಶ್ಯಾನುಭೋಗ್, ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ ಎಂ., ಬಿಜೆಪಿ ದಕ್ಷಿಣ ಮಂಡಲ ಅಧ್ಯಕ್ಷ ವಿಜಯ ಕುಮಾರ್ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News