×
Ad

ಸಾರ್ವಜನಿಕರ ಮೇಲೆ ಪೊಲೀಸರು ಅನಗತ್ಯ ಬಲಪ್ರಯೋಗ ಮಾಡುವುದು ಬೇಡ: ಹೈಕೋರ್ಟ್

Update: 2021-05-11 17:19 IST

ಬೆಂಗಳೂರು, ಮೇ 11: ಕೋವಿಡ್ ಮಾರ್ಗಸೂಚಿಗಳು ಹಾಗೂ ಲಾಕ್‍ಡೌನ್ ಜಾರಿಗಾಗಿ ಪೊಲೀಸರು ಅನಗತ್ಯ ಬಲ ಪ್ರಯೋಗ ಮಾಡುವುದು ಬೇಡ ಎಂದು ಹೈಕೋರ್ಟ್ ರಾಜ್ಯ ಸರಕಾರಕ್ಕೆ ಸೂಚಿಸಿದೆ.

ಕೋವಿಡ್ ನಿಯಂತ್ರಣ ಹಾಗೂ ಚಿಕಿತ್ಸೆಗೆ ಸಂಬಂಧಿಸಿದಂತೆ ಸಲ್ಲಿಸಲಾಗಿರುವ ಹಲವು ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕ ನೇತೃತ್ವದ ವಿಭಾಗೀಯ ನ್ಯಾಯಪೀಠ ಈ ಸೂಚನೆ ನೀಡಿದೆ.

ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು ಪೀಠಕ್ಕೆ ಮಾಹಿತಿ ನೀಡಿ, ಪೊಲೀಸರು ಸಾರ್ವಜನಿಕರ ಮೇಲೆ ಅನಗತ್ಯ ಬಲ ಪ್ರಯೋಗ ಮಾಡುತ್ತಿದ್ದಾರೆ. ಕೋವಿಡ್ ಮಾರ್ಗಸೂಚಿಗಳು ಹಾಗೂ ಲಾಕ್‍ಡೌನ್ ನಿಯಮಗಳನ್ನು ಜಾರಿಗೊಳಿಸಲು ರಸ್ತೆಯಲ್ಲಿ ಓಡಾಡುವವರ ಮೇಲೆ ಲಾಠಿ ಪ್ರಹಾರ ಮಾಡುತ್ತಿದ್ದಾರೆ. ಕೋವಿಡ್ ರೋಗಿಯೊಬ್ಬರ ಮೇಲೂ ಹಲ್ಲೆ ಮಾಡಿದ್ದಾರೆ ಎಂದು ಪೀಠಕ್ಕೆ ತಿಳಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ಪೀಠ, ಕಳೆದ 2020ರ ಮಾ.30ರಂದು ಅನಗತ್ಯವಾಗಿ ಬಲಪ್ರಯೋಗ ಮಾಡಬಾರದು ಎಂದು ಹೈಕೋರ್ಟ್ ನಿರ್ದೇಶಿಸಿದೆಯಲ್ಲವೇ ಎಂದು ಪ್ರಶ್ನಿಸಿತು. ಪೀಠಕ್ಕೆ ಉತ್ತರಿಸಿದ ಅಡ್ವಕೇಟ್ ಜನರಲ್ ಪ್ರಭುಲಿಂಗ ನಾವದಗಿ ಎಲ್ಲಿಯೂ ಬಲಪ್ರಯೋಗ ಮಾಡುತ್ತಿಲ್ಲ. ಕೋವಿಡ್ ಬಗ್ಗೆ ಜಾಗೃತಿ ಮೂಡಿಸಲಾಗುತ್ತಿದೆ. ಹಾಗೊಂದು ವೇಳೆ ಪೊಲೀಸರಿಂದ ಸಮಸ್ಯೆಯಾಗುತ್ತಿದ್ದರೆ, ಆ ಬಗ್ಗೆ ರಾಜ್ಯ ಪೊಲೀಸ್ ಮಹಾನಿರ್ದೇಶಕರ ಜೊತೆ ಚರ್ಚಿಸಿ, ಅಗತ್ಯ ಕ್ರಮ ಕೈಗೊಳ್ಳುವಂತೆ ತಿಳಿಸಲಾಗುವುದು ಎಂದು ಪೀಠಕ್ಕೆ ತಿಳಿಸಿದರು.

ಈ ಸಂಬಂಧ ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚಿಸಿದ ಪೀಠ, ನಾಗರಿಕರು ಕೋವಿಡ್ ಮಾರ್ಗಸೂಚಿಗಳನ್ನು ಪಾಲಿಸುವ ಮೂಲಕ ಸರಕಾರಕ್ಕೆ ಅಗತ್ಯ ಸಹಕಾರ ನೀಡಬೇಕು. ಇದೇ ವೇಳೆ ಸರಕಾರ ಮಾರ್ಗಸೂಚಿಗಳನ್ನು ಜಾರಿ ಮಾಡುವ ವೇಳೆ ಅನಗತ್ಯ ಬಲಪ್ರಯೋಗ ಮಾಡದಂತೆ ಪೊಲೀಸರಿಗೆ ನಿರ್ದೇಶಿಸಬೇಕು. ಈ ಸಂಬಂಧ ಮುಂದಿನ ವಿಚಾರಣೆ ವೇಳೆ ಸ್ಪಷ್ಟನೆ ನೀಡಬೇಕು ಎಂದು ಸೂಚಿಸಿ ಮೇ 13ಕ್ಕೆ ವಿಚಾರಣೆ ಮುಂದೂಡಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News