ಬೆಡ್ ಬ್ಲಾಕಿಂಗ್ ಪ್ರಕರಣ: ತೇಜಸ್ವಿ ಸೂರ್ಯ ವಿರುದ್ಧದ ಅರ್ಜಿ ವಿಚಾರಣೆಗೆ ಹೈಕೋರ್ಟ್ ನಿರಾಕರಣೆ

Update: 2021-05-12 11:53 GMT

ಬೆಂಗಳೂರು, ಮೇ 12: ಬಿಬಿಎಂಪಿ ಕೋವಿಡ್ ವಾರ್ ರೂಮ್‍ಗಳಲ್ಲಿ ನಡೆದಿದೆ ಎನ್ನಲಾದ ಬೆಡ್ ಬ್ಲಾಕಿಂಗ್ ಪ್ರಕರಣದಲ್ಲಿ 17 ಮಂದಿ ನೌಕರರನ್ನು ಅಮಾನತು ಮಾಡಿದ್ದನ್ನು ಪ್ರಶ್ನಿಸಿ ಸಂಸದ ತೇಜಸ್ವಿ ಸೂರ್ಯ ವಿರುದ್ಧ ಸಲ್ಲಿಸಿದ್ದ ಅರ್ಜಿಯ ವಿಚಾರಣೆಗೆ ಹೈಕೋರ್ಟ್ ನಿರಾಕರಿಸಿದೆ.

ಬೆಡ್ ಬ್ಲಾಕಿಂಗ್ ಪ್ರಕರಣದಲ್ಲಿ ನೌಕರರನ್ನು ಅಮಾನತು ಮಾಡಿದ ಕ್ರಮ ಪ್ರಶ್ನಿಸಿ ನಗರದ ಯುವ ಕಾಂಗ್ರೆಸ್‍ನ ವೈ.ಬಿ.ಶ್ರೀವತ್ಸ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.

ಅರ್ಜಿದಾರರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯಲ್ಲಿನ ವಿಚಾರಗಳು ರಾಜಕೀಯ ಪ್ರೇರಿತವಾಗಿವೆ. ಹೀಗಾಗಿ ಅರ್ಜಿ ವಿಚಾರಣೆ ನಡೆಸುವುದು ಸೂಕ್ತವಲ್ಲ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟು ಅರ್ಜಿಯನ್ನು ಇತ್ಯರ್ಥಪಡಿಸಿದೆ.

ಈ ವೇಳೆ ಅರ್ಜಿದಾರರ ಪರ ವಕೀಲರು ವಾದಿಸಿ, ಒಂದೇ ಕೋಮಿನ ನೌಕರರನ್ನು ಗುರಿಯಾಗಿಸಿಕೊಂಡು ಸಂಸದರು ಮಾಡಿರುವ ಆರೋಪದ ಮೇರೆಗೆ ನೌಕರರನ್ನು ಅಮಾನತು ಮಾಡಲಾಗಿದೆ. ಇದು ಕಾನೂನು ಬಾಹಿರ ಕ್ರಮ. ಹೀಗಾಗಿ ಸಂಸದ ತೇಜಸ್ವಿ ಸೂರ್ಯ ವಿರುದ್ಧ ಕ್ರಮ ಕೈಗೊಳ್ಳುವಂತೆ ಸರಕಾರಕ್ಕೆ ನಿರ್ದೇಶಿಸಿಬೇಕು ಎಂದು ಪೀಠಕ್ಕೆ ಮನವಿ ಮಾಡಿದರು.

ವಕೀಲರ ವಾದ ಆಲಿಸಿದ ನ್ಯಾಯಪೀಠ, ಈಗಾಗಲೇ ಬೆಡ್ ಬ್ಲಾಕಿಂಗ್ ಪ್ರಕರಣ ಸಂಬಂಧ ಎಫ್‍ಐಆರ್ ದಾಖಲಾಗಿದ್ದು, ಈ ಸಂಬಂಧ ತನಿಖೆ ನಡೆಯುತ್ತಿದೆ. ಹೈಕೋರ್ಟ್ ಗೆ ವರದಿ ಸಲ್ಲಿಸುವಂತೆ ಸರಕಾರಕ್ಕೆ ಸೂಚಿಸಲಾಗಿದೆ. ಅರ್ಜಿದಾರರು ರಾಜಕೀಯ ಪ್ರೇರಿತವಾಗಿ ಅರ್ಜಿ ಸಲ್ಲಿಸಿರುವಂತೆ ಕಾಣುತ್ತದೆ. ಹೀಗಾಗಿ ಈ ಅರ್ಜಿಯನ್ನು ವಿಚಾರಣೆ ನಡೆಸುವ ಅಗತ್ಯವಿಲ್ಲ ಎಂದು ತಿಳಿಸಿ ಅರ್ಜಿ ಇತ್ಯರ್ಥಪಡಿಸಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News