ಎಲ್ಲಾ ಜಿಲ್ಲಾ ಕೇಂದ್ರಗಳಲ್ಲೂ 'ಆಕ್ಸಿಜನ್ ಬಸ್'ಗೆ ಸರಕಾರ ಸಿದ್ಧತೆ: ಚಿಕ್ಕಮಗಳೂರಿನಲ್ಲಿ ಸೋಮವಾರದಿಂದ ಸೇವೆ ಆರಂಭ

Update: 2021-05-16 13:09 GMT
ಸಾಂದರ್ಭಿಕ ಚಿತ್ರ

ಬೆಂಗಳೂರು, ಮೇ 16: ಬೆಂಗಳೂರಿನಲ್ಲಿ ಬಿಎಂಟಿಸಿ ವತಿಯಿಂದ ಪ್ರಾರಂಭಿಸಲಾದ ಆಕ್ಸಿಜನ್ ಬಸ್ ಸೇವೆಯು ಅತ್ಯಂತ ಯಶಸ್ವಿಯಾಗಿರುವ ಹಿನ್ನೆಲೆಯಲ್ಲಿ ಈ ಸೇವಾ ಸೌಲಭ್ಯವನ್ನು ಜಿಲ್ಲಾ ಕೇಂದ್ರಗಳಿಗೂ ವಿಸ್ತರಿಸಲಾಗುತ್ತಿದೆ. ಇದರ ಅಂಗವಾಗಿ ಚಿಕ್ಕಮಗಳೂರಿನಲ್ಲಿಯೂ ಕೆಎಸ್ಸಾರ್ಟಿಸಿಯು ಸ್ವಯಂ ಸೇವಾ ಸಂಸ್ಥೆಗಳ ಸಹಭಾಗಿತ್ವದಲ್ಲಿ ನಾಳೆಯಿಂದ(ಸೋಮವಾರ) ಬಸ್ಸಿನಲ್ಲಿಯೇ ಆಕ್ಸಿಜನ್ ಘಟಕವನ್ನು ಪ್ರಾರಂಭಿಸಲು ಮುಂದಾಗಿದೆ ಎಂದು ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ತಿಳಿಸಿದ್ದಾರೆ.

ಪ್ರಸ್ತುತ ಬಹುತೇಕ ಎಲ್ಲ ಆಸ್ಪತ್ರೆಗಳಲ್ಲೂ ಕೋವಿಡ್ ರೋಗಿಗಳ ದಟ್ಟಣೆ ಹೆಚ್ಚಾಗಿದೆ. ಇದರಿಂದಾಗಿ ಹೊಸ ರೋಗಿಗಳು ಆಸ್ಪತ್ರೆಗೆ ಬಂದಾಗ ಅವರಿಗೆ ಆಸ್ಪತ್ರೆಯಲ್ಲಿ ಆಕ್ಸಿಜನ್ ನೀಡುವುದು ವಿಳಂಬವಾಗಿ ತೀವ್ರ ತೊಂದರೆಯಾಗುತ್ತಿದೆ ಎಂದು ಅವರು ಹೇಳಿದ್ದಾರೆ.

ಅಷ್ಟೇ ಅಲ್ಲ, ಆಸ್ಪತ್ರೆಯಲ್ಲಿ ಸ್ಥಳಾಭಾವದಿಂದ ರೋಗಿಗಳಿಗೆ ಅಲ್ಲಿ ಕುಳಿತು ಕಾಯುವುದಕ್ಕೂ ಕಷ್ಟವಾಗುತ್ತಿದೆ. ಇದನ್ನು ತಪ್ಪಿಸುವ ಉದ್ದೇಶದಿಂದ ಸಾರ್ವಜನಿಕರಿಗೆ ಉಚಿತವಾಗಿ ಬಸ್ಸಿನಲ್ಲಿಯೇ ತುರ್ತು ಆಕ್ಸಿಜನ್ ಸೌಲಭ್ಯ ಒದಗಿಸಲು ಈ ನೂತನ ವ್ಯವಸ್ಥೆ ಕಲ್ಪಿಸಲಾಗುತ್ತಿದೆ ಎಂದು ಲಕ್ಷ್ಮಣ ಸವದಿ ವಿವರಿಸಿದ್ದಾರೆ.

ಆಕ್ಸಿಜನ್ ಪೂರೈಸಲು ಅನುಕೂಲವಾಗುವಂತೆ ವಿಶೇಷವಾಗಿ ವಿನ್ಯಾಸಗೊಳಿಸಿರುವ ಈ ಕೆಎಸ್ಸಾರ್ಟಿಸಿ ಬಸ್ಸನ್ನು ಚಿಕ್ಕಮಗಳೂರಿನ ಸರಕಾರಿ ಆಸ್ಪತ್ರೆಯ ಆವರಣದಲ್ಲಿ ನಿಲ್ಲಿಸಲಾಗುವುದು. ಹೊರಗಿನಿಂದ ಕೋವಿಡ್ ಪೀಡಿತರು ಬಂದಾಗ ತಕ್ಷಣಕ್ಕೆ ಆಸ್ಪತ್ರೆಯ ಒಳಗೆ ಆಕ್ಸಿಜನ್ ಸಿಗದಿದ್ದರೆ ಆತಂಕ ಪಡದೇ ಈ ಆಕ್ಸಿಜನ್ ಮೊಬೈಲ್ ಬಸ್ಸಿನಲ್ಲಿಯೇ ತುರ್ತಾಗಿ ವಿಶ್ರಮಿಸಿ ಅಗತ್ಯ ಆಕ್ಸಿಜನ್ ಪಡೆದುಕೊಳ್ಳಲು ಸಾಧ್ಯವಾಗುವಂತೆ ವೈದ್ಯಕೀಯ ಉಪಕರಣಗಳನ್ನು ಇದರಲ್ಲಿ ಅಳವಡಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ಕೆಎಸ್ಸಾರ್ಟಿಸಿಯ ಈ ನೂತನ ಸೇವೆಯನ್ನು ಖಾಸಗಿ ಸಂಸ್ಥೆಗಳಾದ ನಾಯೋನಿಕ ಐ ಕೇರ್ ಟ್ರಸ್ಟ್, ಸಿಟ್ರಿಕ್ ಇಂಡಿಯಾ ಮತ್ತು ಜಿಲ್ಲಾ ಆಡಳಿತಗಳ ಸಹಯೋಗದಿಂದ ಪ್ರಾರಂಭಿಸಲಾಗುತ್ತಿದೆ. ಏಕಕಾಲಕ್ಕೆ ಒಟ್ಟು 8 ಮಂದಿ ರೋಗಿಗಳಿಗೆ ಈ ಬಸ್ಸಿನಲ್ಲಿ ಆಕ್ಸಿಜನ್ ನೀಡುವ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಲಕ್ಷ್ಮಣ ಸವದಿ ತಿಳಿಸಿದ್ದಾರೆ.

ಚಾಲಕರು ಮತ್ತು ಸಿಬ್ಬಂದಿಗಳಿಗೆ ಸೋಂಕು ಹರಡದಂತೆ ವಿಶೇಷ ವಿನ್ಯಾಸದೊಂದಿಗೆ ಈ 'ಆಕ್ಸಿಜನ್ ಆನ್ ವ್ಹೀಲ್ಸ್' ಬಸ್ಸನ್ನು ಸಜ್ಜುಗೊಳಿಸಲಾಗಿದೆಯಲ್ಲದೇ, ಸ್ಯಾನಿಟೈಸರ್, ಮಾಸ್ಕ್ ಗಳನ್ನು ಇದರಲ್ಲಿ ಒದಗಿಸಲಾಗುವುದು. ಪ್ರತಿ ರೋಗಿಗಳೂ ಸಾಮಾನ್ಯವಾಗಿ 2ರಿಂದ 4 ಗಂಟೆಯ ಅವಧಿಯಲ್ಲಿ ಈ ಸೌಲಭ್ಯ ದಿಂದ ತಮಗೆ ಬೇಕಾದ ಅಗತ್ಯ ಪ್ರಮಾಣದ ಆಕ್ಸಿಜನ್ ಪಡೆದುಕೊಳ್ಳಬಹುದಾಗಿದೆ ಎಂದು ಅವರು ಹೇಳಿದ್ದಾರೆ.

ಈ ರೀತಿಯ ವಿಶೇಷ ಆಕ್ಸಿಜನ್ ಬಸ್ ಸೇವೆಯನ್ನು ಬೇಡಿಕೆಗೆ ಅನುಗುಣವಾಗಿ ಮತ್ತಷ್ಟು ಜಿಲ್ಲೆಗಳಿಗೆ ವಿಸ್ತರಿಸಲು ಸಾರಿಗೆ ನಿಗಮಗಳು ಸಿದ್ಧವಿದೆ. ಕೋವಿಡ್ ಪ್ರಕರಣಗಳು ವ್ಯಾಪಕವಾಗಿ ಹಬ್ಬುತ್ತ ಆಕ್ಸಿಜನ್ ಗಾಗಿ ಜನರು ಪರಿತಪಿಸುವುದನ್ನು ತಪ್ಪಿಸಲು ಈ ಆಕ್ಸಿಜನ್ ಬಸ್ ಸೇವೆಯು  ಸಂಜೀವಿನಿಯಂತೆ ವರದಾನವಾಗಲಿದೆ ಎಂದು ಲಕ್ಷ್ಮಣ ಸವದಿ ಹೇಳಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News