ಕೊರೋನ ಮೂರನೆ ಅಲೆ ನಿಯಂತ್ರಣಕ್ಕೆ ಟಾಸ್ಕ್ ಫೋರ್ಸ್ ರಚನೆಗೆ ಸಿಎಂ ಸೂಚನೆ

Update: 2021-05-10 16:31 GMT

ಬೆಂಗಳೂರು, ಮೇ 10: ಮಹಾಮಾರಿ ಕೊರೋನ ವೈರಸ್ ಸೋಂಕಿನ ಮೂರನೆ ಅಲೆಗೆ ನಿಯಂತ್ರಣಕ್ಕೆ ಈಗಿನಿಂದಲೆ ಸಿದ್ಧರಾಗಬೇಕಿದ್ದು, ಅದಕ್ಕೊಂದು ಟಾಸ್ಕ್ ಫೋರ್ಸ್ ಕಮಿಟಿ ಮಾಡಬೇಕು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಇಂದಿಲ್ಲಿ ಸೂಚಿಸಿದ್ದಾರೆ.

ಸೋಮವಾರ ಸಿಎಂ ಅಧಿಕೃತ ನಿವಾಸಿ ಕಾವೇರಿಯಲ್ಲಿ ಕೋವಿಡ್-19 ಸೋಂಕು ನಿಯಂತ್ರಣ ಸಂಬಂಧ ಸಚಿವರು ಹಾಗೂ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ಶಾಸಕರು ಹಾಗು ಸಚಿವರು ತಮ್ಮ ತಮ್ಮ ಕ್ಷೇತ್ರದಲ್ಲಿ ವಾಸ್ತವ್ಯ ಮಾಡಿ ಜಿಲ್ಲೆಗಳ ಕರೋನ ಪರಿಸ್ಥಿತಿ ಹತೋಟಿಗೆ ತರಲು ಎಲ್ಲರೂ ಒಗ್ಗಟ್ಟಿನಿಂದ ಶ್ರಮಿಸಬೇಕು ಎಂದು ಇದೇ ಸಂದರ್ಭದಲ್ಲಿ ಕರೆ ನೀಡಿದರು

ಕೋವಿಡ್-19 ನಿಯಂತ್ರಿಸಲು ಸಚಿವರುಗಳಿಗೆ ನೀಡಿರುವ ಜವಾಬ್ದಾರಿಯ ಅನುಸಾರ ಎಲ್ಲಿಯೂ ಯಾವುದೇ ರೀತಿಯ ಕೊರತೆ ಆಗದಂತೆ ನೋಡಿಕೊಳ್ಳಬೇಕು. ಸೋಂಕು ನಿಯಂತ್ರಣಕ್ಕೆ ಹೇರಿರುವ ಲಾಕ್‍ಡೌನ್ ಸಂದರ್ಭದಲ್ಲಿ ಕಟ್ಟುನಿಟ್ಟಿನಿಂದ ಪಾಲಿಸಬೇಕು. ಜನರು ಅನಗತ್ಯವಾಗಿ ಓಡಾಡುವುದನ್ನು ತಪ್ಪಿಸಬೇಕು. ತುರ್ತು ಅಗತ್ಯವಿರುವ ರೋಗಿಗಳಿಗೆ ಬೆಡ್ ಹಂಚಿಕೆಗೆ ಕ್ರಮವಹಿಸುವುದು ಮತ್ತು ರೆಮ್‍ಡಿಸಿವಿರ್ ಡ್ರಗ್ ಪೂರೈಕೆಯನ್ನು ಅಗತ್ಯತೆಗನುಸಾರವಾಗಿ ಸರಬರಾಜು ಮಾಡಲು ಕ್ರಮ ತೆಗೆದುಕೊಳ್ಳಬೇಕು ಎಂದು ಅವರು ಸೂಚಿಸಿದರು.

ಖಾಸಗಿ ಆಸ್ಪತ್ರೆಗಳ ಬೆಡ್‍ಗಳ ಬಗ್ಗೆ ನಿಗಾ ಇಡಬೇಕು. ಅಲ್ಲದೆ, ಆಕ್ಸಿಜನ್, ರೆಮ್‍ಡಿಸಿವಿರ್ ಹಾಗೂ ಬೆಡ್ ಸೇರಿದಂತೆ ಇತರೆ ವಿಷಯಗಳಲ್ಲಿ ಅಕ್ರಮ ಉಂಟಾದರೆ ಕೂಡಲೇ ಕ್ರಮ ಕೈಗೊಳ್ಳಲು ಆದೇಶಿಸಿದರು. ವಾರ್ ರೂಮ್‍ಗಳು ಇನ್ನಷ್ಟು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸುವಂತೆ ಮಾಡಬೇಕು. ಹಂತ-ಹಂತವಾಗಿ ವೈದ್ಯಕೀಯ ಕಾಲೇಜುಗಳಿಗೆ ಮತ್ತು ಆಸ್ಪತ್ರೆಗಳಿಗೆ ಆಕ್ಸಿಜನ್ ಜನರೇಟರ್ ಪ್ಲಾಂಟ್ ಹಾಕಲು ಈಗಿನಿಂದಲೆ ಕೆಲಸ ಆರಂಭಿಸಬೇಕು ಎಂದು ಯಡಿಯೂರಪ್ಪ ತಿಳಿಸಿದರು.

ಸಭೆಯಲ್ಲಿ ಕಂದಾಯ ಸಚಿವ ಆರ್.ಅಶೋಕ್, ಅರಣ್ಯ ಸಚಿವ ಅರವಿಂದ ಲಿಂಬಾವಳಿ, ಉಪಮುಖ್ಯಮಂತ್ರಿ ಡಾ.ಅಶ್ವತ್ಥ ನಾರಾಯಣ, ಸರಕಾರದ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್ ಸೇರಿದಂತೆ ವಿವಿಧ ಇಲಾಖೆ ಹಿರಿಯ ಅಧಿಕಾರಿಗಳು ಹಾಜರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News