ಕೇಂದ್ರದಿಂದ ಹೆಚ್ಚುವರಿ ಆಕ್ಸಿಜನ್; ಶೀಘ್ರ ಸಮಸ್ಯೆಗೆ ಪರಿಹಾರ: ಸಚಿವ ಜಗದೀಶ್ ಶೆಟ್ಟರ್

Update: 2021-05-09 12:49 GMT
ಜಗದೀಶ್ ಶೆಟ್ಟರ್

ಬೆಳಗಾವಿ, ಮೇ 9: ರಾಜ್ಯಕ್ಕೆ ಅಗತ್ಯವಿರುವ ಆಕ್ಸಿಜನ್ ಪ್ರಮಾಣವನ್ನು ಆಧರಿಸಿ ಹೆಚ್ಚುವರಿ ಆಕ್ಸಿಜನ್ ಹಂಚಿಕೆಗೆ ಕೇಂದ್ರ ಸರಕಾರ ಒಪ್ಪಿಗೆ ಸೂಚಿಸಿರುವುದರಿಂದ ಮೂರು-ನಾಲ್ಕು ದಿನಗಳಲ್ಲಿ ರಾಜ್ಯದಲ್ಲಿ ಆಕ್ಸಿಜನ್ ಸಮಸ್ಯೆ ಪರಿಹಾರವಾಗಲಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಹಾಗೂ ರಾಜ್ಯದ ಆಕ್ಸಿಜನ್ ಪೂರೈಕೆ ಉಸ್ತುವಾರಿ ಜಗದೀಶ್ ಶೆಟ್ಟರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ರವಿವಾರ ಜಿಲ್ಲೆಯಲ್ಲಿ ಆಕ್ಸಿಜನ್ ಲಭ್ಯತೆಗೆ ಸಂಬಂಧಿಸಿದಂತೆ ನಗರದ ಪ್ರವಾಸಿಮಂದಿರದಲ್ಲಿ ನಡೆದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಕೊಲ್ಲಾಪುರದಿಂದ ಬೆಳಗಾವಿ ಜಿಲ್ಲೆಗೆ ಪೂರೈಕೆಯಾಗುತ್ತಿದ್ದ 20 ಕೆ.ಎಲ್. ಆಕ್ಸಿಜನ್ ಪೂರೈಕೆ ನಿಬರ್ಂಧ ವಿಧಿಸಿದ್ದರೆ ಆಕ್ಸಿಜನ್ ಮರುಹಂಚಿಕೆಗೆ ಸಂಬಂಧಿಸಿದಂತೆ ಮಹಾರಾಷ್ಟ್ರದ ಜತೆ ಚರ್ಚೆ ನಡೆಸಲಾಗುವುದು. ಬಳ್ಳಾರಿಯಿಂದ ಮಹಾರಾಷ್ಟ್ರಕ್ಕೆ ಹಂಚಿಕೆಯಾಗಿದ್ದ ಆಕ್ಸಿಜನ್ ಪ್ರಮಾಣವನ್ನು ಕರ್ನಾಟಕ ರಾಜ್ಯಕ್ಕೆ ಮರುಹಂಚಿಕೆಯಾಗಿರುವುದರಿಂದ ಈ ಕುರಿತು ಅಲ್ಲಿನ ಸರಕಾರದ ಜತೆ ಚರ್ಚಿಸಲಾಗುವುದು ಎಂದು ಹೇಳಿದರು.

ಕೇಂದ್ರ ಸರಕಾರವು ಟ್ಯಾಂಕರ್ ನೀಡಲಿದ್ದು, ಅದರಲ್ಲಿ ಬೆಳಗಾವಿ ಜಿಲ್ಲೆಗೆ ಒಂದು ಟ್ಯಾಂಕರ್ ಮೀಸಲಿಡಲಾಗುವುದು. ಹೋಮ್ ಐಸೋಲೇಷನ್ ಇರುವವರಿಗೆ ಸರಿಯಾಗಿ ಔಷಧಿ ಕಿಟ್ ನೀಡುವುದರ ಜತೆಗೆ ಯಾವ ರೀತಿ ಮನೆಯಲ್ಲಿ ಆರೈಕೆ ಮಾಡಿಕೊಳ್ಳಬೇಕು ಎಂಬುದರ ಬಗ್ಗೆ ಆರೋಗ್ಯ ಇಲಾಖೆಯ ತಂಡಗಳು ತಿಳಿವಳಿಕೆಯನ್ನು ನೀಡಬೇಕು. ಸರಕಾರಿ ಆಸ್ಪತ್ರೆಗಳಲ್ಲಿ ಲಭ್ಯವಿರುವ ವೆಂಟಿಲೇಟರ್‍ಗಳನ್ನು ಸಮರ್ಪಕವಾಗಿ ಬಳಕೆ ಮಾಡಿಕೊಳ್ಳಬೇಕು. ಒಂದು ವೇಳೆ ತಾಲೂಕು ಕೇಂದ್ರಗಳಲ್ಲಿ ಬಳಕೆ ಮಾಡಲು ಸಾಧ್ಯವಾಗದಿದ್ದರೆ ಅಂತಹ ವೆಂಟಿಲೇಟರ್‍ಗಳನ್ನು ಜಿಲ್ಲಾಸ್ಪತ್ರೆಗಳಲ್ಲಿ ಬಳಕೆ ಕುರಿತು ಪರಿಶೀಲಿಸಬೇಕು ಎಂದು ಅಧಿಕಾರಿಗಳಿಗೆ ಸಲಹೆ ನೀಡಿದರು.

ವರದಿ ತಕ್ಷಣ ನೀಡಲು ಸಲಹೆ: ಸೋಂಕು ತಪಾಸಣೆಗೆ ಮಾದರಿಯನ್ನು ಸಂಗ್ರಹಿಸಿದ ನಂತರ ಆದಷ್ಟು ಬೇಗನೇ ತಪಾಸಣಾ ವರದಿ ನೀಡಬೇಕು. ಇದರಿಂದ ಸೋಂಕು ಹರಡುವಿಕೆಯನ್ನು ನಿಯಂತ್ರಿಸುವುದು ಸಾಧ್ಯವಾಗಲಿದೆ. ಆದುದರಿಂದ ಸಾಧ್ಯವಾದರೆ 24 ಗಂಟೆಯೊಳಗೆ ವರದಿ ನೀಡಲು ಕ್ರಮವಹಿಸಬೇಕು. ಬಿಮ್ಸ್‍ನಲ್ಲಿ ಅಗತ್ಯವಿರುವ ವೈದ್ಯರು, ತಂತ್ರಜ್ಞರು ಹಾಗೂ ವೈದ್ಯಕೀಯ ಸಿಬ್ಬಂದಿ ನೇಮಕಾತಿಗೆ ಸರಕಾರ ಈಗಾಗಲೇ ಅನುಮತಿ ನೀಡಿರುತ್ತದೆ. ನೇಮಕಾತಿ ಪ್ರಕ್ರಿಯೆ ಪೂರ್ಣಗೊಳಿಸಬೇಕು. ಬಿಮ್ಸ್‍ಗೆ ಇನ್ನೂ ಹೆಚ್ಚಿನ ಆಕ್ಸಿಜನ್ ಹಾಗೂ ಸಿಬ್ಬಂದಿ ಒದಗಿಸಿದರೆ ಗರಿಷ್ಠ 822 ಬೆಡ್‍ಗಳನ್ನು ಒದಗಿಸಬಹುದು. ಇದರಿಂದ ಸಮಸ್ಯೆಯನ್ನು ಪರಿಹರಿಸಬಹುದು ಎಂದು ತಿಳಿಸಿದರು.

ಮಾರ್ಗಸೂಚಿ ಕಟ್ಟುನಿಟ್ಟಾಗಿ ಜಾರಿಗೆ ಸೂಚನೆ: ನಾಳೆಯಿಂದ ಕಟ್ಟುನಿಟ್ಟಿನ ಕ್ರಮಕ್ಕೆ ಪೊಲೀಸ್ ಆಯುಕ್ತರು ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಮುಂದಾಗಬೇಕು ಎಂದರು. ಸಭೆಯಲ್ಲಿ ಸಂಸದೆ ಮಂಗಳಾ ಅಂಗಡಿ, ನಗರ ಪೊಲೀಸ್ ಆಯುಕ್ತ ಡಾ.ಕೆ.ತ್ಯಾಗರಾಜನ್, ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ದರ್ಶನ್, ಎಸ್ಪಿ ಲಕ್ಷ್ಮಣ ನಿಂಬರಗಿ, ಅಪರ ಜಿಲ್ಲಾಧಿಕಾರಿ ಯೋಗೇಶ್ವರ್, ಮಹಾನಗರ ಪಾಲಿಕೆಯ ಆಯುಕ್ತ ಜಗದೀಶ್, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಬಾಲಕೃಷ್ಣ ತುಕ್ಕಾರ ಸೇರಿದಂತೆ ಇನ್ನಿತರ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News