ತಾಲೂಕು ಆಸ್ಪತ್ರೆಗಳಲ್ಲಿ ವೈದ್ಯರ ಕೊರತೆ ನೀಗಿಸಲು ಕ್ರಮ: ಸಚಿವ ಡಾ.ಸುಧಾಕರ್
ಬೆಂಗಳೂರು, ಮೇ 12: ತಾಲೂಕು ಆಸ್ಪತ್ರೆಗಳಲ್ಲಿ ವೈದ್ಯರ ಕೊರತೆ ನೀಗಿಸಲು ತುರ್ತು ಕ್ರಮ ಕೈಗೊಳ್ಳಲಾಗುವುದು. 3-4 ದಿನಗಳಲ್ಲಿ 780 ತಜ್ಞ ವೈದ್ಯರ ಸಹಿತ 2,480 ವೈದ್ಯಕೀಯ ಸಿಬ್ಬಂದಿಯ ನೇರ ನೇಮಕಾತಿ ಪ್ರಕ್ರಿಯೆ ಪೂರ್ಣಗೊಳ್ಳಲಿದೆ. ಇದರಿಂದ ತಾಲೂಕುಗಳಲ್ಲಿ ವೈದ್ಯರ ಕೊರತೆ ನೀಗಲಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.
ಅವರಿಂದು ಬೆಳಗ್ಗೆ ಬೆಂಗಳೂರು ಗ್ರಾಮಾಂತರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಯ ಪ್ರವಾಸಕ್ಕೆ ತೆರಳುವ ಮುನ್ನ ಮಾಧ್ಯಮಗಳ ಜೊತೆ ಮಾತನಾಡುತ್ತಿದ್ದರು.
‘ತಾಲೂಕು ಆಸ್ಪತ್ರೆಗಳಲ್ಲಿರುವ ಎಲ್ಲ ಆರೂ ವೆಂಟಿಲೇಟರ್‌ಗಳು 3 ದಿನಗಳಲ್ಲಿ ಕಾರ್ಯನಿರ್ವಹಿಸುವಂತೆ ಮಾಡಲು ಕ್ರಮ ತೆಗೆದುಕೊಳ್ಳಲು ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ಅನೆಸ್ತೀಶಿಯಾ, ಫಿಸಿಶಿಯನ್ ಕೊರತೆ ಇರುವ ಕಡೆ ಸಮೀಪದ ವೈದ್ಯಕೀಯ ಕಾಲೇಜು ಆಸ್ಪತ್ರೆಗಳಿಂದ ತಾತ್ಕಾಲಿಕ ವ್ಯವಸ್ಥೆಗೆ ಸೂಚಿಸಲಾಗಿದೆ ಎಂದು ಸಚಿವರು ತಿಳಿಸಿದರು.
‘ಬ್ಲ್ಯಾಕ್ ಫಂಗಸ್: ವರದಿ ಬಳಿಕ ಚಿಕಿತ್ಸೆ ಬಗ್ಗೆ ತೀರ್ಮಾನ
‘ಬ್ಲ್ಯಾಕ್ ಫಂಗಸ್ ಬಗ್ಗೆ ಸಂಪೂರ್ಣವಾಗಿ ಅಧ್ಯಯನ ಮಾಡಿ ಎರಡು ದಿನಗಳ ಒಳಗೆ ಸರ್ಕಾರಕ್ಕೆ ವರದಿ ನೀಡುವಂತೆ ಕೋವಿಡ್ ತಾಂತ್ರಿಕ ಸಲಹಾ ಸಮಿತಿಗೆ ಸೂಚಿಸಿದ್ದೇನೆ. ವರದಿ ಬಂದ ನಂತರ ಚಿಕಿತ್ಸಾ ವಿಧಾನದ ಬಗ್ಗೆ ತೀರ್ಮಾನಿಸಲಾಗುವುದು ಎಂದು ಆರೋಗ್ಯ ಸಚಿವರು ತಿಳಿಸಿದರು.