ಕ್ರೀಡಾ ವಿದ್ಯಾರ್ಥಿವೇತನಕ್ಕೆ ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ
ಉಡುಪಿ, ಮೇ 14: ಕ್ರೀಡಾ ವಿದ್ಯಾರ್ಥಿ ವೇತನ ಯೋಜನೆಯಡಿ ರಾಜ್ಯದ ಪ್ರತಿಭಾವಂತ ಕ್ರೀಡಾಪಟುಗಳನ್ನು ಪ್ರೋತ್ಸಾಹಿಸುವ ಸಲುವಾಗಿ ಮಾಧ್ಯಮಿಕ/ಪ್ರೌಢಶಾಲಾ ವಿದ್ಯಾರ್ಥಿ ಕ್ರೀಡಾಪಟುಗಳಿಗೆ (6 ರಿಂದ 10ನೇ ತರಗತಿ) ವಾರ್ಷಿಕ 10,000ರೂ.ನಂತೆ ಪ್ರೋತ್ಸಾಹಿತ ಕ್ರೀಡಾ ವಿದ್ಯಾರ್ಥಿ ವೇತನವನ್ನು ನೀಡುವ ಸಲುವಾಗಿ ಅರ್ಹ ಕ್ರೀಡಾಪಟುಗಳಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅರ್ಜಿದಾರರು 2020-21ನೇ ಸಾಲಿನಲ್ಲಿ ಮಾಧ್ಯಮಿಕ/ಪ್ರೌಢಶಾಲಾ ವಿದ್ಯಾರ್ಥಿಯಾಗಿರಬೇಕು. ಅರ್ಜಿದಾರರು ರಾಜ್ಯ ಕ್ರೀಡಾ ಪ್ರಾಧಿಕಾರದಲ್ಲಿ ನೊಂದಾಯಿತ ಕ್ರೀಡಾಸಂಸ್ಥೆಗಳು 2020ರ ಎ.1ರಿಂದ 2021ರ ಮಾ.31ರವರೆಗೆ ನಡೆಸಿದ ರಾಜ್ಯ ಮಟ್ಟದ ಸ್ಪರ್ಧೆಗಳಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಪಡೆದಿರಬೇಕು ಅಥವಾ ಭಾರತ ಸರ್ಕಾರದಿಂದ ಮಾನ್ಯತೆ ಪಡೆದ ಅಧಿಕೃತ ಕ್ರೀಡಾ ಸಂಸ್ಥೆಗಳು ಆಯೋಜಿಸಿದ ರಾಷ್ಟ್ರ ಮಟ್ಟದ ಕ್ರೀಡಾಕೂಟಗಳಲ್ಲಿ ಭಾಗವಹಿಸಿರಬೇಕು.
ರಾಷ್ಟ್ರೀಯ ಖೇಲೋ ಇಂಡಿಯಾ ಕ್ರೀಡಾಕೂಟದಲ್ಲಿ ರಾಜ್ಯ ತಂಡವನ್ನು ಪ್ರತಿನಿಧಿಸಿದ ಕ್ರೀಡಾಪಟುಗಳು, ಸಾರ್ವಜನಿಕ ಶಿಕ್ಷಣ ಇಲಾಖೆ ನಡೆಸುವ ಸ್ಕೂಲ್ ಗೇಮ್ಸ್ ಫೆಡರೇಷನ್ ಆಫ್ ಇಂಡಿಯಾ ಯೋಜನೆಯಡಿ ನಡೆಸಿದ ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದವರು, ರಾಷ್ಟ್ರೀಯ ಶಾಲಾ ಕ್ರೀಡಾಕೂಟದಲ್ಲಿ ರಾಜ್ಯ ತಂಡವನ್ನು ಪ್ರತಿನಿಧಿಸಿದ ಕ್ರೀಡಾಪಟುಗಳು ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿಗಳನ್ನು ಸಲ್ಲಿಸಲು ಮೇ 25 ಕೊನೆಯ ದಿನ. ಅರ್ಹ ಕ್ರೀಡಾಪಟುಗಳು ನಿಗದಿತ ಅವಧಿಯೊಳಗೆ ತಮ್ಮ ಅರ್ಜಿಗಳನ್ನು ಇಲಾಖಾ ವೆಬ್‌ಸೈಟ್ http://serviceonline.gov.in/karnataka - ಆನ್‌ಲೈನ್ ಮೂಲಕ ಸಲ್ಲಿಸುವಂತೆ ಸೂಚಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಡಾ,ರೋಶನ್ ಕುಮಾರ್ ಶೆಟ್ಟಿ (0820-2521324, 94808-86467) ಇವರನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.