ಶಿವಮೊಗ್ಗ ಜಿಲ್ಲೆಯಲ್ಲಿ ಕೋವಿಡ್ ಸಾವಿನ ಸಂಖ್ಯೆಯನ್ನು ಮುಚ್ಚಿಡಲಾಗುತ್ತಿದೆ: ಆಯನೂರು ಮಂಜುನಾಥ್ ಆರೋಪ

Update: 2021-05-17 10:26 GMT

ಶಿವಮೊಗ್ಗ, ಮೇ 17: ಜಿಲ್ಲೆಯಲ್ಲಿ ಕೋವಿಡ್‌ನಿಂದ ಮೃತಪಟ್ಟವರ ಸಂಖ್ಯೆಯನ್ನು ಮುಚ್ಚಿಡಲಾಗುತ್ತಿದೆ ಎಂಬ ವಿರೋಧ ಪಕ್ಷದ ನಾಯಕರುಗಳ ಆರೋಪಕ್ಕೆ ಪುಷ್ಟಿ ನೀಡುವಂತೆ ಆಡಳಿತ ಪಕ್ಷದ ಶಾಸಕರೇ ಈ ಬಗ್ಗೆ ಆರೋಪ ಮಾಡಿದ್ದಾರೆ.
ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್ ಈಶ್ವರಪ್ಪ ನೇತೃತ್ವದಲ್ಲಿ ನಡೆದ ಅಧಿಕಾರಿಗಳ ಸಭೆಯಲ್ಲಿ ಈ ಬಗ್ಗೆ ಪ್ರಶ್ನಿಸಿದ ವಿಧಾನ ಪರಿಷತ್ ಸದಸ್ಯ ಆಯನೂರು ಮಂಜುನಾಥ್, ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಜಿಲ್ಲಾಧಿಕಾರಿ ಅವರ ಕಣ್ಣೊರೆಸಲು ಹೀಗೆ ಮಾಡಿದ್ದೀರಾ ಎಂದು ಅಧಿಕಾರಿಗಳ ವಿರುದ್ಧ ಹರಿಹಾಯ್ದಿದ್ದಾರೆ.
ವೈದ್ಯರು ಕೇವಲ ಆರ್.ಟಿ.-ಪಿಸಿಆರ್ ಪರೀಕ್ಷೆಗೆ ಒಳಗಾಗಿ ಪಾಸಿಟಿವ್ ಬಂದವರನ್ನು ಮಾತ್ರ ಕೋವಿಡ್ ಸೋಂಕಿತರು ಎಂದು ಪರಿಗಣಿಸುತ್ತಿದ್ದಾರೆ. ಆದರೆ ಸಿಟಿ ಸ್ಕ್ಯಾನ್ ಮಾಡಿಸಿಕೊಂಡು ಕೋವಿಡ್ ಸೋಂಕು ತಗಲಿರುವುದು ದೃಢಪಟ್ಟು ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಾದವರನ್ನು ಕೋವಿಡ್ ಪಟ್ಟಿಗೆ ಸೇರಿಸುತ್ತಿಲ್ಲ. ಇದರಿಂದ ಕೋವಿಡ್ ನಿಂದ ಸಾವನ್ನಪ್ಪಿದವರ ಲೆಕ್ಕದಲ್ಲಿ ಸಮಸ್ಯೆ ಆಗುತ್ತಿದೆ. ಸಿಟಿ ಸ್ಕ್ಯಾನ್ ಪಟ್ಟಿಯಲ್ಲಿರುವ ಸೋಂಕಿತರು  ಮೃತರಾದರೆ  ಅದನ್ನು ಕೋವಿಡ್ ಸೋಂಕಿತರ ಸಾವಿನ ಸಂಖ್ಯೆಗೆ ಸೇರಿಸುತ್ತಿಲ್ಲ ಎಂದು ಆರೋಪಿಸಿದರು. ಈ  ಬಗ್ಗೆ ದಾಖಲೆಗಳನ್ನು ಕೊಡಬಲ್ಲೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಕೋವಿಡ್ ಸೋಂಕಿತರು ಚಿಕಿತ್ಸೆಗೆ ಬಂದಾಗ  ಅವರಿಗೆ ಏನೇನು ಕಾಯಿಲೆ ಇದೆ ಎಂಬುದನ್ನು  ಬರೆಸಿಕೊಳ್ಳುತ್ತಿದ್ದಾರೆ. ಒಂದು ವೇಳೆ ಅವರು ಮೃತರಾದರೆ  ಆತನಿಗೆ ಹೃದಯ ಸಂಬಂಧಿ ಕಾಯಿಲೆ, ಕಿಡ್ನಿ ಸಮಸ್ಯೆ ಇತ್ತು ಎಂದು ನೆಪ ಹೇಳಲಾಗುತ್ತಿದೆ ಎಂದು ದೂರಿದರು.
ಮೆಗ್ಗಾನ್ ಆಸ್ಪತ್ರೆ ಅವ್ಯವಸ್ಥೆಯ ಆಗರವಾಗಿದೆ. ಮೆಗ್ಗಾನ್ ಆಸ್ಪತ್ರೆಯಲ್ಲಿ ವೈದ್ಯರ ನಡುವೆ ಹೊಂದಾಣಿಕೆ ಕೊರತೆ ಇದೆ. ಇದರಿಂದ ಆಸ್ಪತ್ರೆಯಲ್ಲಿ ಅವ್ಯವಸ್ಥೆ ಆಗುತ್ತಿದೆ. ದಿನದಿಂದ ದಿನಕ್ಕೆ ಕೊರೋನ ಸೋಂಕಿತರು ಸಾವನ್ನಪ್ಪುತ್ತಿದ್ದಾರೆ ಎಂದು ದೂರಿದರು.
ಜಿಲ್ಲಾ ಆರೋಗ್ಯ ಮತ್ತು ಕುಟಂಬ ಕಲ್ಯಾಣ ಇಲಾಖೆ ಅಧಿಕಾರಿ ಡಾ.ರಾಜೇಶ್ ಸುರಗಿಹಳ್ಳಿ ಮಾತನಾಡಿ, ಎಲ್ಲಾ ಬಗೆಯ ಸಾವನ್ನು ಆಡಿಟ್ ಮಾಡುತ್ತೇವೆ. ಸಿಟಿ ಸ್ಕ್ಯಾನ್ ವಿಚಾರವನ್ನು ಆಡಿಟ್ ಮಾಡಲಿದ್ದೇವೆ ಎಂದು ತಿಳಿಸಿದರು.
ಸಿಮ್ಸ್ ನಿರ್ದೇಶಕ ಡಾ.ಸಿದ್ದಪ್ಪ ಮಾತನಾಡಿ,ಶಾಸಕರು ಸಭೆಯಲ್ಲಿ ಪ್ರಸ್ತಾಪಿಸಿರುವ ವಿಚಾರವನ್ನು ಪರಿಶೀಲನೆ ನಡೆಸಲಾಗುತ್ತದೆ ಎಂದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News